ಬಿಎಸ್‌ವೈ ಬಿಜೆಪಿಗೆ ಅನಿವಾರ್ಯ: ಡಿ.ಬಿ.ಚಂದ್ರೇಗೌಡ
ಮಾಜಿ ಮುಖ್ಯಮಂತ್ರಿ ಹಾಗೂ ಕೆಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರನ್ನು ಮತ್ತೆ ಬಿಜೆಪಿಗೆ ಕರೆತರಬೇಕು ...
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹಾಗೂ ಕೆಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರನ್ನು ಮತ್ತೆ ಬಿಜೆಪಿಗೆ ಕರೆತರಬೇಕು ಎಂಬ ಒತ್ತಡಕ್ಕೆ ಸಂಸದ ಡಿ.ಬಿ ಚಂದ್ರೇಗೌಡ ಅವರು ಧ್ವನಿಗೂಡಿಸಿದ್ದು, ಯಡಿಯೂರಪ್ಪ ಅವರನ್ನು ಬಿಜೆಪಿಗೆ ಕರೆತರುವುದು ಅನಿವಾರ್ಯ ಎಂದು ಶುಕ್ರವಾರ ಹೇಳಿದ್ದಾರೆ.
ಮುಂಬುರುವ ಲೋಕಸಭೆ ಚುನಾವಣೆಯಲ್ಲಿ ಕೆಜೆಪಿ-ಬಿಜೆಪಿ ಮೈತ್ರಿಯಿಂದ ಶಕ್ತಿ ಬರಲಿದೆ ಎಂದು ಚಂದ್ರೇಗೌಡ ತಿಳಿಸಿದ್ದಾರೆ.
ವಿಧಾಸಭೆ ಚುನಾವಣೆಯ ಸೋಲಿನಿಂದ ಕಂಗೆಟ್ಟಿರುವ ಬಿಜೆಪಿ ನಾಯಕರು ಈಗ ಯಡಿಯೂರಪ್ಪ ಅವರನ್ನು ಮತ್ತೆ ಪಕ್ಷಕ್ಕೆ ಕರೆತರುವ ಯತ್ನಕ್ಕೆ ಕೈ ಹಾಕಿದ್ದು, ಈ ಸಂಬಂಧ ನಿನ್ನೆ ರಾತ್ರಿ ಚಂದ್ರೇಗೌಡ ಅವರ ನಿವಾಸದಲ್ಲಿ ಸಭೆ ನಡೆಸಲಾಗಿದೆ. ಸಭೆಯಲ್ಲಿ ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ ಅವರು ಸಹ ಭಾಗವಹಿಸಿದ್ದರು ಎನ್ನಲಾಗಿದೆ. ಇನ್ನು ಈ ಬಗ್ಗೆ ಇಂದು ಮಾಧ್ಯಮಕ್ಕೆ ಪ್ರತಿಕ್ರಿಯಿಸಿರುವ ಚಂದ್ರೇಗೌಡ ಅವರು, ಯಡಿಯೂರಪ್ಪ ಅವರನ್ನು ಬಿಜೆಪಿಗೆ ಕರೆತರುವ ಬಗ್ಗೆ ಚರ್ಚೆ ನಡೆದಿದೆ. ರಾಷ್ಟ್ರೀಯ ಮುಖಂಡರ ಒಪ್ಪಿಗೆಯಷ್ಟೆ ಬಾಕಿ ಇದ್ದು, ಜೂನ್ ಅಂತ್ಯದೊಳಗೆ ಈ ಬಗ್ಗೆ ಪಕ್ಷ ಸ್ಪಷ್ಟ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಹೇಳಿದ್ದಾರೆ.
ಚಂದ್ರೇಗೌಡರ ಮನೆಯಲ್ಲಿ ನಡೆದ ಸಭೆಯಲ್ಲಿ ಮಾಜಿ ಸಚಿವ ಅರವಿಂದ್ ಲಿಂಬಾವಳಿ, ಉಮೇಶ್ ಕತ್ತಿ, ಮಾಜಿ ಸ್ಪೀಕರ್ ಕೆ.ಜೆ.ಬೋಪಯ್ಯ ಸೇರಿದಂತೆ ಹಲವು ನಾಯಕರು ಭಾಗವಹಿಸಿದ್ದರು. ಯಡಿಯೂರಪ್ಪ ಅವರನ್ನು ಕರೆತಂದರೆ ಲೋಕಸಭೆ ಚುನಾವಣೆಯಲ್ಲಿ ಪಕ್ಷಕ್ಕೆ ಲಾಭವಾಗಲಿದೆ ಎಂಬ ಅಭಿಪ್ರಾಯ ಸಭೆಯಲ್ಲಿ ವ್ಯಕ್ತವಾಗಿದೆ.
ಇನ್ನು ಈ ಬಗ್ಗೆ ಬೆಳಗಾವಿಯಲ್ಲಿ ಪ್ರತಿಕ್ರಿಯಿಸಿರುವ ಬಿಜೆಪಿ ರಾಜ್ಯಸಭಾ ಸದಸ್ಯ ಪ್ರಭಾವಕರ್ ಕೋರೆ ಅವರು, ಬಿಎಸ್‌ವೈ ಪಕ್ಷವನ್ನು ಕಟ್ಟಿ ಬೆಳೆಸಿದ್ದಾರೆ. ಹೀಗಾಗಿ ಅವರು ಮತ್ತೆ ಬಂದರೆ ಪಕ್ಷಕ್ಕೆ ಬಲ ಬರಲಿದೆ. ಈ ಬಗ್ಗೆ ವರಿಷ್ಠರನ್ನು ಭೇಟಿ ಮಾಡಿ ಚರ್ಚಿಸುವುದಾಗಿ ತಿಳಿಸಿದ್ದಾರೆ.