ಡೆಂಘೀ: ಮಕ್ಕಳ ಕುಟುಂಬಕ್ಕೆ 1 ಲಕ್ಷ ರು. ಪರಿಹಾರ
ಶಂಕಿತ ಡೆಂಘೀ ಜ್ವರಕ್ಕೆ ಬಲಿಯಾದ ಮೈಸೂರಿನ 4 ಮಕ್ಕಳ ಕುಟುಂಬಕ್ಕೆ ತಲಾ 1 ಲಕ್ಷ ರುಪಾಯಿ ಪರಿಹಾರ ನೀಡುವುದಾಗಿ...
ಮೈಸೂರು: ಶಂಕಿತ ಡೆಂಘೀ ಜ್ವರಕ್ಕೆ ಬಲಿಯಾದ ಮೈಸೂರಿನ 4 ಮಕ್ಕಳ ಕುಟುಂಬಕ್ಕೆ ತಲಾ 1 ಲಕ್ಷ ರುಪಾಯಿ ಪರಿಹಾರ ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.
ಮೈಸೂರಿನ ಸಾಲುಂಡಿ ಗ್ರಾಮದಲ್ಲಿ ಚಿಕಿತ್ಸೆ ಫಲಕಾರಿಯಾಗದೆ 4 ಮಕ್ಕಳು ಡೆಂಘೀ ಮಹಾಮಾರಿಗೆ ಬಲಿಯಾಗಿದ್ದರು. ಈ ಸಂಬಂಧ ಇಂದು ಸಾಲುಂಡಿ ಗ್ರಾಮಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೃತ ಮಕ್ಕಳ ಕುಟುಂಬಕ್ಕೆ ತಲಾ 1 ಲಕ್ಷ ಪರಿಹಾರ ಘೋಷಿಸಿದ್ದಾರೆ.
ಡೆಂಘೀ ಜ್ವರದ ಚಿಕಿತ್ಸೆಗಾಗಿ ಸಾಲುಂಡಿ ಗ್ರಾಮದಲ್ಲಿ ನಿರ್ಮಿಸಿಲಾಗಿರುವ ತುರ್ತು ಚಿಕಿತ್ಸಾ ಘಟಕಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಸಿದ್ದರಾಮಯ್ಯ, ಮೈಸೂರಿನ ವಿವಿಧ ಆಸ್ಪತ್ರೆಗಳಲ್ಲಿ ಇನ್ನಷ್ಟು ಮಂದಿ ಚಿಕಿತ್ಸೆ ಪಡೆಯುತ್ತಿದ್ದು, ಅವರುಗಳ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದರು.
ಮುಂದಿನ ದಿನಗಳಲ್ಲಿ ಡೆಂಘೀ ಮಹಾಮಾರಿ ರಾಜ್ಯದಾದ್ಯಂತ ಹರಡದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಎಲ್ಲ ಜಿಲ್ಲಾಡಳಿತಕ್ಕೂ ಆದೇಶಿಸಲಾಗಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.