ಬಡ್ತಿಗಾಗಿ ಲಂಚ: ಪಿ.ಕೆ.ಬನ್ಸಾಲ್ ರಾಜಿನಾಮೆ
ಬಡ್ತಿಗಾಗಿ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ರೇಲ್ವೆ ಸಚಿವ ಪಿ.ಕೆ ಬನ್ಸಾಲ್ ಅವರು ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ.
ನವದೆಹಲಿ: ಬಡ್ತಿಗಾಗಿ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಪಕ್ಷಗಳ ಕೆಂಗಣ್ಣಿಗೆ ಗುರಿಯಾಗಿದ್ದ ಕೇಂದ್ರ ರೇಲ್ವೆ ಸಚಿವ ಪಿ.ಕೆ ಬನ್ಸಾಲ್ ಅವರು ತಮ್ಮ ಸ್ಥಾನಕ್ಕೆ ಶುಕ್ರವಾರ ರಾಜಿನಾಮೆ ನೀಡಿದ್ದಾರೆ.
ಇಂದು ಸಂಜೆ ಪ್ರಧಾನಿ ಮನಮೋಹನ್ ಸಿಂಗ್ ಅವರನ್ನು ಭೇಟಿ ಮಾಡಿದ ಬನ್ಸಾಲ್ ಅವರು, ತಮ್ಮ ರಾಜಿನಾಮೆ ಪತ್ರವನ್ನು ಪ್ರಧಾನಿಗಳಿಗೆ ನೀಡಿದ್ದಾರೆ. ಪ್ರಧಾನಿ ಮನಮೋಹನ್ ಸಿಂಗ್ ಅವರು ಬನ್ಸಾಲ್ ಅವರ ರಾಜಿನಾಮೆಯನ್ನು ಅಂಗೀಕರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಬನ್ಸಾಲ್ ಅವರ ಸೋದರಳಿಯ ವಿಜಯ್ ಸಿಂಗ್ಲಾ ಎಂಬುವವರನ್ನು ರೇಲ್ವೆ ಅಧಿಕಾರಿ ಮನೋಜ್ ಕುಮಾರ್ ಎಂಬುವವರ ಬಡ್ತಿಗಾಗಿ 90 ಲಕ್ಷ ರು. ಲಂಚ ಪಡೆದ ಆರೋಪದ ಮೇಲೆ ಬಂಧಿಸಿದ್ದರು. ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಪ್ರತಿಪಕ್ಷಗಳು ಸಚಿವ ಬನ್ಸಾಲ್ ಅವರ ರಾಜಿನಾಮೆಗೆ ಪಟ್ಟು ಹಿಡಿದಿದ್ದವು. ಇದೇ ಪ್ರಕರಣ ಸಂಸತ್ ಕಲಾಪಕ್ಕೂ ತೊಡಕಾಗಿತ್ತು. ಅಲ್ಲದೆ ಪ್ರತಿಪಕ್ಷಗಳ ತೀವ್ರ ವಿರೋಧದಿಂದಾಗಿ ಕಲಾಪವನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಗಿತ್ತು.
ಇತ್ತ ಪ್ರಧಾನಿಗಳನ್ನು ಭೇಟಿ ಮಾಡಿದ್ದ ಪಿ.ಕೆ. ಬನ್ಸಾಲ್ ಅವರು ರಾಜಿನಾಮೆ ಇಂಗಿತವನ್ನು ವ್ಯಕ್ತಪಡಿಸಿದ್ದರು. ಆದರೆ ಕರ್ನಾಟಕ ವಿಧಾನಸಭೆಯ ಚುನಾವಣೆಯವರೆಗೂ ಕಾಯುವಂತೆ, ಚುನಾವಣೆಯ ಬಳಿಕ ತೀರ್ಮಾನ ಕೈಗೊಳ್ಳುವಂತೆ ಸೂಚಿಸಿದ್ದರು. ಅದರಂತೆ ಬನ್ಸಾಲ್ ಅವರು ಇಂದು ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ.
ನೂತನ ರೇಲ್ವೆ ಸಚಿವರಾಗಿ ಮಲ್ಲಿಕಾರ್ಜುನ ಖರ್ಗೆ
ಪಿ.ಕೆ. ಬನ್ಸಾಲ್ ಅವರ ರಾಜಿನಾಮೆಯಿಂದ ತೆರವಾಗಿರುವ ರೇಲ್ವೆ ಸಚಿವ ಸ್ಥಾನಕ್ಕೆ ಕೇಂದ್ರ ಸಚಿವ ಮಲ್ಲಿಕಾರ್ಜುನ ಖರ್ಗೆ ಅವರು ಆಯ್ಕೆಯಾಗುವ ಸಾಧ್ಯತೆಗಳಿವೆ. ಕರ್ನಾಟಕದ ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿಯಾಗಿದ್ದ ಖರ್ಗೆ ಅವರಿಗೆ ಕೇಂದ್ರ ಸರ್ಕಾರ ಬಂಪರ್ ಕೊಡುಗೆ ನೀಡುವ ಸಾಧ್ಯತೆ ಇದೆ. ಮುಂದಿನವಾರ ಕೇಂದ್ರ ಸಂಪುಟ ಪುನಾರ್ರಚನೆಯಾಗಲಿದ್ದು, ಮಲ್ಲಿಕಾರ್ಜುನ ಖರ್ಗೆ ಅವರು ರೇಲ್ವೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.