ವೈದ್ಯ ವಿದ್ಯಾರ್ಥಿನಿ ಅತ್ಯಾಚಾರ: ಇಬ್ಬರು ಆರೋಪಿಗಳ ಬಂಧನ
ಕಳೆದ ಒಂದು ವಾರದಿಂದ ತಲೆಮರೆಸಿಕೊಂಡಿದ್ದ ಮಣಿಪಾಲ ವಿವಿಯ ವೈದ್ಯ ವಿದ್ಯಾರ್ಥಿನಿ ಮೇಲೆ ನಡೆದ ಸಾಮೂಹಿಕ ..
ಬೆಂಗಳೂರು: ಕಳೆದ ಒಂದು ವಾರದಿಂದ ತಲೆಮರೆಸಿಕೊಂಡಿದ್ದ ಮಣಿಪಾಲ ವಿವಿಯ ವೈದ್ಯ ವಿದ್ಯಾರ್ಥಿನಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಗುರುವಾರ ಪೊಲೀಸರು ಯಶಸ್ವಿಯಾಗಿದ್ದಾರೆ.
ಸಾಮೂಹಿಕ ಅತ್ಯಾಚಾರ ಪ್ರಕರಣದ ಪ್ರಮುಖ ಆರೋಪಿಗಳಾದ ಯೋಗೀಶ್ ಹಾಗೂ ಹರೀಶ್ ಎಂಬುವವರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಕಾರ್ಯದರ್ಶಿಗಳು ಮಾಹಿತಿ ನೀಡಿದ್ದಾರೆ.
ಬಂಧಿತ ಆರೋಪಿ ಯೋಗೀಶ್ ರೌಡಿ ಶೀಟರ್ ಆಗಿದ್ದು, ಪೊಲೀಸರು ಬಂಧಿಸುವ ಮುನ್ನ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಆದರೆ ವಿಷ ಸೇವಿಸಿದ ಯೋಗೀಶ್‌ನನ್ನು ಪೊಲೀಸರು ಕೆಎಂಪಿ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಮತ್ತೊಬ್ಬ ಆರೋಪಿ ಆನಂದ್ ಗೋವಾಗೆ ಪರಾರಿಯಾಗಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಇನ್ನು ದುಷ್ಕೃತ್ಯಕ್ಕೆ ಬಳಸಿದ್ದ ಆಟೋವನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.
ಜೂನ್ 20ರಂದು ರಾತ್ರಿ 11.15ಕ್ಕೆ ವೈದ್ಯ ವಿದ್ಯಾರ್ಥಿನಿಯನ್ನು ಮೂರು ಮಂದಿ ಆಟೋದಲ್ಲಿ ಅಪಹರಿಸಿ, ಆಕೆ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ್ದರು. ಈ ಸಂದರ್ಭದಲ್ಲಿ ಆಕೆ ತೀವ್ರವಾಗಿ ಹೋರಾಟ ನಡೆಸಿ ಆಟೋದಿಂದ ಹೊರಗೆ ಹಾರಿ ತಪ್ಪಿಸಿಕೊಳ್ಳುವ ಪ್ರಯತ್ನ ಮಾಡಿದ್ದಳು. ಇದರಿಂದ ಆಕೆಯ ಕಾಲು ಸೇರಿದಂತೆ ಕೆಲವು ಕಡೆಗಳಲ್ಲಿ ಗಾಯಗಳಾಗಿದ್ದವು.