ಬಿಜೆಪಿಗೆ ಮರಳುವ ಪ್ರಶ್ನೆಯೇ ಇಲ್ಲ: ಬಿಎಸ್ವೈ
ಬಿಜೆಪಿಗೆ ಮರಳುವ ಪ್ರಶ್ನೆಯೇ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಕೆಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ..
ಬೆಂಗಳೂರು: ಬಿಜೆಪಿಗೆ ಮರಳುವ ಪ್ರಶ್ನೆಯೇ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಕೆಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಬುಧವಾರ ಹೇಳಿದ್ದಾರೆ.
ವಿಧಾನಸೌಧದ ವಿರೋಧ ಪಕ್ಷದ ಮೊಗಸಾಲೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ, ಬಿಜೆಪಿಗೆ ಮರಳುವುದು ಸುಳ್ಳು, ಒಮ್ಮೆ ಪಕ್ಷ ತೊರೆದ ಮೇಲೆ ಮರಳಿ ಹೋಗುವ ಪ್ರಶ್ನೆಯೇ ಇಲ್ಲ. ನಾನು ಪ್ರತಿಪಕ್ಷವಾಗಿ ಕೆಲಸ ಮಾಡುತ್ತೇನೆ ಮತ್ತು ಪ್ರಮುಖ ಪ್ರತಿಪಕ್ಷಗಳಿಗೆ ಸಹಕಾರ ನೀಡುತ್ತೇನೆ ಎಂದು ಸ್ಪಷ್ಟಪಡಿಸಿದರು.
ಇದೇ ವೇಳೆ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಹೊಂದಾಣಿಕೆ ಮಾಡಿಕೊಳ್ಳುವ ಮಾತನಾಡಿದ ಮಾಜಿ ಸಿಎಂ, ಯಾವ ಪಕ್ಷದ ಜತೆ ಮೈತ್ರಿ ಮಾಡಿಕೊಳ್ಳಬೇಕು ಎಂಬುದರ ಬಗ್ಗೆ ಇನ್ನು ನಿರ್ಧಾರವಾಗಿಲ್ಲ. ಆದರೆ ಬಿಜೆಪಿ ಬಿಟ್ಟು ಇತರ ಎಲ್ಲ ಪಕ್ಷಗಳ ಜತೆ ಮೈತ್ರಿಗೆ ಕೆಜೆಪಿ ಬಾಗಿಲು ತೆರೆದಿದೆ ಎಂದು ತಿಳಿಸಿದರು.
ಇತ್ತೀಚೆಗಷ್ಟೆ ಶಿವಮೊಗ್ಗದಲ್ಲಿ ಯಡಿಯೂರಪ್ಪ ಅವರು ಲೋಕಸಭೆ ಚುನಾವಣೆಯಲ್ಲಿ ರಾಷ್ಟ್ರೀಯ ಪಕ್ಷಗಳೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುವ ಚಿಂತನೆ ಇದೆ ಎಂದಿದ್ದರು. ಈ ಹಿನ್ನೆಲೆಯಲ್ಲಿ ಮಾಜಿ ಸಚಿವ ಹಾಗೂ ಬಿಜೆಪಿ ಶಾಸಕ ಸಿ.ಟಿ.ರವಿ ಅವರು ನಿನ್ನೆ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ, ಮತ್ತೆ ಪಕ್ಷಕ್ಕೆ ಕರೆತರುವ ಪ್ರಯತ್ನ ಮಾಡಿದ್ದರು.