ಬೆಂಗಳೂರು ಬಾಂಬ್ ಸ್ಫೋಟ: ಮತ್ತಿಬ್ಬರ ಬಂಧನ
ಬೆಂಗಳೂರು ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮತ್ತಿಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಬೆಂಗಳೂರು: ಬೆಂಗಳೂರಿನ ಬಿಜೆಪಿ ಕಚೇರಿ ಆವರಣದಲ್ಲಿ ನಡೆದಿದ್ದ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಪೊಲೀಸರು ಮತ್ತಿಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಕಳೆದ ಏಪ್ರಿಲ್ 17ರಂದು ನಡೆದಿದ್ದ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಬೆಂಗಳೂರು ಪೊಲೀಸರು ತಮಿಳುನಾಡಿನ ಕೊಯಮತ್ತೂರಿನಲ್ಲಿ ಅಡಗಿದ್ದ ವಯಲ್ ಹಕೀಂ ಮತ್ತು ಅಸ್ಗರ್ ಅಲಿ ಎಂಬ ಮತ್ತಿಬ್ಬರು ಶಂಕಿತರನ್ನು ಪೊಲೀಸರು ಬಂಧಿಸಿದ್ದಾರೆ. ಈ ಇಬ್ಬರು ಆರೋಪಿಗಳು ಸ್ಫೋಟಕಗಳನ್ನು ರವಾನಿಸಿದ್ದಾರೆ ಎಂಬ ಆರೋಪದ ಮೇಲೆ ಬಂಧಿಸಲಾಗಿದೆ. ಇದರೊಂದಿಗೆ ಬೆಂಗಳೂರು ಬಾಂಬ್ ಸ್ಫೋಟ ಪ್ರಕರಣದಲ್ಲಿ ಬಂಧಿತರಾದವರ ಸಂಖ್ಯೆ 13ಕ್ಕೇರಿದೆ.
ಏಪ್ರಿಲ್ 17ರಂದು ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿ ಆವರಣದಲ್ಲಿ ಬೈಕಿನಲ್ಲಿ ಇಡಲಾಗಿದ್ದ್ದ ಬಾಂಬ್ ಸ್ಫೋಟಗೊಂಡಿತ್ತು. ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸರಲಿಲ್ಲ. ಆದರೆ ಸ್ಫೋಟದಲ್ಲಿ ಇಬ್ಬರು ವಿದ್ಯಾರ್ಥಿನಿಯರು ಮತ್ತು ಆರು ಮಂದಿ ಪೊಲೀಸರು ಸೇರಿದಂತೆ ಒಟ್ಟು 15ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು.
ಬೈಕಿನಲ್ಲಿ ಇಡಲಾಗಿದ್ದ ಬಾಂಬ್ ಸ್ಫೋಟಗೊಳ್ಳುತ್ತಿದ್ದಂತೆ ಪಕ್ಕದಲ್ಲಿಯೇ ನಿಂತಿದ್ದ ಪೊಲೀಸ್ ವಾಹನ, 2 ಕಾರು ಮತ್ತು ಅಕ್ಕಪಕ್ಕದ ಮನೆಗಳು ಜಖಂಗೊಂಡಿದ್ದವು. ಪ್ರಕರಣ ದಾಖಲಿಸಿಕೊಂಡಿದ್ದ ಬೆಂಗಳೂರು ಪೊಲೀಸರು ತಮಿಳುನಾಡು ಪೊಲೀಸರ ಸಹಕಾರದೊಂದಿಗೆ ಚೆನ್ನೈ, ಮಧುರೈ ಮತ್ತು ಕೊಯಮತ್ತೂರಿನಲ್ಲಿ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ.