ಶೀಘ್ರದಲ್ಲೇ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ: ಸಿಎಂ ಶೆಟ್ಟರ್
ಶೀಘ್ರದಲ್ಲೇ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು ಶನಿವಾರ ಹೇಳಿದ್ದಾರೆ.
ಬೆಂಗಳೂರು: ಶೀಘ್ರದಲ್ಲೇ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು ಶನಿವಾರ ಹೇಳಿದ್ದಾರೆ.
ಅಭ್ಯರ್ಥಿಗಳ ಆಯ್ಕೆ ಸಂಬಂಧ ಮಲ್ಲೇಶ್ವರಂನ ಪಕ್ಷದ ಕಚೇರಿಯಲ್ಲಿ ಬಿಜೆಪಿ ಚುನಾವಣಾ ಸಮಿತಿ ಸಭೆ ನಡೆಯುತ್ತಿದ್ದು, ಸಭೆಗೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಶೆಟ್ಟರ್, ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ನಡೆಯುತ್ತಿದ್ದು, ಶೀಘ್ರವೇ ಪಟ್ಟಿ ಬಿಡುಗಡೆ ಮಾಡುವುದಾಗಿ ಹೇಳಿದರು. ಅಲ್ಲದೆ ಏಪ್ರಿಲ್ 15ರೊಳಗೆ ಎಲ್ಲಾ ಕ್ಷೇತ್ರಗಳಿಗೂ ನಾಮಪತ್ರ ಸಲ್ಲಿಕೆಯಾಗಲಿದೆ ಎಂದು ತಿಳಿಸಿದರು.
ಪಕ್ಷದ ಜಿಲ್ಲಾ ಪ್ರಮುಖರೊಂದಿಗೂ ಬಿಜೆಪಿ ನಾಯಕರು ಪ್ರತ್ಯೇಕವಾಗಿ ಸಮಾಲೋಚನೆ ನಡೆಸುತ್ತಿದ್ದು, ಮೊದಲಿಗೆ ಮೈಸೂರು ಜಿಲ್ಲಾ ಪ್ರಮುಖರ ಸಭೆ, ನಂತರ ಚಾಮರಾಜನಗರ, ಉತ್ತರ ಕನ್ನಡ ಹಾಗೂ ಶಿವಮೊಗ್ಗ ನಾಯಕರೊಂದಿಗೆ ಚರ್ಚಿಸಿ ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸುವ ಸಾಧ್ಯತೆ ಇದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಸಭೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಶಿ, ಉಪ ಮುಖ್ಯಮಂತ್ರಿಗಳಾದ ಆರ್.ಅಶೋಕ್, ಕೆ.ಎಸ್.ಈಶ್ವರಪ್ಪ, ಬಿಜೆಪಿ ಸಂಘಟನಾ ಕಾರ್ಯದರ್ಶಿ ಸಂತೋಷ್ ಹಾಗೂ ಸಚಿವರಾದ ಉಮೇಶ್ ಕತ್ತಿ, ಬಸವರಾಜ ಬೊಮ್ಮಾಯಿ, ಎಸ್.ಎ.ರಾಮದಾಸ್ ಭಾಗವಹಿಸಿದ್ದಾರೆ.