ಪಾಕಿಸ್ತಾನ: ಪ್ರಮಾಣ ವಚನಕ್ಕೆ ಭಾರತೀಯ ರಾಯಭಾರಿ
ಇಸ್ಲಾಮಾಬಾದ್: ಪಾಕಿಸ್ತಾನ ಪ್ರಧಾನಿಯಾಗಿ ನವಾಜ್ ಷರೀಫ್ ಅವರು ಬುಧವಾರ ಪ್ರಮಾಣ ವಚನ ಸ್ವೀಕರಿಸಲಿದ್ದು, ಸಮಾರಂಭದಲ್ಲಿ ಭಾರತೀಯ ರಾಯಭಾರ ಕಚೇರಿಯ ಅಧಿಕಾರಿಗಳು ಪಾಲ್ಗೊಳ್ಳುವ ಸಾಧ್ಯತೆ ಇದೆ.
ಇತ್ತೀಚೆಗೆ ನಡೆದ ಪಾಕಿಸ್ತಾನ ಸಾರ್ವತ್ರಿಕ ಚುನಾವಣೆಯಲ್ಲಿ ಜಯಗಳಿಸಿರುವ ಪಿಎಂಎಲ್-ಎನ್ ಪಕ್ಷ ತಮ್ಮ ಪ್ರಧಾನಿ ಅಭ್ಯರ್ಥಿಯಾಗಿ ಪಕ್ಷದ ಅಧ್ಯಕ್ಷ ನವಾಜ್ ಷರೀಫ್ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಿತ್ತು. ನಾಳೆ ನವಾಜ್ ಷರೀಫ್ ಅವರು ಪಾಕಿಸ್ತಾನ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದು, ಸಮಾರಂಭದಲ್ಲಿ ಭಾರತೀಯ ರಾಯಭಾರ ಕಚೇರಿಯ ಅಧಿಕಾರಗಳು ಭಾಗವಹಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.
ಅಲ್ಲದೆ ಪಾಕಿಸ್ತಾನ ರಾಯಭಾರ ಕಚೇರಿಯ ಮೂಲಗಳ ಪ್ರಕಾರ ಈ ಪ್ರಮಾಣ ವಚನ ಸಮಾರಂಭದಲ್ಲಿ ಕೇಂದ್ರ ವಿದೇಶಾಂಗ ಸಚಿವ ಸಲ್ಮಾನ್ ಖುರ್ಷೀದ್ ಅವರು ಪಾಲ್ಗೊಳ್ಳಲ್ಲಿದ್ದಾರೆ ಎಂದು ತಿಳಿದು ಬಂದಿದೆ. ಆದರೆ ಈ ಬಗ್ಗೆ ಸ್ಪಷ್ಟನೆ ನೀಡಿರುವ ಸಚಿವ ಖುರ್ಷೀದ್ ಅವರು, ಪಾಕಿಸ್ತಾನದಿಂದ ಇದುವರೆವಿಗೂ ತಮಗೆ ಅಧಿಕೃತ ಆಮಂತ್ರಣ ಬಂದಿಲ್ಲ. ನವಾಜ್ ಷರೀಫ್ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭ ಸ್ಥಳೀಯ ಕಾರ್ಯಕ್ರಮವಾಗಿದ್ದು, ತಮಗೆ ಅಧಿಕೃತ ಆಮಂತ್ರಣ ಬಂದರೆ ನಾವು ಆ ಬಗ್ಗೆ ಚಿಂತನೆ ನಡೆಸುತ್ತೇವೆ ಎಂದು ಹೇಳಿದ್ದಾರೆ.
ನಾಳಿನ ಸಮಾರಂಭದಲ್ಲಿ ಭಾರತವನ್ನು ಯಾರು ಪ್ರತಿನಿಧಿಸಲಿದ್ದಾರೆ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಅಧಿಕೃತ ಆಮಂತ್ರಣವೇ ಬಾರದಿದ್ದಾಗ ಆ ಬಗ್ಗೆ ಚಿಂತನೆ ನಡೆಸುವುದರಲ್ಲಿ ಅರ್ಥವಿಲ್ಲ. ಆದರೆ ಪಾಕಿಸ್ತಾನದಲ್ಲಿರುವ ರಾಯಭಾರ ಕಚೇರಿಯ ಅಧಿಕಾರಿಗಳು ಪ್ರಸ್ತುತ ಭಾರತದಲ್ಲಿದ್ದು, ನಾಳಿನ ಪ್ರಮಾಣ ವಚನ ಸಮಾರಂಭದಲ್ಲಿ ಅವರು ಭಾಗವಹಿಸಲಿದ್ದಾರೆ ಎಂದು ಚುಟುಕಾಗಿ ಉತ್ತರಿಸಿದರು.
ಈ ಹಿಂದೆ ಚುನಾವಣಾ ಫಲಿತಾಂಶದ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ್ದ ಪಿಎಂಎಲ್-ಎನ್ ಪಕ್ಷದ ಅಧ್ಯಕ್ಷ ನವಾಜ್ ಷರೀಫ್ ಅವರು, ಪ್ರಮಾಣ ವಚನ ಸಮಾರಂಭಕ್ಕೆ ಭಾರತದ ಪ್ರಧಾನಿ ಮನಮೋಹನ್ ಸಿಂಗ್ ಅವರನ್ನು ಆಮಂತ್ರಿಸಲು ನಾನು ತುಂಬಾ ಖುಷಿಪಡುತ್ತೇನೆ ಎಂದಿದ್ದರು. ಕಳೆದ ಮೇ ತಿಂಗಳಿನಲ್ಲಿ ನಡೆದಿದ್ದ ಸಾರ್ವತ್ರಿಕ ಚುನಾವಣೆಯಲ್ಲಿ ನವಾಜ್ ಷರೀಫ್ ಅವರ ಪಿಎಂಎಲ್-ಎನ್ ಪಕ್ಷ ಜಯಗಳಿಸಿತ್ತು.