ಕೇಜ್ರೀವಾಲ್ ಆಮ್ ಆದ್ಮಿ ಪಕ್ಷದ ಸಿಎಂ ಅಭ್ಯರ್ಥಿ
ಅರವಿಂದ್ ಕೇಜ್ರಿವಾಲ್ ಅವರೇ ತಮ್ಮ ಮುಖ್ಯಮಂತ್ರಿ ಸ್ಥಾನದ ಅಭ್ಯರ್ಥಿ ಎಂದು ಆಮ್ ಆದ್ಮಿ ಪಕ್ಷ ಘೋಷಿಸಿದೆ.
ನವದೆಹಲಿ: ಅರವಿಂದ್ ಕೇಜ್ರಿವಾಲ್ ಅವರೇ ತಮ್ಮ ಮುಖ್ಯಮಂತ್ರಿ ಸ್ಥಾನದ ಅಭ್ಯರ್ಥಿ ಎಂದು ಆಮ್ ಆದ್ಮಿ ಪಕ್ಷ ಘೋಷಿಸಿದೆ.
ಪಂಚ ರಾಜ್ಯಗಳ ವಿಧಾನಸಭಾ ಚುನಾವಣಾ ದಿನಾಂಕ ಪ್ರಕಟವಾಗುತ್ತಿದ್ದಂತೆಯೇ, ರಾಜಕೀಯ ಪಕ್ಷಗಳ ಪ್ರಚಾರ ಭರಾಟೆ ಆರಂಭವಾಗಿದೆ. ಡಿಸೆಂಬರ್ 4 ರಂದು ದೆಹಲಿ ವಿಧಾನಸಭೆಗೆ ಚುನಾವಣೆ ನಡೆಯಲಿದ್ದು, ಆಮ್ ಆದ್ಮಿ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಪಕ್ಷದ ಸಂಸ್ಥಾಪಕ ಅರವಿಂದ್ ಕೇಜ್ರಿವಾಲ್ ಅವರನ್ನು ಆಯ್ಕೆ ಮಾಡಲಾಗಿದೆ.
ಅರವಿಂದ್ ಕೇಜ್ರಿವಾಲ್ ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಆಯ್ಕೆ ಮಾಡಲಾದ ವಿಷಯವನ್ನು ಮಾಧ್ಯಮಗಳಿಗೆ ತಿಳಿಸಿದ ಪಕ್ಷದ ಮುಖಂಡ ಯೋಗೇಂದ್ರ ಯಾದವ್ ಅವರು, ಬಹಳ ಸಮಯದ ನಂತರ ದೆಹಲಿ ಮುಖ್ಯಮಂತ್ರಿ ಸ್ಥಾನಕ್ಕೆ ಭರವಸೆಯುಳ್ಳ ವ್ಯಕ್ತಿಯೊಬ್ಬರು ದೊರೆತ್ತಿದ್ದು, ನಾವು ನಮ್ಮ ಪಕ್ಷದ ಮುಖ್ಯಮಂತ್ರಿಯಾಗಿ ಅರವಿಂದ್ ಕೇಜ್ರಿವಾಲ್ ಅವರನ್ನು ಆಯ್ಕೆ ಮಾಡಿದ್ದೇವೆ ಎಂದು ಹೇಳಿದರು.
ನಂತರ ಮಾತನಾಡಿದ ಎಎಪಿ ಪಕ್ಷದ ಸಂಸ್ಥಾಪಕ ಮತ್ತು ಮುಖ್ಯಮಂತ್ರಿ ಅಭ್ಯರ್ಥಿ ಅರವಿಂದ್ ಕೇಜ್ರಿವಾಲ್ ಅವರು, ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಎಎಪಿ ಪಕ್ಷ ಅಧಿಕಾರಕ್ಕೆ ಬರುವ ವಿಶ್ವಾಸವಿದೆ ಎಂದು ಹೇಳಿದರು. 'ಭ್ರಷ್ಟಾಚಾರವನ್ನು ನಿಯಂತ್ರಿಸುವಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಎರಡೂ ಪಕ್ಷಗಳು ವಿಫಲವಾಗಿದ್ದಲ್ಲದೆ, ಅವುಗಳೇ ಭ್ರಷ್ಟಾಚಾರದಲ್ಲಿ ತೊಡಗಿದ್ದವು. ನಮ್ಮ ಎಎಪಿ ಪಕ್ಷ ಅಧಿಕಾರಕ್ಕೆ ಬಂದ ಬಳಿಕ ಖಂಡಿತವಾಗಿಯೂ ಜನಲೋಕಪಾಲ್ ಬಿಲ್ ಅನ್ನು ಜಾರಿಗೆ ತರುತ್ತೇವೆ' ಎಂದು ಕೇಜ್ರಿವಾಲ್ ತಿಳಿಸಿದರು.
ನಿನ್ನೆಯಷ್ಟೇ ಕೇಂದ್ರ ಚುನಾವಣಾ ಆಯೋಗ ಪಂಚರಾಜ್ಯಗಳ ಚುನಾವಣಾ ದಿನಾಂಕವನ್ನು ಪ್ರಕಟಿಸಿದ್ದು, ಡಿಸೆಂಬರ್ 4 ರಂದು ದೆಹಲಿಯಲ್ಲಿ ಚುನಾವಣೆ ನಡೆಯಲಿದೆ. ಅಂತೆಯೇ ಡಿಸೆಂಬರ್ 8ರಂದು ಮತಎಣಿಕೆ ಕಾರ್ಯ ನಡೆಯಲಿದ್ದು, ಅಂದೇ ಚುನಾವಣಾ ಫಲಿತಾಂಶ ಕೂಡ ಲಭಿಸಲಿದೆ. ಹೀಗಾಗಿ ನಿನ್ನೆಯಿಂದಲೇ ದೆಹಲಿಯಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಾಗಿದೆ.