ಮಾಜಿ ಸಿಎಂ ಧರಂಸಿಂಗ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಧರಂ ಸಿಂಗ್ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಬೆಂಗಳೂರಿನ ಕನ್ನಿಂಗ್ಹ್ಯಾಮ್ ರಸ್ತೆಯಲ್ಲಿರುವ ವಿಕ್ರಮ್ ಆಸ್ಪತ್ರೆಯಲ್ಲಿ ಧರಂ ಸಿಂಗ್ ಅವರನ್ನು ದಾಖಲಿಸಲಾಗಿದ್ದು, ವಿಶೇಷ ಕೊಠಡಿಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಹೃದಯ ಸಂಬಂಧಿ ತೊಂದರೆಯಿಂದಾಗಿ ಧರಂ ಸಿಂಗ್ ಅವರು ಅಸ್ವಸ್ಥರಾಗಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.
ಈ ನಡುವೆ ಅಸ್ವಸ್ಥಗೊಂಡಿರುವ ಧರಂ ಸಿಂಗ್ ಅವರನ್ನು ನೋಡಲು ಆಸ್ಪತ್ರೆಗೆ ಗಣ್ಯರ ದಂಡೇ ಹರಿದು ಬರುತ್ತಿದ್ದು, ಕರ್ನಾಟಕ ರಾಜ್ಯದ ನಿಯೋಜಿತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಹ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ. ಧರಂ ಸಿಂಗ್ ಅವರ ಆರೋಗ್ಯ ವಿಚಾರಿಸಿರುವ ಸಿದ್ದು, ಶೀಘ್ರ ಚೇತರಿಕೆಗೆ ಹಾರೈಸಿದ್ದಾರೆ.
ಕಳೆದ ಬಾರಿಯ ವಿಧಾನಸಭೆ ಚುನಾವಣೆಯ ನಂತರ ರಾಜ್ಯ ರಾಜಕೀಯದಿಂದ ದೂರವಾಗಿದ್ದ ಧರಂ ಸಿಂಗ್ ಅವರು, ರಾಷ್ಟ್ರ ರಾಜಕಾರಣದತ್ತ ಮುಖ ಮಾಡಿದ್ದರು. ಇತ್ತೀಚೆಗೆ ನಡೆದ ವಿಧಾನಸಭೆ ಚುನಾವಣೆಯಲ್ಲಿ ಧರಂ ಸಿಂಗ್ ಅವರ ಪುತ್ರ ಡಾ.ಅಜಯ್ ಸಿಂಗ್ ಅವರು ಜೇವರ್ಗಿ ಕ್ಷೇತ್ರದಿಂದ ಸ್ಪರ್ಧಿಸಿ ಜಯಶಾಲಿಯಾಗಿದ್ದರು.