ಪ್ರಹ್ಲಾದ್ ಜೋಷಿಗೆ ಬಿಜೆಪಿ ರಾಜ್ಯಾಧ್ಯಕ್ಷ ಪಟ್ಟ
ಧಾರವಾಡ ಸಂಸದ ಪ್ರಹ್ಲಾದ್ ಜೋಷಿಯವರನ್ನು ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ಘೋಷಿಸಲಾಗಿದೆ. ಗುರುವಾರ ನವದೆಹಲಿಯಲ್ಲಿ ನಡೆದ ರಾಜ್ಯ ಸಂಸದರ ಸಭೆಯಲ್ಲಿ...
ನವದೆಹಲಿ: ಧಾರವಾಡ ಸಂಸದ ಪ್ರಹ್ಲಾದ್ ಜೋಷಿಯವರನ್ನು ರಾಜ್ಯಾಧ್ಯಕ್ಷರನ್ನಾಗಿ ಘೋಷಿಸಲಾಗಿದೆ. ಗುರುವಾರ ನವದೆಹಲಿಯಲ್ಲಿ ನಡೆದ ರಾಜ್ಯ ಸಂಸದರ ಸಭೆಯಲ್ಲಿ ಈ ನಿರ್ಣಯವನ್ನು ಕೈಗೊಳ್ಳಲಾಗಿದೆ.
ಸಭೆಯ ನಂತರ ರಾಷ್ಟ್ರೀಯ ಅಧ್ಯಕ್ಷ ರಾಜ್ನಾಥ್ ಸಿಂಗ್ ಅವರು ಪ್ರಹ್ಲಾದ್ ಜೋಷಿಯವರನ್ನು ಕರ್ನಾಟಕ ರಾಜ್ಯ ಬಿಜೆಪಿ ಅಧ್ಯಕ್ಷರನ್ನಾಗಿ ಘೋಷಣೆ ಮಾಡಿದ್ದಾರೆ.
ರಾಜ್ಯ ವಿಧಾನಸಭೆ ಚುನಾವಣೆ ಘೋಷಣೆಯಾದ ಹಿನ್ನೆಲೆಯಲ್ಲಿ ಆದಷ್ಟು ಬೇಗ ರಾಜ್ಯಧ್ಯಕ್ಷರನ್ನು ಆಯ್ಕೆ ಮಾಡಬೇಕಾದ ಒತ್ತಡ ಬಿಜೆಪಿಗಿತ್ತು.
ಈಶ್ವರಪ್ಪ ಅವರ ರಾಜೀನಾಮೆಯಿಂದ ತೆರವಾಗಿದ್ದ ರಾಜ್ಯಾಧ್ಯಕ್ಷ ಸ್ಥಾನವನ್ನು ಇದೀಗ ಪ್ರಹ್ಲಾದ್ ಜೋಷಿ ತುಂಬಲಿದ್ದಾರೆ.
ಇಂದು ಮಧ್ಯಾಹ್ನ ನವದೆಹಲಿಯ ಕರ್ನಾಟಕ ಭವನದಲ್ಲಿ ನಡೆದ ಸಂಸದರ ಸಭೆಯ ನೇತೃತ್ವವನ್ನು ಬಿಜೆಪಿ ಪ್ರಧಾನ ಕಾರ್ಯದರ್ಶಿ ಅನಂತ್ ಕುಮಾರ್ ವಹಿಸಿದ್ದರು.
ಸಭೆಯಲ್ಲಿ ರಾಜ್ಯ ಸಂಸದರಾದ ನಳೀನ್ ಕುಮಾರ್ ಕಟೀಲ್, ಪ್ರಹ್ಲಾದ್ ಜೋಷಿ, ಆಯನೂರು ಮಂಜುನಾಥ್ ಮೊದಲಾದವರು ಪಾಲ್ಗೊಂಡಿದ್ದರು.