ಇಂದಿನಿಂದ ಮದ್ಯ ಮಾರಾಟ ನಿಷೇಧ: ಪೊಲೀಸ್ ಆಯುಕ್ತ
ಚುನಾವಣೆ ಮುಗಿಯುವರೆಗೂ ನಗರದಲ್ಲಿ ಮದ್ಯ ಮಾರಾಟವನ್ನು ನಿಷೇಧ ಮಾಡಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ರಾಘವೇಂದ್ರ ಔರಾದ್ಕರ್ ಅವರು ಹೇಳಿದ್ದಾರೆ.
ಬೆಂಗಳೂರು: ಇಂದಿನಿಂದ ಚುನಾವಣೆ ಮುಗಿಯುವರೆಗೂ ನಗರದಲ್ಲಿ ಮದ್ಯ ಮಾರಾಟವನ್ನು ನಿಷೇಧ ಮಾಡಲಾಗಿದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ರಾಘವೇಂದ್ರ ಔರಾದ್ಕರ್ ಅವರು ಹೇಳಿದ್ದಾರೆ.
ಬೆಂಗಳೂರಿನ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಮಾತನಾಡಿದ ನಗರ ಪೊಲೀಸ್ ಆಯುಕ್ತ ರಾಘವೇಂದ್ರ ಔರಾದ್ಕರ್ ಅವರು, ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಅತಿ ಸೂಕ್ಷ್ಮ ಎಂದು ಗುರುತಿಸಲಾದ ಒಟ್ಟು 28 ಮತಗಟ್ಟೆಗಳಿಗೆ ಹೆಚ್ಚಿನ ಭದ್ರತೆ ಒದಗಿಸಲಾಗುತ್ತದೆ ಎಂದು ಹೇಳಿದರು. ಅಂತೆಯೇ 'ನಗರ ವ್ಯಾಪ್ತಿಯ ಒಟ್ಟು 6 ಸಾವಿರದ 450 ಮತಗಟ್ಟೆಗಳಿಗೆ ಭದ್ರತೆ ಒದಗಿಸಲಾಗುವುದು. ಇದಕ್ಕಾಗಿ 4 ಸಾವಿರ ಕೇಂದ್ರ ಸಶಸ್ತ್ರ ಮೀಸಲು ಪಡೆ ಸಿಬ್ಬಂದಿ, 17 ಸಾವಿರ ಪೊಲೀಸ್ ಅಧಿಕಾರಿಗಳು ಮತ್ತು 1 ಸಾವಿರ ಸಿವಿಲ್ ಡಿಫೆನ್ಸ್ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ ಎಂದು ಅವರು ಹೇಳಿದರು.
ಅಲ್ಲದೆ ಇಂದಿನಿಂದ ಮೇ 5 ರವರೆಗೆ ನಗರದಲ್ಲಿ ಮದ್ಯ ಮಾರಾಟವನ್ನು ನಿಷೇಧಿಸಲಾಗಿದ್ದು, ಅಕ್ರಮವಾಗಿ ಮದ್ಯ ಮಾರಾಟ ಮಾಡಿದರೆ ಅಂತಹವರ ವಿರುದ್ಧ ಕಠಿಣ ಕ್ರಮ ಕೈ ಗೊಳ್ಳಲಾಗುವುದು ಎಂದು ಔರಾದ್ಕರ್ ಅವರು ತಿಳಿಸಿದರು. ಇದೇ ಮೇ 5 ರಂದು ಕರ್ನಾಟಕ ವಿಧಾನಸಭಾ ಚುನಾವಣಾ ಹಿನ್ನಲೆಯಲ್ಲಿ ಮಾತನಾಡಿದ ಅವರು, ಶಾಂತಿಯುತವಾಗಿ ಮತದಾನ ಮಾಡುವಂತೆ ಜನತೆಯನ್ನು ಕೋರಿದರು.