ಪ್ರಾಮಾಣಿಕವಾಗಿ ಕೆಲಸ ಮಾಡಿ: ಅಧಿಕಾರಿಗಳಿಗೆ ಸಿಎಂ ಸೂಚನೆ
ಪ್ರಾಮಾಣಿಕವಾಗಿ ಕೆಲಸ ಮಾಡಿ, ಆಡಳಿತದಲ್ಲಿ ಕಣ್ಣಿಗೆ ಕಾಣುವ ರೀತಿ ಬದಲಾವಣೆ ತರಬೇಕು ಎಂದು ಮುಖ್ಯಮಂತ್ರಿ..
ಬೆಂಗಳೂರು: ಪ್ರಾಮಾಣಿಕವಾಗಿ ಕೆಲಸ ಮಾಡಿ, ಆಡಳಿತದಲ್ಲಿ ಕಣ್ಣಿಗೆ ಕಾಣುವ ರೀತಿ ಬದಲಾವಣೆ ತರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಇಂದು ವಿಧಾನಸೌಧದಲ್ಲಿ ನಡೆದ ಜಿಲ್ಲಾಧಿಕಾರಿಗಳ ಹಾಗೂ ಜಿಲ್ಲಾ ಪಂಚಾಯಿತಿ ಸಿಇಒಗಳ ಸಭೆಯಲ್ಲಿ ಮಾತನಾಡಿದ ಸಿಎಂ ಸಿದ್ದು, ಸರ್ಕಾರದ ಮೇಲೆ ಜನ ತುಂಬಾ ವಿಶ್ವಾಸವಿಟ್ಟಿದ್ದಾರೆ. ಬದಲಾವಣೆ ಬಯಸಿ ಜನತೆ ಕಾಂಗ್ರೆಸ್‌ಗೆ ಅಧಿಕಾರ ನೀಡಿದ್ದಾರೆ. ಹೀಗಾಗಿ ಅವರ ಅಪೇಕ್ಷೆಗೆ ತೊಂದರೆ ಮಾಡದಿರಿ. ಈ ನಿಟ್ಟಿನಲ್ಲಿ ಪ್ರತಿ ಅಧಿಕಾರಿಯೂ ಪ್ರಾಮಾಣಿಕವಾಗಿ ಕೆಲಸ ಮಾಡಬೇಕು ಎಂದು ಸಲಹೆ ನೀಡಿದರು.
ಭ್ರಷ್ಟಾಚಾರ ರಹಿತ ಹಾಗೂ ಪಾರದರ್ಶಕ ಆಡಳಿತದ ಬಗ್ಗೆ ಜನತೆಗೆ ನೀಡಿದ ಭರವಸೆಯಂತೆ ನಾವು ನಡೆದುಕೊಳ್ಳಬೇಕಿದೆ. ಅಲ್ಲದೆ ಜಿಲ್ಲೆಯಲ್ಲಾಗುವ ಎಲ್ಲಾ ಆಗು-ಹೋಗುಗಳಿಗೆ ಜಿಲ್ಲಾಧಿಕಾರಿಗಳು ಹಾಗೂ ಪ್ರಾದೇಶಿಕ ಆಯುಕ್ತರೇ ಹೊಣೆಗಾರರು ಎಂದು ಸಿದ್ದು ಎಚ್ಚರಿಸಿದರು.
ಬೆಂಗಳೂರು ಸೇರಿದಂತೆ ರಾಜ್ಯದ ನಾನಾ ಜಿಲ್ಲೆಗಳಲ್ಲಿ ಕುಡಿಯುವ ನೀರಿಗೆ ತೀವ್ರ ಆಭಾವ ತಲೆದೋರಿದೆ. ಹೀಗಾಗಿ ಮುಖ್ಯಮಂತ್ರಿಯವರು, ನೀರಿನ ಸಮಸ್ಯೆ ನಿವಾರಣೆಗೆ ಕೈಗೊಳ್ಳಬೇಕಾದ ಕ್ರಮಗಳು ಮತ್ತು ಮುಂದೆ ಅನುಸರಿಸಬೇಕಾದ ಮಾರ್ಗಗಳ ಬಗ್ಗೆ ಅಧಿಕಾರಿಗಳ ಜೊತೆ ಸಮಾಲೋಚನೆ ನಡೆಸಿದರು.
ವಸತಿ ಸಚಿವ ಅಂಬರೀಷ್, ಕೃಷಿ ಸಚಿವ ಕೃಷ್ಣ ಭೈರೇಗೌಡ ಹಾಗೂ ಉನ್ನತ ಶಿಕ್ಷಣ ಹಾಗೂ ಪ್ರವಾಸೋದ್ಯಮ ಸಚಿವ ಆರ್.ವಿ.ದೇಶಪಾಂಡೆ ಸೇರಿದಂತೆ ಹಲವು ಸಚಿವರು ಸಭೆಯಲ್ಲಿ ಭಾಗವಹಿಸಿದ್ದರು.