ಸೋಮಶೇಖರ ರೆಡ್ಡಿಗೆ ನಿರೀಕ್ಷಣಾ ಜಾಮೀನು
ಕೆಎಂಎಫ್ ಅಧ್ಯಕ್ಷ ಸೋಮಶೇಖರ ರೆಡ್ಡಿ ಅವರಿಗೆ ಲೋಕಾಯುಕ್ತ ನ್ಯಾಯಾಲಯ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.
ಬೆಂಗಳೂರು: ಕೆಎಂಎಫ್ ಅಧ್ಯಕ್ಷ ಸೋಮಶೇಖರ ರೆಡ್ಡಿ ಅವರಿಗೆ ಲೋಕಾಯುಕ್ತ ನ್ಯಾಯಾಲಯ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.
ಕರ್ನಾಟಕ ಹಾಲು ಮಹಾಮಂಡಳಿ (ಕೆಎಂಎಫ್)ಯಲ್ಲಿ ನಡೆದಿದೆ ಎನ್ನಲಾಗುತ್ತಿರುವ 'ಪಶು ಆಹಾರ ಖರೀದಿ ಅಕ್ರಮ' ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ವಿಚಾರಣೆ ನಡೆಸಿದ ನ್ಯಾಯಾಲಯ ಸೋಮಶೇಖರ ರೆಡ್ಡಿ ಸೇರಿದಂತೆ ಕೆಎಂಎಫ್‌ನ ಒಟ್ಟು 8 ಸಿಬ್ಬಂದಿಗಳಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.
ಕಳೆದ ನವೆಂಬರ್‌ನಲ್ಲಿ ರೈತರಿಗೆ ಹಂಚಲು ಖರೀದಿಸಲಾಗಿದ್ದ ಪಶು ಆಹಾರ ಖರೀದಿಯಲ್ಲಿ ಅಧ್ಯಕ್ಷ ಸೋಮಶೇಖರ ರೆಡ್ಡಿ ಅವರು ಅಕ್ರಮ ಎಸಗಿದ್ದಾರೆ. ತಮಗೆ ಬೇಕಾದವರಿಗೆ ಗುತ್ತಿಗೆ ನೀಡಿ ಪಶು ಆಹಾರ ಖರೀದಿ ಮಾಡುವ ಮೂಲಕ ಲಾಭ ಪಡೆದಿದ್ದಾರೆ ಎಂದು ಆರೋಪಿಸಿ ಕೆಎಂಎಫ್‌ನ ಮಾಜಿ ಸದಸ್ಯರೊಬ್ಬರು ಲೋಕಾಯುಕ್ತ ನ್ಯಾಯಾಲಯದಲ್ಲಿ ದೂರು ದಾಖಲಿಸಿದ್ದರು.
ಪ್ರಕರಣವನ್ನು ದಾಖಲಿಸಿಕೊಂಡಿದ್ದ ಲೋಕಾಯುಕ್ತ ನ್ಯಾಯಾಲಯ, ಕೆಎಂಎಫ್ ಅಧ್ಯಕ್ಷ ಸೋಮಶೇಖರ ರೆಡ್ಡಿ ಸೇರಿದಂತೆ ಇತರೆ 7 ಸಿಬ್ಬಂದಿಗಳ ವಿರುದ್ಧ ತನಿಖೆಗೆ ಆದೇಶಿಸಿತ್ತು.