ಅಸ್ಸಾಂನಲ್ಲಿ ಭೀಕರ ರಸ್ತೆ ಅಪಘಾತ: 28 ಸಾವು
ಅಸ್ಸಾಂನ ಬರ್ಪೆಟಾ ಎಂಬಲ್ಲಿ ಗುರುವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 28 ಮಂದಿ ಮೃತಪಟ್ಟಿದ್ದಾರೆ...
ಗುವಾಹಟಿ: ಅಸ್ಸಾಂನ ಬರ್ಪೆಟಾ ಎಂಬಲ್ಲಿ ಗುರುವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 28 ಮಂದಿ ಮೃತಪಟ್ಟಿದ್ದಾರೆ.
ದಾಲಾಪಾರ ಸಮೀಪ ರಾಷ್ಟ್ರೀಯ ಹೆದ್ದಾರಿ 38ರಲ್ಲಿ ಇಂದು ಬೆಳಿಗ್ಗೆ ಪ್ರಯಾಣಿಕರನ್ನು ಸಾಗಿಸುತ್ತಿದ್ದ ಎರಡು ಮಿನಿ ಬಸ್‌ಗಳು ಟ್ರಕ್‌ಗೆ ಡಿಕ್ಕಿ ಹೊಡೆದಿವೆ. ಈ ಸಂದರ್ಭದಲ್ಲಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದವರ ಪೈಕಿ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ 28 ಮಂದಿ ಮೃತಪಟ್ಟಿದ್ದಾರೆ. ಅಲ್ಲದೆ 9 ಮಂದಿ ತೀವ್ರವಾಗಿ ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೃತಪಟ್ಟವರೆಲ್ಲ ಇಟ್ಟಿಗೆ ತಯಾರಿಕಾ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ಇಂದು ಬೆಳಿಗ್ಗೆ ಎಂದಿನಂತೆ ಎರಡು ವಾಹನಗಳಲ್ಲಿ ಕಾರ್ಮಿಕರನ್ನು ಕರೆದೋಯ್ಯುವಾಗ ದಾಲಾಪಾರ ಎಂಬಲ್ಲಿ ಈ ದುರ್ಘಟನೆ ಸಂಭವಿಸಿದೆ. ಮೃತಪಟ್ಟವರಲ್ಲಿ ಹೆಚ್ಚಿನ ಮಂದಿ ಕಾರ್ಮಿಕರು ಹಾಗೂ ಅವರ ಪರಿವಾರದವರೆ ಆಗಿದ್ದಾರೆ. ವಾಹನಗಳಲ್ಲಿ ಅಧಿಕ ಪ್ರಮಾಣದಲ್ಲಿ ಜನರನ್ನು ಸಾಗಿಸುತ್ತಿದ್ದರು ಎಂದು ತಿಳಿದುಬಂದಿದೆ.
ಸುದ್ದಿ ತಿಳಿಯುತ್ತಿದ್ದಂತೆ ಸರ್ರಬಾಗ್ ಠಾಣೆಯ ಪೊಲೀಸರು ಘಟನಾ ಸ್ಥಳಕ್ಕೆ ಧಾವಿಸಿದ್ದು, ಪ್ರಕರಣ ದಾಖಲಿಸಿಕೊಂಡು ಪರಿಶೀಲನೆ ನಡೆಸುತ್ತಿದ್ದಾರೆ.