ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಸಚಿವ ಸ್ಥಾನ ವಂಚಿತರ ಆಕ್ರೋಶ: ಬೆಂಬಲಿಗರಿಂದ ಕಾಂಗ್ರೆಸ್ ಕಚೇರಿಗೆ ಬೆಂಕಿ

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ನೂತನ ಸಚಿವ ಸಂಪುಟ ಅಸ್ತಿತ್ವಕ್ಕೆ ಬರುತ್ತಿದ್ದಂತೆಯೇ,.

Lingaraj Badiger
Updated On : 18 May 2013, 1:14 am

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ನೂತನ ಸಚಿವ ಸಂಪುಟ ಅಸ್ತಿತ್ವಕ್ಕೆ ಬರುತ್ತಿದ್ದಂತೆಯೇ ಕಾಂಗ್ರೆಸ್‌ನಲ್ಲಿ ಅಸಮಾಧಾನ ಭುಗಿಲೆದ್ದಿದ್ದು, ಯಾದಗಿರಿ ಶಾಸಕ ಡಾ.ಎ.ಬಿ.ಮಾಲಕರೆಡ್ಡಿ ಅವರಿಗೆ ಸಚಿವ ಸ್ಥಾನ ಸಿಗದ ಹಿನ್ನೆಲೆಯಲ್ಲಿ ತೀವ್ರ ಆಕ್ರೋಶಗೊಂಡ ಅವರ ಬೆಂಬಲಿಗರು ತಮ್ಮದೇ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಬೆಂಕಿ ಹಚ್ಚಿದ್ದಾರೆ. ಘಟನೆಯಲ್ಲಿ ಕಚೇರಿಯ ಪೀಠೋಪಕರಣಗಳು ಧ್ವಂಸವಾಗಿವೆ.

ಯಾದಗಿರಿಯಲ್ಲಿ ಸಚಿವ ಸ್ಥಾನ ವಂಚಿತ ಶಾಸಕ ಮಾಲಕರೆಡ್ಡಿ ಅವರ ಬೆಂಬಲಗರ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಉದ್ರಿಕ್ತ ಬೆಂಬಲಿಗರು ಕಾಂಗ್ರೆಸ್ ಕಚೇರಿಯ ಕಿಟಕಿ ಹಾಗೂ ಬಾಗಿಲಿಗೆ ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿದ್ದಾರೆ.

ಜಿ.ಪಂ, ತಾ.ಪಂ ಸದಸ್ಯರು ರಾಜಿನಾಮೆಗೆ ನಿರ್ಧಾರ
ಮಾಲಕರೆಡ್ಡಿ ಅವರಿಗೆ ಸಚಿವ ಸ್ಥಾನ ನೀಡದ ಹಿನ್ನೆಲೆಯಲ್ಲಿ ತೀವ್ರ ಅಸಮಾಧಾನಗೊಂಡಿರುವ ಯಾದಗಿರಿ ಜಿಲ್ಲಾ ಪಂಚಾಯತ್ ಹಾಗೂ ತಾಲೂಕ ಪಂಚಾಯತ್ ಸದಸ್ಯರು ರಾಜಿನಾಮೆ ನೀಡಲು ನಿರ್ಧರಿಸಿದ್ದಾರೆ.

ಕನಕಪುರದಲ್ಲಿ ಡಿಕೆಶಿ ಬೆಂಬಲಿಗರಿಂದ ಪ್ರತಿಭಟನೆ
ಅಕ್ರಮ ಗಣಿಗಾರಿಕೆ ಸೇರಿದಂತೆ ಹಲವು ಭ್ರಷ್ಟಾಚಾರ ಪ್ರಕರಣಗಳನ್ನು ಎದುರಿಸುತ್ತಿರುವ ಕಾಂಗ್ರೆಸ್‌ನ ಹಿರಿಯ ನಾಯಕ ಡಿ.ಕೆ.ಶಿವಕುಮಾರ್ ಅವರಿಗೆ ಸಚಿವ ಸ್ಥಾನ ನೀಡದ ಹಿನ್ನೆಲೆಯಲ್ಲಿ ಅವರ ಬೆಂಬಲಿಗರು ಕನಕಪುರದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.

ಡಿಕೆಶಿ ಬೆಂಬಲಿಗರು ಕನಕಪುರ ಹಾಗೂ ರಾಮನಗರದಲ್ಲಿ ಟೈರ್‌ಗಳಿಗೆ ಬೆಂಕಿ ಹಚ್ಚಿ, ರಸ್ತೆ ತಡೆ ನಡೆಸಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.

ಇನ್ನು ಮೈಸೂರಿನಲ್ಲೂ ಶಾಸಕ ತನ್ವೀರ್ ಶೇಠ್ ಅವರಿಗೆ ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಅವರ ಬೆಂಬಲಗರು ಪ್ರತಿಭಟನೆ ನಡೆಸಿದರು. ಈ ವೇಳೆ ತನ್ವೀರ್ ಶೇಠ್ ಅವರ ಓರ್ವ ಬೆಂಬಲಿಗ ಫೈರೋಜ್ ಖಾನ್ ಎಂಬುವವರು ಮೈಗೆ ಸೀಮೆ ಎಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement