ಮತದಾರರ ಹೆಸರು ನಾಪತ್ತೆ: ಹಲವೆಡೆ ಪ್ರತಿಭಟನೆ
ಬೆಂಗಳೂರು: ಭಾನುವಾರ ಆರಂಭಗೊಂಡಿರುವ ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಲು ಆಗಮಿಸಿದ್ದ ನೂರಾರು ಮತದಾರರ ಹೆಸರು ಮತ ಪಟ್ಟಿಯಲ್ಲಿ ನಾಪತ್ತೆಯಾಗಿದ್ದು, ಪ್ರತಿಭಟನೆಗೆ ಕಾರಣವಾಗಿದೆ.
ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರುಗಳು ನಾಪತ್ತೆಯಾಗಿವೆ ಎಂದು ಆರೋಪಿಸಿರುವ ಬೆಂಗಳೂರಿನ ರಾಜರಾಜೇಶ್ವರಿ ನಗರದ ನೂರಾರು ನಿವಾಸಿಗಳು ಮತಗಟ್ಟೆಯ ಬಳಿ ಪ್ರತಿಭಟನೆ ನಡೆಸುತ್ತಿದ್ದಾರೆ. ಅಂತೆಯೇ ಬೆಂಗಳೂರಿನ ಮತ್ತೊಂದು ಪ್ರಮುಖ ಕ್ಷೇತ್ರವಾಗಿರುವ ಯಶವಂತಪುರ ವಿಧಾನಸಭಾ ಕ್ಷೇತ್ರದಲ್ಲಿಯೂ ಮತದಾರರ ಹೆಸರುಗಳು ನಾಪತ್ತೆಯಾಗಿದ್ದು, ವಿಧ್ಯಮಾನ್ಯನಗರ ಮತಗಟ್ಟೆಯ ಬಳಿ ಸುಮಾರು 300ರಿಂದ 400 ನಿವಾಸಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ.
ಅಂತೆಯೇ ಶಿವಮೊಗ್ಗ, ಬಳ್ಳಾರಿ, ತುಮಕೂರು, ದಾವಣಗೆರೆ, ಧಾರವಾಡ ಮತ್ತು ಹಾವೇರಿ ಜಿಲ್ಲೆಗಳ ಕೆಲವು ಮತಗಟ್ಟೆಗಳಲ್ಲಿ ಮತದಾರರ ಹೆಸರು ನಾಪತ್ತೆಯಾಗಿರುವ ಮಾಹಿತಿ ಕೇಳಿಬಂದಿದೆ. ಅಲ್ಲದೆ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರ ಸ್ವಕ್ಷೇತ್ರ ಹುಬ್ಬಳಿಯಲ್ಲಿಯ ಹಲವು ಮತಗಟ್ಟೆಗಳಲ್ಲಿ ಮತದಾರರ ಹೆಸರು ನಾಪತ್ತೆಯಾಗಿದ್ದು, ಮತದಾನದ ವೇಳೆ ಗೊಂದಲಕ್ಕೆ ಕಾರಣವಾಗಿತ್ತು.