'ತೆಲಂಗಾಣ' ವಿವಾದ: ಉಸ್ಮಾನಿಯಾ ವಿವಿ ಪ್ರಕ್ಷುಬ್ಧ
ಹೈದರಾಬಾದ್: ಪ್ರತ್ಯೇಕ ತೆಲಂಗಾಣ ರಾಜ್ಯ ರಚನೆ ಸಂಬಂಧ ಉಸ್ಮಾನಿಯಾ ವಿವಿ ವಿದ್ಯಾರ್ಥಿಗಳು ಹಮ್ಮಿಕೊಂಡಿದ್ದ 'ಚಲೋ ಅಸೆಂಬ್ಲಿ' ರ್ಯಾಲಿಗೆ ಪೊಲೀಸರು ಅನುಮತಿ ನಿರಾಕರಿಸಿದ್ದಕ್ಕಾಗಿ ವಿದ್ಯಾರ್ಥಿಗಳು ಪ್ರತಿಭಟನೆಯಲ್ಲಿ ತೊಡಗಿದ್ದಾರೆ.
ನೆರೆಯ ಆಂಧ್ರಪ್ರದೇಶ ರಾಜ್ಯದಲ್ಲಿ ಪ್ರತ್ಯೇಕ ತೆಲಂಗಾಣ ರಾಜ್ಯ ರಚನೆ ವಿವಾದ ಮತ್ತೆ ಭುಗಿಲೆದ್ದಿದ್ದು, ವಿವಾದ ಸಂಬಂಧ ಕೇಂದ್ರ ಸರ್ಕಾರದ ಗಮನ ಸೆಳೆಯಲು ಇದೇ ಜೂನ್ 14ರಂದು ಉಸ್ಮಾನಿಯಾ ವಿಶ್ವ ವಿದ್ಯಾಲಯದ ವಿದ್ಯಾರ್ಥಿಗಳು ಹಮ್ಮಿಕೊಂಡಿದ್ದ 'ಚಲೋ ಅಸೆಂಬ್ಲಿ' ಬೈಕ್ ರ್ಯಾಲಿಗೆ ಹೈದರಾಬಾದ್ ಪೊಲೀಸರು ಅನುಮತಿ ನಿರಾಕರಿಸಿದ್ದಾರೆ. ನಗರದಲ್ಲಿ ಶಾಂತಿ ಸುವ್ಯವಸ್ಥೆ ಕದಡುವ ಅಪಾಯವಿರುವುದರಿಂದ ರ್ಯಾಲಿಗೆ ಅನುಮತಿ ನಿರಾಕರಿಸಲಾಗಿದೆ ಎಂದು ಪೊಲೀಸ್ ಉನ್ನತ ಮೂಲಗಳು ತಿಳಿಸಿವೆ.
ಆದರೆ ಪೊಲೀಸರ ಈ ನಿರ್ಧಾರದಿಂದ ಕುಪಿತಗೊಂಡಿರುವ ಉಸ್ಮಾನಿಯಾ ವಿವಿ ವಿದ್ಯಾರ್ಥಿಗಳು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ. ಅಲ್ಲದೆ ಪೊಲೀಸರ ವಿರುದ್ಧ ಘೋಷಣೆಗಳನ್ನು ಕೂಗುತ್ತಾ ವಿಶ್ವವಿದ್ಯಾಲಯಕ್ಕೆ ಸಂಪರ್ಕ ಕಲ್ಪಿಸುವ ಎಲ್ಲ ರಸ್ತೆಗಳನ್ನು ಬಂದ್ ಮಾಡಿದ್ದಾರೆ. ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಚದುರಿಸಲು ಪೊಲೀಸರು ಹರಸಾಹಸ ಪಡುತ್ತಿದ್ದು, ಪ್ರತಿಭಟನಾಕಾರರ ಮೇಲೆ ಅಶ್ರುವಾಯು ಪ್ರಯೋಗಿಸಿದ್ದಾರೆ. ಪ್ರತಿಭಟನಾ ನಿರತ ವಿದ್ಯಾರ್ಥಿಗಳು ಪೊಲೀಸರ ಮೇಲೆ ಕಲ್ಲುಗಳನ್ನು ಎಸೆಯುತ್ತಿದ್ದು, ಉಸ್ಮಾನಿಯಾ ವಿವಿ ಸುತ್ತಮುತ್ತಲ ಪ್ರದೇಶ ಪ್ರಕ್ಷುಬ್ಧ್ದಗೊಂಡಿದೆ.
ವಿದ್ಯಾರ್ಥಿಗಳ ಪ್ರತಿಭಟನೆಗೆ ವಿದ್ಯಾರ್ಥಿ ಸಂಘಟನೆಗಳು ಸಾಥ್ ನೀಡುತ್ತಿದ್ದು, ತೆಲಂಗಾಣ ವಿದ್ಯಾರ್ಥಿ ಪರಿಷತ್ತು ಪ್ರತಿಭಟನೆಯ ನೇತೃತ್ವ ವಹಿಸಿಕೊಂಡಿದೆ ಎನ್ನಲಾಗುತ್ತಿದೆ. ತೆಲಂಗಾಣ ಪ್ರತ್ಯೇಕ ರಾಜ್ಯ ರಚನೆ ಪ್ರಕ್ರಿಯೆಯನ್ನು ಕೇಂದ್ರ ಸರ್ಕಾರ ಪದೇ ಪದೇ ಮುಂದೂಡುತ್ತಿದ್ದು, ಸರ್ಕಾರದ ಗಮನ ಸೆಳೆಯಲು ತೆಲಂಗಾಣ ಜಂಟಿ ಕಾರ್ಯಪಡೆ ಸಮಿತಿಯು ವಿದ್ಯಾರ್ಥಿಗಳ 'ಚಲೋ ಅಸೆಂಬ್ಲಿ' ಕಾರ್ಯಕ್ರಮವನ್ನು ಹಮ್ಮಿಕೊಂಡಿತ್ತು.