ಉಡುಪಿಯಲ್ಲಿ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ?
ಉಡುಪಿ: ಉಡುಪಿಯ ಮಣಿಪಾಲ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವ ಶಂಕೆವ್ಯಕ್ತವಾಗುತ್ತಿದ್ದು, ಯುವತಿಯನ್ನು ಮಣಿಪಾಲ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಉಡುಪಿಯ ಪ್ರತಿಷ್ಠಿತ ಮಣಿಪಾಲ ಶಿಕ್ಷಣ ಸಂಸ್ಥೆಯಲ್ಲಿ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವ ಘಟನೆ ಬೆಳಕಿಗೆ ಬಂದಿದ್ದು, ನಿನ್ನೆ ಮಣಿಪಾಲ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿನಿಯೊಬ್ಬಳನ್ನು ಅದೇ ಸಂಸ್ಥೆಯ ಮೂವರು ವಿದ್ಯಾರ್ಥಿಗಳು ಅಪಹರಿಸಿ ಸಾಮೂಹಿಕ ಅತ್ಯಾಚಾರ ಗೈದಿದ್ದಾರೆ ಎನ್ನಲಾಗುತ್ತಿದೆ. ಅತ್ಯಾಚಾರಕ್ಕೊಳಗಾದ ಯುವತಿಯ ಸ್ಥಿತಿ ಗಂಭೀರವಾಗಿದ್ದು, ಆಕೆಯನ್ನು ಮಣಿಪಾಲ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ನಿನ್ನೆ ಮಣಿಪಾಲ ಶಿಕ್ಷಣ ಸಂಸ್ಥೆಯ ಗ್ರಂಥಾಲಯಕ್ಕೆ ತೆರಳಿದ್ದ ಯುವತಿ ಇದ್ದಕ್ಕಿದ್ದಂತಯೇ ನಾಪತ್ತೆಯಾಗಿದ್ದಳು. ವಿದ್ಯಾರ್ಥಿನಿಯನ್ನು ಅದೇ ಸಂಸ್ಥೆಯ ಮೂವರು ಯುವಕರು ಅಪಹರಿಸಿ ಅತ್ಯಾಚಾರ ಗೈದಿರುವ ಕುರಿತು ಪೊಲೀಸರು ಶಂಕೆ ವ್ಯಕ್ತಪಡಿಸುತ್ತಿದ್ದಾರೆ. ಈ ನಡುವೆ ಆಸ್ಪತ್ರೆಗೆ ದಾಖಲಾಗಿರುವ ಯುವತಿ ಪೊಲೀಸರಿಗೆ ಹೇಳಿಕೆ ನೀಡಿದ್ದು, ಯುವತಿಯ ಹೇಳಿಕೆಗಳು ಗೊಂದಲ ಮೂಡಿಸುತ್ತಿವೆ.
ಒಮ್ಮೆ ಅತ್ಯಾಚಾರ ನಡೆದಿದೆ ಎಂದು ಹೇಳಿದ ಆಕೆ, ತನ್ನ ಹೇಳಿಕೆಯನ್ನು ಬದಲಿಸಿ ತನ್ನ ಮೇಲೆ ಅತ್ಯಾಚಾರಕ್ಕೆ ಯತ್ನಿಸಲಾಯಿತು ಹೇಳುತ್ತಿದ್ದಾಳೆ. ಒಟ್ಟಾರೆ ಪ್ರಕರಣ ದಾಖಲಿಸಿಕೊಂಡಿರುವ ಮಣಿಪಾಲ ಪೊಲೀಸರು ತನಿಖೆ ನಡೆಸುತ್ತಿದ್ದು, ಆರೋಪಿಗಳ ಬಂಧನಕ್ಕಾಗಿ ಬಲೆ ಬೀಸಿದ್ದಾರೆ.