ಸಿಎಂ ಆಯ್ಕೆಗೆ 'ಕೈ' ಚಾಲನೆ, ಸಿದ್ದು ನೂತನ ನಾಯಕ?
ಇತ್ತೀಚಿಗೆ ನಡೆದ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಸ್ಪಷ್ಟ ಬಹುಮತ ಪಡೆದಿರುವ ಕಾಂಗ್ರೆಸ್, ನೂತನ ಮುಖ್ಯಮಂತ್ರಿ ..
ಬೆಂಗಳೂರು: ಇತ್ತೀಚಿಗೆ ನಡೆದ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಸ್ಪಷ್ಟ ಬಹುಮತ ಪಡೆದಿರುವ ಕಾಂಗ್ರೆಸ್, ನೂತನ ಮುಖ್ಯಮಂತ್ರಿ ಆಯ್ಕೆಗೆ ಶುಕ್ರವಾರ ಚಾಲನೆ ನೀಡಿದೆ.
ಸಿದ್ದರಾಮಯ್ಯ ಅವರಿಗೆ ರಾಜ್ಯದ ನೂತನ ಮುಖ್ಯಮಂತ್ರಿಯಾಗುವ ಯೋಗ ಒದಗಿ ಬಂದಿದ್ದು, ಕಾಂಗ್ರೆಸ್ ಹೈಕಮಾಂಡ್ ಅವರನ್ನೇ ಶಾಸಕಾಂಗ ಪಕ್ಷ ನಾಯಕನ್ನನಾಗಿ ಆಯ್ಕೆ ಮಾಡುವ ಸಾಧ್ಯತೆ ಇದೆ. ಈ ಸಂಬಂಧ ಇಂದು ಬೆಳಗ್ಗೆ ಕಾಂಗ್ರೆಸ್ ಹೈಕಮಾಂಡ್ ಪ್ರತಿನಿಧಿಗಳಾಗಿ ಕೇಂದ್ರ ರಕ್ಷಣಾ ಸಚಿವ ಎ.ಕೆ.ಆಂಟನಿ, ಕರ್ನಾಟಕ ಉಸ್ತುವಾರಿ ಮಧಸೂದನ್ ಮಿಸ್ತ್ರಿ ಹಾಗೂ ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಅವರು ಬೆಂಗಳೂರಿಗೆ ಆಗಮಿಸಿದ್ದು, ಪಕ್ಷದ ಕಚೇರಿಯಲ್ಲಿ ನಡೆಯುತ್ತಿರುವ ಶಾಸಕಾಂಗ ಪಕ್ಷದ ಸಭೆಯಲ್ಲಿ ಶಾಸಕರ ಅಭಿಪ್ರಾಯ ಸಂಗ್ರಹಿಸುತ್ತಿದ್ದಾರೆ.
ಈ ಎಲ್ಲ ಬೆಳವಣಿಗೆಗೆಳ ನಡುವೆ ಮುಖ್ಯಮಂತ್ರಿ ಹುದ್ದೆಯ ರೇಸ್ನಲ್ಲಿ ಮುಂಚೂಣಿಯಲ್ಲಿರುವ ಸಿದ್ದರಾಮಯ್ಯ ಅವರು ಶಾಸಕಾಂಗ ಪಕ್ಷದ ಸಭೆಗೂ ಮುನ್ನ ಮಾಜಿ ಕೇಂದ್ರ ಸಚಿವ ಎಸ್.ಎಂ.ಕೃಷ್ಣ ಅವರನ್ನು ಭೇಟಿ ಮಾಡಿ ಸಹಕಾರ ಕೋರಿದ್ದಾರೆ.
ಸಿದ್ದರಾಮಯ್ಯ ಅವರಿಗೆ ಪ್ರತಿ ಸ್ಪರ್ಧಿಯಾಗಿರುವ ಕೇಂದ್ರ ಕಾರ್ಮಿಕ ಸಚಿವ ಮಲ್ಲಿಕಾರ್ಜುನ್ ಖರ್ಗೆ ಅವರು ಸಹ ಮೊಬೈಲ್ ಮೂಲಕ ಎಲ್ಲ ನೂತನ ಶಾಸಕರನ್ನು ಸಂಪರ್ಕಿಸಿ ಬೆಂಬಲ ಕೋರುತ್ತಿದ್ದಾರೆ.
ಈ ಚುನಾವಣೆಯಲ್ಲಿ ಸೋಲು ಅನುಭವಿಸಿರುವ ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಅವರು ತಾವೂ ಸಹ ಸಿಎಂ ಆಕಾಂಕ್ಷಿಯಾಗಿದ್ದು, ರೇಸ್ನಿಂದ ಹಿಂದೆ ಸರಿದಿಲ್ಲ ಎಂದು ಹೇಳಿದ್ದಾರೆ. ಅಲ್ಲದೆ ಪಕ್ಷ ಮರಳಿ ಅಧಿಕಾರಕ್ಕೆ ತರುವಲ್ಲಿ ತಮ್ಮ ಪಾತ್ರವೂ ಇದೆ. ಪಕ್ಷದ ಗೆಲುವಿಗೆ ನಾನು ಸಾಕಷ್ಟು ಶ್ರಮಿಸಿದ್ದೇನೆ ಎಂದು ಹೇಳಿದ್ದಾರೆ.
ಇನ್ನು ಮತ್ತೊರ್ವ ಪ್ರಮುಖ ಆಕಾಂಕ್ಷಿಯಾಗಿರುವ ಡಿ.ಕೆ.ಶಿವಕುಮಾರ್ ಅವರು, ಪಕ್ಷದಲ್ಲಿ ಯಾವುದೇ ಭಿನ್ನಾಭಿಪ್ರಾಯ ಇಲ್ಲ. ನಾವೆಲ್ಲ ಒಗ್ಗಾಟ್ಟಾಗಿದ್ದೇವೆ ಮತ್ತು ಹೈಕಮಾಂಡ್ ನಿರ್ಧಾರಕ್ಕೆ ಬದ್ಧ ಎಂದು ಹೇಳಿದ್ದಾರೆ.