ಬಿಜೆಪಿಗೆ ಬಿಎಸ್ವೈ: ಪ್ರಯತ್ನದಲ್ಲಿ ಬಿಜೆಪಿ ನಾಯಕರು
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರನ್ನು ಭಾರತೀಯ ಜನತಾ ಪಕ್ಷಕ್ಕೆ ಕರೆಸಿಕೊಳ್ಳಬೇಕೆಂಬ ಒತ್ತಡ ಬಿಜೆಪಿಯಲ್ಲಿ ಹೆಚ್ಚಾಗಿದೆ.
ಇದರ ಸಂಬಂಧ ಗುರುವಾರ ರಾಜ್ಯ ಬಿಜೆಪಿ ನಾಯಕರು ಮಾಜಿ ಮುಖ್ಯಮಂತ್ರಿ ಡಿ.ವಿ ಸದಾನಂದಗೌಡ ನೇತೃತ್ವದಲ್ಲಿ ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಶಿ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ.
ಸಭೆಯಲ್ಲಿ ಮಾಜಿ ಸಚಿವರಾದ ಅರವಿಂದ್ ಲಿಂಬಾವಳಿ, ಉಮೇಶ್ ಕತ್ತಿ ಮತ್ತು ಬಸವರಾಜ್ ಬೊಮ್ಮಾಯಿ ತಮ್ಮ ಅಭಿಪ್ರಾಯಗಳನ್ನು ತಿಳಿಸಿದ್ದಾರೆ.
ಮುಂಬರುವ ಲೋಕಸಭಾ ಚುನಾವಣಾ ಸಂಬಂಧ ಪಕ್ಷವನ್ನು ಗಟ್ಟಿಗೊಳಿಸ ಬೇಕಾಗಿದ್ದು, ಯಡಿಯೂರಪ್ಪ ಅವರನ್ನು ಪಕ್ಷಕ್ಕೆ ವಾಪಸ್ ಕರೆಸಿಕೊಳ್ಳಬೇಕಾಗಿದೆ ಎಂದು ರಾಜ್ಯ ಬಿಜೆಪಿ ನಾಯಕರು ಒತ್ತಡ ಹೇರಿದ್ದಾರೆ.
ಈ ಸಂಬಂಧ ಬಿಜೆಪಿ ಅಧ್ಯಕ್ಷ ರಾಜನಾಥ್ ಸಿಂಗ್ ಸೇರಿದಂತೆ ಕೇಂದ್ರ ನಾಯಕರನ್ನು ಭೇಟಿ ಮಾಡಿ ಚರ್ಚೆ ನಡೆಸಲಿದ್ದಾರೆ. ಚರ್ಚೆಯ ಬಳಿಕ ಕೇಂದ್ರ ನಾಯಕರು ಬಿಎಸ್ವೈ ಬಿಜೆಪಿಗೆ ಕರೆಸಿಕೊಳ್ಳುವುದರ ಬಗ್ಗೆ ನಿರ್ಧರಿಸಲಿದ್ದಾರೆ ಎಂದು ಜೋಶಿ ಹೇಳಿದ್ದಾರೆ.
ಜೂನ್ 29ರಂದು ಪಕ್ಷದ ಕೋರ್ ಕಮಿಟಿ ಸಭೆ ನಡೆಯಲಿದ್ದು, ಅಂದು ಅಂತಿಮ ನಿರ್ಧಾರ ತೆಗೆದು ಕೊಳ್ಳಲಾಗುವುದು ಎಂದು ಜೋಶಿ ಸ್ಪಷ್ಟಪಡಿಸಿದ್ದಾರೆ.