ಯುಪಿಎ ವಿರುದ್ಧ ಬಿಜೆಪಿ ಪ್ರತಿಭಟನೆ
ನವದೆಹಲಿ: ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರದ ವಿರುದ್ಧ ಭಾರತೀಯ ಜನತಾ ಪಕ್ಷ(ಬಿಜೆಪಿ) ಗುರುವಾರ ದೆಹಲಿಯ ಜನಪಥ್‌ನಲ್ಲಿ ಪ್ರತಿಭಟನೆ ನಡೆಸಿದೆ.
ಅನುರಾಗ್ ಠಾಕುರ್ ನಾಯಕತ್ವದಲ್ಲಿ 100 ಜನರನ್ನೊಳಗೊಂಡ ಬಿಜೆಪಿ ಯುವ ಮೋರ್ಚಾದ ಸದಸ್ಯರು ಪ್ರತಿಭಟನಾ ಮೆರವಣಿಗೆ ನಡೆಸಿದ್ದಾರೆ.
ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತಾ ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನಾಕಾರರು ಪೊಲೀಸರ ಮನವಿಗೆ ಕಿವಿಗೊಡದ ಹಿನ್ನಲೆಯಲ್ಲಿ ಪೊಲೀಸರು ಜಲ ಫಿರಂಗಿ ನಡೆಸಿದ್ದಾರೆ.
ಬಿಜೆಪಿ ಯುವ ಮೋರ್ಚಾ ಸದಸ್ಯರು ಕಾಂಗ್ರೆಸ್ ಕೇಂದ್ರ ಕಛೇರಿವರೆಗೆ ಪ್ರತಿಭಟನೆ ರ್ಯಾಲಿ ಹಮ್ಮಿಕೊಂಡಿದ್ದರು. ಪ್ರತಿಭಟನಾಕಾರರನ್ನು ಪೊಲೀಸರು ಬಂಧಿಸಿ ಕೆಲ ಗಂಟೆಗಳ ನಂತರ ಬಿಡುಗಡೆ ಮಾಡಿದ್ದಾರೆ.
ಬಿಜೆಪಿಯಲ್ಲಿ ಭ್ರಷ್ಟರಿದ್ದಾರೆ ಹಾಗೂ ಅಭಿವೃದ್ಧಿ ಕೆಲಸಗಳನ್ನು ಮಾಡುವಲ್ಲಿ ವಿಫಲವಾಗಿದೆ ಎಂದು ಕಾಂಗ್ರೆಸ್ ಆರೋಪಿಸಿತ್ತು. ಕಾಂಗ್ರೆಸ್ ಹೇಳಿಕೆಯನ್ನು ಖಂಡಿಸಿರುವ ಬಿಜೆಪಿ, ಮೊದಲು ಕಾಂಗ್ರೆಸ್ ತನ್ನಲ್ಲಿರುವ ಭ್ರಷ್ಟರನ್ನು ತೊಲಗಿಸಲಿ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂಧಾಗಿನಿಂದಲೂ ಹಗರಣಗಳು ಹೆಚ್ಚಾಗಿವೆ. ಆದ್ದರಿಂದ ಕಾಂಗ್ರೆಸ್ ಸರ್ಕಾರ ಅಧಿಕಾರದಿಂದ ಕೆಳಗಿಳಿಯಬೇಕು ಎಂದು ಪ್ರತಿಭಟನೆಯಲ್ಲಿ ಆಗ್ರಹಿಸಿದ್ದಾರೆ.