ಕೇಜ್ರಿವಾಲ್ ಲಕ್ಷಾಧಿಶ, ಪತ್ನಿ ಕೋಟ್ಯಾಧೀಶೆ
ಮುಂಬರುವ ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಮುಖ್ಯಮಂತ್ರಿ ಶೀಲಾ ದಿಕ್ಷಿತ್ ಅವರ ವಿರುದ್ಧ ಸ್ಪರ್ಧಿಸುವುದಾಗಿ ಹೇಳಿದ ..
ನವದೆಹಲಿ: ಮುಂಬರುವ ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಮುಖ್ಯಮಂತ್ರಿ ಶೀಲಾ ದಿಕ್ಷಿತ್ ಅವರ ವಿರುದ್ಧ ಸ್ಪರ್ಧಿಸುವುದಾಗಿ ಹೇಳಿದ ಮಾರನೆ ದಿನವೇ ಆಮ್ ಆದ್ಮಿ ಪಕ್ಷ(ಎಎಪಿ)ದ ನಾಯಕ ಅರವಿಂದ್ ಕೇಜ್ರಿವಾಲ್ ಅವರು, ತಮ್ಮ ಆಸ್ತಿಯನ್ನು ಘೋಷಿಸಿದ್ದು, ಅವರು ಒಟ್ಟು 71 ಲಕ್ಷ ರುಪಾಯಿ ಮೌಲ್ಯದ ಆಸ್ತಿಯ ಒಡೆಯನಾಗಿದ್ದಾರೆ.
ಭ್ರಷ್ಟಾಚಾರ ವಿರೋಧಿ ಹೋರಾಟಗಾರ, ರಾಜಕಾರಣಿ ಅರವಿಂದ್ ಕೇಜ್ರಿವಾಲ್ ಅವರು, ನವದೆಹಲಿ ವಿಧಾನಸಭಾ ಕ್ಷೇತ್ರದಿಂದ ಪಕ್ಷದ ಟಿಕೆಟ್ ಪಡೆಯುವ ಸಂಬಂಧ ಸಲ್ಲಿಸಿರುವ ಅರ್ಜಿಯಲ್ಲಿ ತಮ್ಮ ಆಸ್ತಿಯನ್ನು ಘೋಷಿಸಿಕೊಂಡಿದ್ದಾರೆ ಎಂದು ಇಂಗ್ಲಿಷ್ ಮಾಧ್ಯಮವೊಂದು ಶನಿವಾರ ವರದಿ ಮಾಡಿದೆ.
ವರದಿಗಳ ಪ್ರಕಾರ, ಕೇಜ್ರಿವಾಲ್ ಅವರು ದೆಹಲಿಯ ಇಂದಿರಾಪುರಂನಲ್ಲಿ 70 ಲಕ್ಷ ರುಪಾಯಿ ಬೆಲೆ ಬಾಳುವ ಒಂದು ಸೈಟ್ ಹಾಗೂ ತಮ್ಮ ಬ್ಯಾಂಕ್ ಖಾತೆಯಲ್ಲಿ 1 ಲಕ್ಷ ರುಪಾಯಿ ನಗದು ಹೊಂದಿದ್ದಾರೆ. ಅವರು ತಮ್ಮ ಪತ್ನಿಯ ಹೆಸರಿನಲ್ಲಿರುವ ಆಸ್ತಿಯನ್ನು ಸಹ ಘೋಷಿಸಿದ್ದು, ಗುರಗಾಂವ್‌ನಲ್ಲಿ 1 ಕೋಟಿ ರುಪಾಯಿ ಬೆಲೆ ಬಾಳುವ 1 ಫ್ಲಾಟ್ ಹೊಂದಿರುವುದಾಗಿ ಹೇಳಿಕೊಂಡಿದ್ದಾರೆ.
ಕೇಜ್ರಿವಾಲ್ ಅವರ ಆಸ್ತಿಯ ವಿವರನ್ನು ಎಎಪಿ ತನ್ನ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದ್ದು, ಈ ಬಗ್ಗೆ ಸಾರ್ವಜನಿಕರ ಅಭಿಪ್ರಾಯಕ್ಕು ಆಹ್ವಾನ ನೀಡಿದೆ.