ಸಂಯುಕ್ತ ರಂಗ ಸೇರಲು ಟಿಡಿಪಿ ಸಿದ್ಧತೆ
ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸ್ಥಾಪಿಸಲು ಮುಂದಾಗಿರುವ ಸಂಯುಕ್ತರಂಗ ಸೇರಲು ತೆಲುಗು ದೇಶಂ..
ಹೈದರಾಬಾದ್: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸ್ಥಾಪಿಸಲು ಮುಂದಾಗಿರುವ ಸಂಯುಕ್ತರಂಗ ಸೇರಲು ತೆಲುಗು ದೇಶಂ ಪಕ್ಷ(ಟಿಡಿಪಿ) ಸಿದ್ಧತೆ ನಡೆಸಿದೆ.
ಈ ಬಗ್ಗೆ ಇಂದು ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಪಕ್ಷದ ಮುಖ್ಯಸ್ಥ ಹಾಗೂ ಆಂಧ್ರಪ್ರದೇಶ ಮಾಜಿ ಮುಖ್ಯಮಂತ್ರಿ ಎನ್.ಚಂದ್ರಬಾಬು ನಾಯ್ಡು ಅವರು, ಉದ್ದೇಶಿತ ಸಂಯುಕ್ತ ರಂಗ ಸ್ಥಾಪನೆ ಸಂಬಂಧ ತಾವು ಎಲ್ಲ ಪ್ರಾದೇಶಿಕ ಪಕ್ಷಗಳೊಂದಿಗೆ ಸಂಪರ್ಕದಲ್ಲಿರುವುದಾಗಿ ತಿಳಿಸಿದ್ದಾರೆ. ಅಲ್ಲದೆ ಯುಪಿಎ ಹಾಗೂ ಎನ್ಡಿಎ ಹೊರತಾದ ಪಕ್ಷಗಳೊಂದಿಗೆ ಕೆಲಸ ಮಾಡಲು ಟಿಡಿಪಿ ಸಿದ್ಧವಿದೆ ಎಂದು ಹೇಳಿದ್ದಾರೆ.
ಕಾಂಗ್ರೆಸ್ ನೇತೃತ್ವದ ಯುಪಿಎ ಹಾಗೂ ಬಿಜೆಪಿ ನೇತೃತ್ವದ ಎನ್ಡಿಎ ದಿನದಿಂದ ದಿನಕ್ಕೆ ದುರ್ಬಲವಾಗುತ್ತಿವೆ. ಆದರೆ ಪ್ರಾದೇಶಿಕ ಪಕ್ಷಗಳು ಬಲಿಶಷ್ಠವಾಗುತ್ತಿದ್ದು, ಮುಂದೆ ಕೇಂದ್ರದಲ್ಲಿ ಪ್ರಾದೇಶಿಕ ಪಕ್ಷಗಳೇ ಸರ್ಕಾರ ರಚಿಸಲಿವೆ ಎಂದು ಚಂದ್ರಬಾಬು ನಾಯ್ಡು ತಿಳಿಸಿದ್ದಾರೆ.
ಎನ್ಡಿಎ ಮೈತ್ರಿಕೂಟದಿಂದ ಹೊರ ಬರಲು ಚಿಂತನೆ ನಡೆಸಿರುವ ಜೆಡಿಯೂ ಹಾಗೂ ಬಿಜೆಡಿಯೊಂದಿಗೆ ಸಂಯುಕ್ತರಂಗ ರಚನೆ ಮುಂದಾಗಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಹಾಗೂ ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರು, ಈ ಸಂಬಂಧ ತಾವು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಹಾಗೂ ಒಡಿಸಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರೊಂದಿಗೆ ಚರ್ಚಿಸಿರುವುದಾಗಿ ನಿನ್ನೆ ಹೇಳಿದ್ದರು.