ನಾಳೆ ಸಿದ್ದು ಪ್ರಮಾಣ: ಕ್ರೀಡಾಂಗಣ ಸುತ್ತಮುತ್ತ ವಾಹನ ಸಂಚಾರ ನಿಷೇಧ
ಸಿದ್ದರಾಮಯ್ಯ ಅವರು ಪ್ರಮಾಣವಚನ ಸ್ವೀಕರಿಸಲಿರುವ ಹಿನ್ನಲೆಯಲ್ಲಿ ಕಂಠೀರವ ಕ್ರೀಡಾಂಗಣದ ಸುತ್ತಮುತ್ತ ನಾಳೆ ವಾಹನ ಸಂಚಾರವನ್ನು ನಿಷೇಧಿಸಲಾಗಿದೆ.
ಬೆಂಗಳೂರು: ರಾಜ್ಯದ 28ನೇ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರು ಪ್ರಮಾಣವಚನ ಸ್ವೀಕರಿಸಲಿರುವ ಹಿನ್ನಲೆಯಲ್ಲಿ ಕಂಠೀರವ ಕ್ರೀಡಾಂಗಣದ ಸುತ್ತಮುತ್ತ ಸೋಮವಾರ ವಾಹನ ಸಂಚಾರವನ್ನು ನಿಷೇಧಿಸಲಾಗಿದೆ.
ಪ್ರಮಾಣವಚನ ಸ್ವೀಕಾರ ಸಮಾರಂಭ ನಡೆಯಲಿರುವ ಕಂಠೀರವ ಕ್ರೀಡಾಂಗಣದಲ್ಲಿ ಈಗಾಗಲೇ ಅಗತ್ಯೆ ಸಿದ್ದತೆಗಳು ಬಹುತೇಕ ಪೂರ್ಣಗೊಂಡಿದ್ದು, ಭದ್ರತೆಗಾಗಿ ಸುಮಾರು 1000ಕ್ಕೂ ಅಧಿಕ ಪೊಲೀಸ್ ಸಿಬ್ಬಂದಿಗಳನ್ನು ಕ್ರೀಡಾಂಗಣದ ಸುತ್ತಮುತ್ತ ನಿಯೋಜಿಸಲಾಗಿದೆ. ಇಂದು ಮಧ್ಯ ರಾತ್ರಿಯಿಂದಲೇ ಕ್ರೀಡಾಂಗಣಕ್ಕೆ ಸಂಪರ್ಕ ಕಲ್ಪಿಸುವ ಕಸ್ತೂರಬಾ ರಸ್ತೆಯಲ್ಲಿ ವಾಹನ ಸಂಚಾರವನ್ನು ನಿಷೇಧಿಸಲಾಗಿದೆ.
ಪ್ರಮಾಣ ವಚನ ಸಮಾರಂಭಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಸಿದ್ದರಾಮಯ್ಯ ಅಭಿಮಾನಿಗಳು ಲಕ್ಷಾಂತರ ಸಂಖ್ಯೆಯಲ್ಲಿ ಆಗಮಿಸುವ ನಿರೀಕ್ಷೆಯಿದ್ದು, ಇದಕ್ಕಾಗಿ ಕ್ರೀಡಾಂಗಣದಲ್ಲಿ ಸುಮಾರು 20 ಸಾವಿರ ಆಸನಗಳ ವ್ಯವಸ್ಥೆ ಮಾಡಲಾಗಿದೆ. ಅಲ್ಲದೆ ವಿವಿಐಪಿಗಳಿಗೆ ಸುಮಾರು 200 ಆಸನಗಳನ್ನು ಮೀಸಲಿರಿಸಲಾಗಿದೆ. ಪ್ರಧಾನ ವೇದಿಯ ಎಡಭಾಗದಲ್ಲಿ ನಿಯೋಜಿತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕುಟುಂಬ ಸದಸ್ಯರಿಗೆ ಮತ್ತು ಆಪ್ತರಿಗೆ ಆಸನ ವ್ಯವಸ್ಥೆ ಮೀಸಲಿರಿಸಲಾಗಿದೆ.
ಸಂಚಾರ ವ್ಯವಸ್ಥೆಯನ್ನು ಸುಗಮಗೊಳಿಸಲು ಕಸ್ತೂರಬಾ ರಸ್ತೆಯ ಸುತ್ತಮುತ್ತ ಸುಮಾರು 600 ಟ್ರಾಫಿಕ್ ಪೊಲೀಸ್ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ. ಅಲ್ಲದೆ ಸಮಾರಂಭಕ್ಕೆ ಆಗಮಿಸುವವರ ವಾಹನಗಳಿಗೆ ಕಬ್ಬನ್ ಪಾರ್ಕ್ ಸುತ್ತಮುತ್ತ ಮತ್ತು ಮಲ್ಯ ಆಸ್ಪತ್ರೆಯ ಬಳಿ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ. ಕಂಠೀರವ ಕ್ರೀಡಾಂಗಣದ ಪ್ರವೇಶ ದ್ವಾರ ಸಂಖ್ಯೆ 1ರಲ್ಲಿ ವಿವಿಐಪಿಗಳಿಗೆ ಪ್ರವೇಶ ಕಲ್ಪಿಸಲಾಗಿದೆ. ಕ್ರೀಡಾಂಗಣದಲ್ಲಿ ಪಟಾಕಿ, ವಾಧ್ಯಗೋಷ್ಠಿ, ಪ್ಲಾಸ್ಟಿಕ್ ಬಾಟಲಿಗಳು ಮತ್ತು ಕ್ಯಾಮೆರಾಗಳನ್ನು ನಿಷೇಧಿಸಲಾಗಿದೆ. ಮಾಧ್ಯಮ ಪ್ರತಿನಿಧಿಗಳಿಗೆ ಪ್ರತ್ಯೇಕವಾಗಿ ಪ್ರವೇಶ ಅವಕಾಶ ನೀಡಲಾಗಿದ್ದು, ಕಾರ್ಯಕರ್ತರಿಗೆ ಮತ್ತು ಅಭಿಮಾನಿಗಳಿಗೂ ಪ್ರತ್ಯೇಕ ಪ್ರವೇಶ ಕಲ್ಪಿಸಲಾಗಿದೆ.
ಒಟ್ಟಾರೆ ರಾಜ್ಯದ 28ನೇ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರು ನಾಳೆ ಪ್ರಮಾಣ ಸ್ವೀಕರಿಸಲಿದ್ದು, ಸಮಾರಂಭಕ್ಕೆ ಬೇಕಾಗುವ ಎಲ್ಲ ಸಿದ್ಧತೆಗಳು ಬಹುತೇಕ ಪೂರ್ಣಗೊಂಡಿದೆ.