ರವಿ ಬೆಳಗೆರೆ ವಿರುದ್ಧ ಜಾಮೀನು ರಹಿತ ವಾರೆಂಟ್
ಪತ್ರಕರ್ತ ರವಿ ಬೆಳಗೆರೆ ವಿರುದ್ಧ ಚಿತ್ರದುರ್ಗ ನ್ಯಾಯಾಲಯ ಶುಕ್ರವಾರ ಜಾಮೀನು ರಹಿತ ವಾರೆಂಟ್ ಜಾರಿ ಮಾಡಿದೆ.
ಚಿತ್ರದುರ್ಗ: ಪತ್ರಕರ್ತ ರವಿ ಬೆಳಗೆರೆ ವಿರುದ್ಧ ಚಿತ್ರದುರ್ಗ ನ್ಯಾಯಾಲಯ ಶುಕ್ರವಾರ ಜಾಮೀನು ರಹಿತ ವಾರೆಂಟ್ ಜಾರಿ ಮಾಡಿದೆ.
ಚಿತ್ರದುರ್ಗದ ಜೆಎಂಫ್‌ಸಿ ನ್ಯಾಯಾಲಯವು "ಅವಹೇಳನಕಾರಿ ಲೇಖನ ಪ್ರಕಟ" ಪ್ರಕರಣಕ್ಕೆ ಸಂಬಂಧಿಸಿದಂತೆ ಪತ್ರಕರ್ತ ರವಿ ಬೆಳಗೆರೆ ಅವರಿಗೆ ಜಾಮೀನು ರಹಿತ ವಾರೆಂಟ್ ಜಾರಿ ಮಾಡಿದೆ. ಅಲ್ಲದೆ ಮುಂದಿನ ವಿಚಾರಣೆಗೆ ಖುದ್ದು ಹಾಜರಾಗುವಂತೆ ಸೂಚಿಸಿದೆ.
ಚಿತ್ರದುರ್ಗ ಮಹಾನಗರ ಪಾಲಿಕೆಯ ಮಾಜಿ ಮೇಯರ್ ಸುನಿತಾ ಮಲ್ಲಿಕಾರ್ಜುನ್ ಅವರ ವಿರುದ್ಧ ರವಿ ಬೆಳಗೆರೆ ಅವರು ತಮ್ಮ ಪತ್ರಿಕೆಯಲ್ಲಿ ಅವಹೇಳನಕಾರಿಯಾಗಿ ಲೇಖನ ಪ್ರಕಟಿಸಿದ್ದರು ಎಂದು ಆರೋಪಿಸಿ ಸುನಿತಾ ಮಲ್ಲಿಕಾರ್ಜುನ್ ಅವರು ನ್ಯಾಯಾಲಯದಲ್ಲಿ ದೂರು ದಾಖಲಿಸಿದ್ದರು.
ದೂರಿನ ವಿಚಾರಣೆ ನಡೆಸಿದ್ದ ನ್ಯಾಯಾಲಯ ಈ ಹಿಂದೆ ಹಲವು ಬಾರಿ ರವಿ ಬೆಳಗೆರೆ ಅವರಿಗೆ ನ್ಯಾಯಾಲಯಕ್ಕೆ ಹಾಜರಾಗುವಂತೆ ನೋಟಿಸ್ ನೀಡಿತ್ತು. ಆದರೆ ರವಿ ಬೆಳಗೆರೆ ಅವರು ನ್ಯಾಯಾಲಯದ ವಿಚಾರಣೆಗೆ ಹಾಜರಾಗದ ಹಿನ್ನಲೆಯಲ್ಲಿ ಇಂದು ಅವರಿಗೆ ಜಾಮೀನು ರಹಿತ ವಾರೆಂಟ್ ಜಾರಿ ಮಾಡಲಾಗಿದೆ.