ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಆನಂದ ಸಿಂಗ್ ಜಾಮೀನು ಅರ್ಜಿ ವಜಾ, ಬಂಧನ ಸಾಧ್ಯತೆ

ಬೇಲೇಕೇರಿ ಅದಿರು ನಾಪತ್ತೆ ಪ್ರಕರಣ ಸಂಬಂಧ ಬಳ್ಳಾರಿ ಜಿಲ್ಲೆ ವಿಜಯನಗರ ಶಾಸಕ ಆನಂದ್ ಸಿಂಗ್ ಅವರು ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಕೋರ್ಟ್ ವಜಾಗೊಳಿಸಿದ್ದು..

Lingaraj Badiger
Updated On : 7 Oct 2013, 6:09 am

ಬೆಂಗಳೂರು: ಬೇಲೇಕೇರಿ ಅದಿರು ನಾಪತ್ತೆ ಪ್ರಕರಣ ಸಂಬಂಧ ಬಳ್ಳಾರಿ ಜಿಲ್ಲೆ ವಿಜಯನಗರ ಶಾಸಕ ಹಾಗೂ ಮಾಜಿ ಸಚಿವ ಆನಂದ್ ಸಿಂಗ್ ಅವರು ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಸೋಮವಾರ ಕೋರ್ಟ್ ವಜಾಗೊಳಿಸಿದ್ದು, ಯಾವುದೇ ಕ್ಷಣದಲ್ಲೂ ಸಿಬಿಐ ಅವರನ್ನು ಬಂಧಿಸುವ ಸಾಧ್ಯತೆ ಇದೆ.

15 ದಿನಗಳ ಹಿಂದೆ ಆನಂದ್ ಸಿಂಗ್ ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ್ದ ಸಿಬಿಐ ವಿಶೇಷ ಕೋರ್ಟ್, ತೀರ್ಪನ್ನು ಕಳೆದ ಶನಿವಾರಕ್ಕೆ ಕಾಯ್ದಿರಿಸಿತ್ತು. ಆದರೆ ಕೆಲವು ತಾಂತ್ರಿಕ ಕಾರಣಗಳಿಂದಾಗಿ ಆದೇಶವನ್ನು ಕೋರ್ಟ್ ಇಂದಿಗೆ ಮುಂದೂಡಿತ್ತು. ಇಂದು ಅಂತೀಮ ತೀರ್ಪು ಪ್ರಕಟಿಸಿದ್ದು, ಅರ್ಜಿಯನ್ನು ವಜಾಗೊಳಿಸಿ ಆದೇಶಿಸಿದೆ. ಹೀಗಾಗಿ ವಿದೇಶ ಪ್ರವಾಸದಲ್ಲಿರುವ ಆನಂದ್ ಸಿಂಗ್ ವಿರುದ್ಧ ಸಿಬಿಐ ಲೂಕ್‌ಔಟ್ ನೋಟಿಸ್ ಜಾರಿಗೊಳಿಸುವ ಸಾಧ್ಯತೆ ಇದೆ.

ಸಮನ್ಸ್ ಬರುವ ಮುನ್ನವೇ ಆನಂದ್ ಸಿಂಗ್ ಚಿಕಿತ್ಸೆಗಾಗಿ ಸಿಂಗಾಪುರಕ್ಕೆ ತೆರಳಿದ್ದಾರೆ. ಅಲ್ಲದೆ ಈಗಾಗಲೇ ಹಲವು ಬಾರಿ ಆನಂದ್ ಸಿಂಗ್ ಸಿಬಿಐ ಕಚೇರಿಗೆ ವಿಚಾರಣೆಗಾಗಿ ಹಾಜರಾಗಿದ್ದಾರೆ. ಹೀಗಾಗಿ ಅವರನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸುವ ಅಗತ್ಯ ಇಲ್ಲ. ಆದ್ದರಿಂದ ಅವರಿಗೆ ಜಾಮೀನು ನೀಡಬೇಕು ಎಂದು ಆನಂದ್ ಸಿಂಗ್ ಪರ ವಕೀಲರು ವಾದಿಸಿದ್ದರು. ಆದರೆ ಇದಕ್ಕೆ ಸಿಬಿಐ ಪರ ವಕೀಲರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದರಿಂದ ಕೋರ್ಟ್ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ.

ಇದೇ ಪ್ರಕರಣದಲ್ಲಿ ಈಗಾಗಲೇ ಶಾಸಕರಾದ ಸುರೇಶ್ ಬಾಬು, ಸತೀಶ್ ಸೈಲ್ ಹಾಗೂ ನಾಗೇಂದ್ರ ಬಾಬು ಜೈಲು ಪಾಲಾಗಿದ್ದು, ಈಗ ಮತ್ತೊರ್ವ ಶಾಸಕ ಆನಂದ್ ಸಿಂಗ್ ಬಂಧನ ಭೀತಿ ಎದುರಿಸುತ್ತಿದ್ದಾರೆ. ಆದರೆ ಆನಂದ್ ಸಿಂಗ್ ಸಿಬಿಐ ಬಂಧನದಿಂದ ತಪ್ಪಿಸಿಕೊಳ್ಳಲು ಹೈಕೋರ್ಟ್ ಮೆಟ್ಟಿಲೇರಬಹುದು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement