ಕೆಪಿಎಸ್ಸಿ ನೇಮಕಾತಿ ಅಕ್ರಮ: ಸಿಐಡಿ ತನಿಖೆಗೆ ಆದೇಶ
ಗೆಜೆಟೆಡ್ ಪ್ರೊಬೆಷನರ್ಸ್ ಹುದ್ದೆಗೆ ಕರ್ನಾಟಕ ಲೋಕಸೇವಾ ಆಯೋಗ(ಕೆಪಿಎಸ್ಸಿ) ಇತ್ತೀಚೆಗೆ ನಡೆಸಿದ ಸಂದರ್ಶನ ಪರೀಕ್ಷೆಯ ಅಕ್ರಮಗಳ...
ಬೆಂಗಳೂರು: ಗೆಜೆಟೆಡ್ ಪ್ರೊಬೆಷನರ್ಸ್ ಹುದ್ದೆಗೆ ಕರ್ನಾಟಕ ಲೋಕಸೇವಾ ಆಯೋಗ(ಕೆಪಿಎಸ್ಸಿ) ಇತ್ತೀಚೆಗೆ ನಡೆಸಿದ ಸಂದರ್ಶನ ಪರೀಕ್ಷೆಯ ಅಕ್ರಮಗಳ ಕುರಿತು ಸಿಐಡಿ ತನಿಖೆಗೆ ರಾಜ್ಯ ಸರ್ಕಾರ ಗುರುವಾರ ಆದೇಶಿಸಿದೆ.
ಬೆಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಕೆಪಿಎಸ್ಸಿ ನೇಮಕಾತಿ ಅವ್ಯವಹಾರ ಪ್ರಕರಣದ ತನಿಖೆ ನಡೆಸುವಂತೆ ಸಿಐಡಿಗೆ ಆದೇಶಿಸಿದ್ದು, ಒಂದು ತಿಂಗಳ ಒಳಗಾಗಿ ಪ್ರಕರಣದ ವರದಿಯನ್ನು ಸಲ್ಲಿಸುವಂತೆ ಸೂಚಿಸಲಾಗಿದೆ ಎಂದಿದ್ದಾರೆ.
ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳಿಗೆ ಇತ್ತೀಚೆಗೆ ನಡೆದ ಮೌಖಿಕ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ಕುರಿತು ವಿಧಾನಸಭೆಯಲ್ಲಿ ನಿಯಮ 69ರಡಿ ನಡೆದ ಚರ್ಚೆಗೆ ಉತ್ತರ ನೀಡುವ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯಅವರು ಈ ವಿಷಯ ಪ್ರಕಟಿಸಿದ್ದರು. ಆ ಸಂಬಂಧ ಇಂದು ಪ್ರಕರಣದ ತನಿಖೆಯ ಜವಾಬ್ದಾರಿಯನ್ನು ಸಿಐಡಿಗೆ ವಹಿಸಿದ್ದು, ವಸ್ತು ನಿಷ್ಠ ತನಿಖೆಗೆ ನಡೆಸಿ ಸಂಪೂರ್ಣ ವರದಿ ನೀಡುವಂತೆ ಸಿಎಂ ಸೂಚಿಸಿದ್ದಾರೆ.