ಬಿಜೆಪಿ 50 ಸ್ಥಾನ ಗೆದ್ದರೆ ರಾಜಕೀಯ ನಿವೃತ್ತಿ: ಈಶ್ವರಪ್ಪಗೆ ಯಡ್ಡಿ ಸವಾಲು
ತಾಕತ್ತಿದ್ದರೆ ನಿಮ್ಮ ನೇತೃತ್ವದಲ್ಲಿ ಮುಂಬರುವ ವಿಧಾನಸಭೆ ಚುನಾವಣೆಯನ್ನು ಎದುರಿಸಿ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಕೆಜೆಪಿ..
ದಾವಣಗೆರೆ: ತಾಕತ್ತಿದ್ದರೆ ನಿಮ್ಮ ನೇತೃತ್ವದಲ್ಲಿ ಮುಂಬರುವ ವಿಧಾನಸಭೆ ಚುನಾವಣೆಯನ್ನು ಎದುರಿಸಿ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಕೆಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಅವರಿಗೆ ಮಂಗಳವಾರ ಸವಾಲು ಎಸೆದಿದ್ದಾರೆ.
ದಾವಣಗೆರೆಯ ಆನಗೋಡಿನಲ್ಲಿ ಪಕ್ಷದ ಸಮಾವೇಶದಲ್ಲಿ ಮಾತನಾಡಿದ ಯಡಿಯೂರಪ್ಪ, ಈಶ್ವರಪ್ಪ ಅವರು ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಮುಖಭಂಗ ಅನುಭವಿಸಬೇಕಾಗುತ್ತದೆ ಎಂಬುದನ್ನು ಅರಿತು ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ ನೀಡಿದರು. ಆದರೆ ಈಗ ಅವರನ್ನೇ ಮತ್ತೆ ರಾಜ್ಯಾಧ್ಯಕ್ಷರನ್ನಾಗಿ ಮಾಡಲು ಬಿಜೆಪಿ ಹೊರಟಿದೆ ಎಂದು ವ್ಯಂಗ್ಯವಾಡಿದರು.
ಬಿಜೆಪಿ ಮುಂದಿನ ಚುನಾವಣೆಯಲ್ಲಿ 50 ಸ್ಥಾನಗಳಲ್ಲೂ ಗೆಲ್ಲುವುದಿಲ್ಲ ಎಂದ ಯಡಿಯೂರಪ್ಪ, ಈಶ್ವರಪ್ಪ ಅವರು ತಮ್ಮ ನೇತೃತ್ವದಲ್ಲೇ ಚುನಾವಣೆ ಎದುರಿಸಿ ಬಿಜೆಪಿಯನ್ನು 50 ಸ್ಥಾನಗಳಲ್ಲಿ ಗೆಲ್ಲಿಸಿದರೆ, ತಾವು ರಾಜಕೀಯ ನಿವೃತ್ತಿ ಪಡೆಯುವುದಾಗಿ ಸವಾಲು ಹಾಕಿದರು.
ಇದೇ ವೇಳೆ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರ ವಿರುದ್ಧವೂ ವಾಗ್ದಾಳಿ ನಡೆಸಿದ ಯಡಿಯೂರಪ್ಪ, ಶೆಟ್ಟರ್ ಅವರು ಜನರಿಗಾಗಿ ಆಡಳಿತ ನಡೆಸುತ್ತಿಲ್ಲ. ಮುಂದಿನ ಚುನಾವಣೆಗೆ ಹಣ ಸಂಗ್ರಹಿಸಲು ಅಂಗಡಿ ತೆರೆದುಕೊಂಡು ಕೂತಿದ್ದಾರೆ. ಟೆಂಡರ್, ನೇಮಕಾತಿ ಮುಂತಾದವುಗಳಲ್ಲಿ ಹಣ ಪಡೆಯುತ್ತ ಚುನಾವಣಾ ನಿಧಿ ಸಂಗ್ರಹಿಸುತ್ತಿದ್ದಾರೆ ಎಂದು ಆರೋಪಿಸಿದರು.