ಸ್ಪಾಟ್ ಫಿಕ್ಸಿಂಗ್ ಮರು ತನಿಖೆಗೆ ಸುಪ್ರೀಂ ಆದೇಶ
ಸ್ಪಾಟ್ ಫಿಕ್ಸಿಂಗ್ ಪ್ರಕರಣವನ್ನು ಮರು ತನಿಖೆಗೊಳಪಡಿಸಬೇಕು ಎಂದು ಸುಪ್ರೀಂಕೋರ್ಟ್ ಅಭಿಪ್ರಾಯ ಪಟ್ಟಿದ್ದು, ಶ್ರೀನಿವಾಸನ್ ಅವರು ಮತ್ತೆ ಇಕ್ಕಟ್ಟಿಗೆ ಸಿಲುಕಿದ್ದಾರೆ.
ನವದೆಹಲಿ: ಐಪಿಎಲ್ ಸ್ಪಾಟ್ ಫಿಕ್ಸಿಂಗ್ ಪ್ರಕರಣವನ್ನು ಮರು ತನಿಖೆಗೊಳಪಡಿಸಬೇಕು ಎಂದು ಸುಪ್ರೀಂಕೋರ್ಟ್ ಅಭಿಪ್ರಾಯ ಪಟ್ಟಿದ್ದು, ಬಿಸಿಸಿಐ ಅಧ್ಯಕ್ಷ ಶ್ರೀನಿವಾಸನ್ ಅವರು ಮತ್ತೆ ಇಕ್ಕಟ್ಟಿಗೆ ಸಿಲುಕಿದ್ದಾರೆ.
ಐಪಿಎಲ್ ಸ್ಪಾಟ್ ಫಿಕ್ಸಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ವಿಚಾರಣೆ ನಡೆಸಿದ ನ್ಯಾ.ಎಕೆ ಪಟ್ನಾಯಕ್ ಮತ್ತು ಜೆಎಸ್ ಕೇಹರ್ ಅವರ ನೇತೃತ್ವದ ನ್ಯಾಯಪೀಠ, ಪಂಜಾಬ್ ಮತ್ತು ಹರ್ಯಾಣದ ನಿವೃತ್ತ ಮುಖ್ಯ ನ್ಯಾಯಮೂರ್ತಿ ಮುಕುಲ್ ಮುದ್ಗಲ್ ಅವರ ನೇತೃತ್ವದಲ್ಲಿ ಮೂವರು ಸದಸ್ಯರ ಸ್ವತಂತ್ರ್ಯ ತನಿಖಾ ತಂಡವನ್ನು ರಚಿಸಿದೆ. ಅಲ್ಲದೆ ಪ್ರಕರಣ ಸಂಬಂಧ ಸಂಪೂರ್ಣ ತನಿಖೆ ನಡೆಸಿ ನ್ಯಾಯಾಲಯಕ್ಕೆ ವರದಿ ನೀಡುವಂತೆ ತನಿಖಾ ತಂಡಕ್ಕೆ ಸೂಚಿಸಲಾಗಿದೆ. ನೂತನ ತನಿಖಾ ತಂಡದ ಮತ್ತಿಬ್ಬರು ಸದಸ್ಯರನ್ನು ಕೂಡ ನ್ಯಾಯಾಲಯ ಆಯ್ಕೆ ಮಾಡಿದ್ದು, ಹಿರಿಯ ವಕೀಲ ಎನ್.ನಾಗೇಶ್ವರ್ ರಾವ್ ಮತ್ತು ಅಸ್ಸಾಂ ಕ್ರಿಕೆಟ್ ಅಸೋಸಿಯೇಷನ್‌ನ ಸದಸ್ಯ ನಿಲಯದತ್ತ ಅವರು ತನಿಖಾ ತಂಡದಲ್ಲಿ ಕಾರ್ಯ ನಿರ್ವಹಿಸಲಿದ್ದಾರೆ.
'ಮುಂಬೈ ಪೊಲೀಸರು ನಡೆಸುತ್ತಿರು ತನಿಖೆ ಕೂಡ ಮುಂದುವರೆಯಲಿ. ಅಂತೆಯೇ ನೂತನ ತನಿಖಾ ತಂಡ ಕೂಡ ಸ್ವತಂತ್ರವಾಗಿ ತನಿಖೆ ನಡೆಸಿ ನ್ಯಾಯಾಲಯಕ್ಕೆ ವರದಿ ನೀಡಬೇಕು ಎಂದು ಸುಪ್ರೀಂ ಕೋರ್ಟ್ ಸೂಚಿಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ದೆಹಲಿ, ತಮಿಳುನಾಡು ಮತ್ತು ಮುಂಬೈ ಪೊಲೀಸರು ತನಿಖೆ ನಡೆಸುತ್ತಿದ್ದು, ಸುಪ್ರೀಂಕೋರ್ಟ್ ಸೂಚನೆಯಂತೆ ಈ ನೂತನ ತಂಡ ಕೂಡ ತನಿಖೆ ನಡೆಸಲಿದೆ. ಅಲ್ಲದೆ ಪ್ರಕರಣದ ವಿಚಾರಣೆ ಪೂರ್ಣಗೊಂಡು ಅಂತಿಮ ಆದೇಶ ಬರುವವರೆಗೂ ಶ್ರೀನಿವಾಸನ್ ಬಿಸಿಸಿಐ ಅಧ್ಯಕ್ಷರಾಗಿ ಅಧಿಕಾರ ಸ್ಪೀಕರಿಸದಂತೆಯೂ ನ್ಯಾಯಾಲಯ ಸೂಚನೆ ನೀಡಿದೆ.
ಇದಕ್ಕೂ ಮೊದಲು ಪ್ರಕರಣ ಸಂಬಂಧ ಮುಂಬೈ ಹೈಕೋರ್ಟ್ ನೀಡಿದ್ದ ಆದೇಶವನ್ನು ಪ್ರಶ್ನಿಸಿದ್ದ ಬಿಸಿಸಿಐ ಈ ಬಗ್ಗೆ ಸುಪ್ರೀಂಕೋರ್ಟ್‌ನಲ್ಲಿ ಮರುಪರಿಶೀಲನಾ ಅರ್ಜಿ ಸಲ್ಲಿಸಿತ್ತು. ಆದರೆ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ಬಿಸಿಸಿಐ ಪ್ರಸ್ತಾಪವನ್ನು ತಿರಸ್ಕರಿಸಿದ್ದು, ಪ್ರಕರಣದ ವಿಚಾರಣೆಯನ್ನು ನಾಳೆಗೆ ಮುಂದೂಡಿದೆ.