ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಸೋಮವಾರ ಸಿಎಂ ಆಗಿ ಸಿದ್ದು ಪ್ರಮಾಣ

ರಾಜ್ಯದ 28ನೇ ಮುಖ್ಯಮಂತ್ರಿಯಾಗಿ ಕಾಂಗ್ರೆಸ್ ಮುಖಂಡ ಸಿದ್ದರಾಮಯ್ಯ ಅವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ.

Srinivasa Murthy VN
Updated On : 10 May 2013, 5:19 am

ಬೆಂಗಳೂರು: ರಾಜ್ಯದ 28ನೇ ಮುಖ್ಯಮಂತ್ರಿಯಾಗಿ ಕಾಂಗ್ರೆಸ್ ಮುಖಂಡ ಸಿದ್ದರಾಮಯ್ಯ ಅವರು ಆಯ್ಕೆಯಾಗಿದ್ದು, ಇದೇ ಸೋಮವಾರ ನೂತನ ಸರ್ಕಾರದ ಮುಖ್ಯಮಂತ್ರಿಯಾಗಿ ಅವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಸಿಎಂ ಆಯ್ಕೆ ಸಂಬಂಧ ನವದೆಹಲಿಯಿಂದ ಹೈಕಮಾಂಡ್ ಪ್ರತಿನಿಧಿಯಾಗಿ ಇಂದು ಬೆಳಗ್ಗೆ ಬೆಂಗಳೂರಿಗೆ ಆಗಮಿಸಿದ್ದ ಕಾಂಗ್ರೆಸ್ ವೀಕ್ಷಕರ ತಂಡ, ಪಕ್ಷದ ಕಚೇರಿಯಲ್ಲಿ ಶಾಸಕಾಂಗ ಪಕ್ಷದ ಸಭೆ ನಡೆಸಿತು. ಸಭೆಯಲ್ಲಿ ಮುಂದಿನ ಮುಖ್ಯಮಂತ್ರಿ ಆಯ್ಕೆ ಕುರಿತು ಚೀಟಿಯಲ್ಲಿ ಎಲ್ಲ ಶಾಸಕರ ಅಭಿಪ್ರಾಯ ಸಂಗ್ರಹ ಮಾಡಲಾಗಿದೆ. ಮೂಲಗಳ ಪ್ರಕಾರ ಸಭೆಯಲ್ಲಿ ಬಹುತೇಕ ಶಾಸಕರು ಸಿದ್ದರಾಮಯ್ಯ ಅವರ ಪರ ಒಲವು ವ್ಯಕ್ತಪಡಿಸಿದ್ದರು.

ಬೆಂಗಳೂರಿಗೆ ಆಗಮಿಸಿದ್ದ ಕೇಂದ್ರ ಸಚಿವರಾದ ಎಕೆ ಆಂಟನಿ, ಅಂಬಿಕಾ ಸೋನಿ ಮತ್ತು ರಾಜ್ಯ ಕಾಂಗ್ರೆಸ್ ಉಸ್ತುವಾರಿ ಮಧುಸೂದನ್ ಮಿಸ್ತ್ರಿ ಅವರು, ಇಂದು ಶಾಸಕರ ಅಭಿಪ್ರಾಯ ಸಂಗ್ರಹಿಸಿದ್ದಾರೆ. ಅಲ್ಲದೆ ಚೀಟಿಗಳಲ್ಲಿ ಸಿಎಂ ಅಭ್ಯರ್ಥಿ ಮತ್ತು ಅವರ ಕುರಿತ ಅಭಿಪ್ರಾಯ ತಿಳಿಸುವಂತೆ ವೀಕ್ಷಕರು ಶಾಸಕರಿಗೆ ಸೂಚಿಸಿದ್ದರು. ಅದರಂತೆ ಎಲ್ಲ ಶಾಸಕರುಗಳು ಚೀಟಿಗಳಲ್ಲಿ ತಮ್ಮ ಅಭಿಪ್ರಾಯ ಮತ್ತು ಸಿಎಂ ಅಭ್ಯರ್ಥಿಯ ಹೆಸರನ್ನು ಸೂಚಿಸಿದ್ದರು.

ಕೇಂದ್ರ ವೀಕ್ಷಕರ ತಂಡ  ದೂರವಾಣಿ ಮೂಲಕವೇ ಶಾಸಕ ಅಭಿಪ್ರಾಯವನ್ನು ಸೋನಿಯಾಗಾಂಧಿ ರವಾನಿಸಿ ಚರ್ಚಿಸಿದ್ದಾರೆ. ನಂತರ ಸೋನಿಯಾಗಾಂಧಿ ಅವರು ದೂರವಾಣಿ ಮೂಲಕವೇ ಸಿದ್ದರಾಮಯ್ಯ ಆಯ್ಕೆಗೆ ಹಸಿರು ನಿಶಾನೆ ತೋರಿದರು. ನಂತರ ವೀಕ್ಷಕರಾಗಿ ಬಂದಿದ್ದ ರಕ್ಷಣಾ ಸಚಿವ ಎ.ಕೆ.ಆಂಟನಿ ಅವರು ಮುಖ್ಯಮಂತ್ರಿ ಹುದ್ದೆಗೆ ಸಿದ್ದರಾಮಯ್ಯ ಅವರನ್ನು ಹೆಸರನ್ನು ಅಧಿಕೃತವಾಗಿ ಪ್ರಕಟಿಸಿದರು.

ಇದೇ ಸೋಮವಾರದಂದು ಬೆಳಗ್ಗೆ 11.15ಕ್ಕೆ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದ್ದು, ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಇಂದೇ ರಾಜ್ಯಪಾಲರ ಭೇಟಿ ಮಾಡಲಿರುವ ಸಿದ್ದು
ನೂತನ ಶಾಸಕಾಂಗ ಪಕ್ಷದ ನಾಯಕರಾಗಿ ಸರ್ವಾನುಮತದಿಂದ ಆಯ್ಕೆಯಾಗಿರುವ ಸಿದ್ದರಾಮಯ್ಯ ಅವರು, ಇಂದು ಸಂಜೆ ರಾಜ್ಯಪಾಲ ಹಂಸರಾಜ ಭರದ್ವಾಜ್ ಅವರನ್ನು ಭೇಟಿ ಮಾಡಲಿದ್ದು, ನೂತನ ಸರ್ಕಾರ ರಚನೆಯ ಹಕ್ಕು ಮಂಡಿಸಲಿದ್ದಾರೆ.

ಕಂಠೀರವ ಕ್ರೀಡಾಂಗಣದಲ್ಲಿ ಪ್ರಮಾಣವಚನ ಸ್ವೀಕಾರ ಸಮಾರಂಭ
ವಿಧಾನಸೌಧದ ಮುಂಭಾಗದಲ್ಲಿ ಮೆಟ್ರೋ ಕಾಮಗಾರಿ ನಡೆಯುತ್ತಿರುವುದರಿಂದ ನೂತನ ಮುಖ್ಯಮಂತ್ರಿಗಳ ಪ್ರಮಾಣ ವಚನ ಸ್ವೀಕಾರ ಸಮಾರಂಭವನ್ನು ಕಂಠೀರವ ಕ್ರೀಡಾಂಗಣದಲ್ಲಿ ನಡೆಸಲು ಅಧಿಕಾರಿಗಳು ತೀರ್ಮಾನಿಸಿದ್ದಾರೆ. ಇದಕ್ಕಾಗಿ ಕಂಠೀರವ ಕ್ರೀಡಾಂಗಣದ ಹೊರಾಂಗಣ ಆವರಣವನ್ನು ಆಯ್ಕೆ ಮಾಡಿಕೊಂಡಿದ್ದು, ಸೋಮವಾರ ಅಲ್ಲಿ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.

ವಿಧಾನಸೌಧದ ಮುಂಭಾಗದಲ್ಲಿ ಮೆಟ್ರೋ ಸುರಂಗ ಮಾರ್ಗದ ಕಾರ್ಯ ಪ್ರಗತಿಯಲ್ಲಿದ್ದು, ಇದಕ್ಕಾಗಿಯೇ ವಿಧಾನಸೌಧದ ಮುಂಭಾಗದಲ್ಲಿದ್ದ ಅಂಬೇಡ್ಕರ್ ಪ್ರತಿಮೆಯನ್ನು ಹಲವು ದಲಿತ ಸಂಘಟನೆಗಳ ವಿರೋಧದ ನಡುವೆಯೂ ಸ್ಥಳಾಂತರಿಸಲಾಗಿತ್ತು. ಇದೀಗ ಸುರಂಗ ಮಾರ್ಗದ ಕಾರ್ಯದಲ್ಲಿ ಕಾರ್ಮಿಕರು ತೊಡಗಿಕೊಂಡಿದ್ದು, ವಿಧಾನಸೌಧದ ಮುಂದಿನ ಆವರಣದಲ್ಲಿ ಅವರು ತಡೆಗೋಡೆ ನಿರ್ಮಿಸಿಕೊಂಡಿದ್ದಾರೆ. ಹೀಗಾಗಿ ಮುಖ್ಯಮಂತ್ರಿಗಳ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಬೇಕಾಗುವಷ್ಟು ವಿಶಾಲವಾದ ಜಾಗದ ಕೊರತೆಯಿಂದಾಗಿ ಸಮಾರಂಭವನ್ನು ಕಂಠೀರವ ಕ್ರೀಡಾಂಗಣದಲ್ಲಿ ನಡೆಸಲಾಗುತ್ತಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement