'ಸುಪ್ರೀಂ'ನಲ್ಲೂ ಜಗನ್ ಜಾಮೀನು ವಜಾ
ಅಕ್ರಮ ಆಸ್ತಿ ಗಳಿಕೆ ಪ್ರಕರಣ ಸಂಬಂಧ ವೈಎಸ್ ಜಗನ್ ಅವರ ಜಾಮೀನು ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ.
ನವದೆಹಲಿ: ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ವೈಎಸ್ ಜಗನ್ಮೋಹನ್ ರೆಡ್ಡಿ ಅವರ ಜಾಮೀನು ಅರ್ಜಿಯನ್ನು ಸುಪ್ರೀಂಕೋರ್ಟ್ ಗುರುವಾರ ವಜಾಗೊಳಿಸಿದೆ.
ಇಂದು ವೈಎಸ್ ಜಗನ್ ಅವರ ಅಕ್ರಮ ಆಸ್ತಿ ಗಳಿಕೆ ಪ್ರಕರಣದ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ಪಿ.ಸದಾಶಿವಂ ಅವರ ನೇತೃತ್ವದ ನ್ಯಾಯಪೀಠ, ಜಗನ್ಗೆ ಜಾಮೀನು ನೀಡಿದರೆ ಪ್ರಕರಣದ ತನಿಖೆಯ ಮೇಲೆ ಗಂಭೀರ ಪ್ರಭಾವ ಬೀರುವ ಸಾಧ್ಯತೆ ಇದ್ದು, ಪ್ರಮುಖ ಸಾಕ್ಷ್ಯಗಳು ಮತ್ತು ದಾಖಲೆಗಳು ನಾಶವಾಗಬಹುದು ಎಂದು ಅಭಿಪ್ರಾಯಪಟ್ಟಿದ್ದಾರೆ. ಅಂತೆಯೇ ಜಗನ್ ಅವರ ಪ್ರಕರಣವನ್ನು ಸಿಬಿಐ ಅಧಿಕಾರಿಗಳು ತನಿಖೆ ನಡೆಸುತ್ತಿದ್ದು, ಅವರ ತನಿಖೆ ಪೂರ್ಣಗೊಂಡ ನಂತರ ಜಾಮೀನು ಕುರಿತು ಆಲೋಚಿಸೋಣ ಎಂದು ನ್ಯಾಯಪೀಠ ತಿಳಿಸಿದೆ.
ಜಗನ್ ಅಕ್ರಮ ಆಸ್ತಿ ಗಳಿಕೆ ಪ್ರಕರಣದ ವಿಚಾರಣೆ ನಡೆಸುತ್ತಿರುವ ಸಿಬಿಐ ಸಂಸ್ಥೆಗೆ ನ್ಯಾಯಾಲಯ ನಾಲ್ಕು ತಿಂಗಳ ಗಡುವು ನೀಡಿದ್ದು, ಈ ನಾಲ್ಕು ತಿಂಗಳೊಳಗೆ ಚಾರ್ಜ್ಶೀಟ್ ಸಲ್ಲಿಸುವಂತೆ ಸಿಬಿಐಗೆ ಸೂಚಿಸಿದೆ.
ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ವೈಎಸ್ ರಾಜಶೇಖರ ರೆಡ್ಡಿ ಅವರ ಪುತ್ರ ವೈಎಸ್ ಜಗನ್ ಅವರ ಅಕ್ರಮ ಆಸ್ತಿಗಳಿಕೆ ಪ್ರಕರಣವನ್ನು ವಿಚಾರಣೆ ನಡೆಸಿದ್ದ ಆಂಧ್ರಪ್ರದೇಶ ಹೈ ಕೋರ್ಟ್, ಜನವರಿ 24ರಂದು ಜಗನ್ ಅವರ ಜಾಮೀನು ಅರ್ಜಿಯನ್ನು ತಿರಸ್ಕರಿಸಿತ್ತು. ಆಂಧ್ರ ಹೈ ಕೋರ್ಟ್ ನಿರ್ಧಾರದ ವಿರುದ್ಧ ಜಗನ್ ಅವರು, ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯ ಇಂದು ಅವರ ಜಾಮೀನು ಅರ್ಜಿಯನ್ನು ತಿರಸ್ಕರಿಸಿದೆ.