ದಿಲ್ಲಿಯಲ್ಲಿ ಮುಂದುವರೆದ 'ಕೈ' ಟಿಕೆಟ್ ಕಸರತ್ತು
ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ನೇತೃತ್ವದಲ್ಲಿ ಗುರುವಾರ ನಡೆದ ಕೇಂದ್ರ ಕಾಂಗ್ರೆಸ್ ಚುನಾವಣಾ ಸಮಿತಿ ಸಭೆ ಅಂತ್ಯವಾಗಿದ್ದು,
ನವದೆಹಲಿ: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ನೇತೃತ್ವದಲ್ಲಿ ಗುರುವಾರ ನಡೆದ ಕೇಂದ್ರ ಕಾಂಗ್ರೆಸ್ ಚುನಾವಣಾ ಸಮಿತಿ ಸಭೆ ಅಂತ್ಯವಾಗಿದ್ದು, ಅಭ್ಯರ್ಥಿಗಳ ಆಯ್ಕೆಗೆ ದೆಹಲ್ಲಿಯಲ್ಲಿ ನಡೆಯುತ್ತಿರುವ ಬಿರುಸಿನ ಕಸರತ್ತು ಮುಂದುವರೆದಿದೆ.
ಸಭೆಯ ಬಳಿಕ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಹಾಗೂ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು, ಅಭ್ಯರ್ಥಿಗಳ ಪಟ್ಟಿ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ. ಟಿಕೆಟ್ ಹಂಚಿಕೆ ಹಾಗೂ ಮಾನದಂಡಗಳ ಬಗ್ಗೆ ಮಾತ್ರ ಚರ್ಚೆ ನಡೆಯಿತು ಎಂದು ಹೇಳಿದ್ದಾರೆ. ಅಲ್ಲದೆ ನನ್ನ ಹಾಗೂ ಸಿದ್ದರಾಮಯ್ಯ ಅವರ ಮಧ್ಯೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ ಎಂದು ಪರಮೇಶ್ವರ್ ಸ್ಪಷ್ಟಪಡಿಸಿದರು.
ಮತ್ತೆ ಮಾರ್ಚ್ 30ಕ್ಕೆ ಕೇಂದ್ರ ಚುನಾವಣಾ ಸಮಿತಿ ಸಭೆ ನಡೆಯಲಿದ್ದು, ಅಂದು ಅಭ್ಯರ್ಥಿಗಳ ಆಯ್ಕೆ ಪಟ್ಟಿಯ ಬಗ್ಗೆ ಚರ್ಚಿಸಲಾಗುವುದು ಎಂದು ಪರಮೇಶ್ವರ್ ತಿಳಿಸಿದರು.
ಮೂರು ಬಾರಿ ಸೋತವರಿಗೆ ಹಾಗೂ 25 ಸಾವಿರ ಮತಗಳ ಅಂತರದಿಂದ ಸೋತವರಿಗೆ ಈ ಬಾರಿ ಟಿಕೆಟ್ ನೀಡುವುದು ಬೇಡ ಎಂಬ ನಿರ್ಧಾರಕ್ಕೆ ಕಾಂಗ್ರೆಸ್ ಹೈಕಮಾಂಡ್ ಬಂದಿದೆ ಎಂದು ಮೂಲಗಳು ತಿಳಿಸಿವೆ. ಇನ್ನು ಮೂವರು ಪಕ್ಷೇತರ ಶಾಸಕರಿಗೆ ಟಿಕೆಟ್ ನೀಡಲು ಹೈಕಮಾಂಡ್ ಒಪ್ಪಿಗೆ ಸೂಚಿಸಿದೆ ಎನ್ನಲಾಗಿದೆ.
ಸೋನಿಯಾ ಗಾಂಧಿ ನೇತೃತ್ವದಲ್ಲಿ ಅವರ ನಿವಾಸದಲ್ಲಿ ನಡೆದ ಸಭೆಯಲ್ಲಿ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ, ಎ.ಕೆ.ಆಂಟನಿ, ಅಂಬಿಕಾ ಸೋನಿ, ಗಿರಿಜಾ ವ್ಯಾಸ್, ಜಿ.ಪರಮೇಶ್ವರ್, ಸಿದ್ದರಾಮಯ್ಯ ಅವರು ಭಾಗವಹಿಸಿದ್ದರು.