ದೆಹಲಿಯಲ್ಲಿ ಬಿಎಸ್ಪಿ ಶಾಸಕನ ಪತ್ನಿ ಹತ್ಯೆ
ಬಹುಜನ ಸಮಾಜ ಪಕ್ಷ(ಬಿಎಸ್ಪಿ)ದ ಶಾಸಕರ ಪತ್ನಿಯನ್ನು ಚಾಕುವಿನಿಂದ ಇರಿದು ಬರ್ಬರವಾಗಿ ಕೊಲೆ ಮಾಡಲಾಗಿದೆ.
ನವದೆಹಲಿ: ಬಹುಜನ ಸಮಾಜ ಪಕ್ಷ(ಬಿಎಸ್ಪಿ)ದ ಶಾಸಕರ ಪತ್ನಿಯನ್ನು ಚಾಕುವಿನಿಂದ ಇರಿದು ಬರ್ಬರವಾಗಿ ಕೊಲೆ ಮಾಡಲಾಗಿದೆ.
ಕಳೆದ ರಾತ್ರಿ ದೆಹಲಿಯ ಜಫರಬಾದ್ ಪ್ರದೇಶದಲ್ಲಿ ಉತ್ತರ ಪ್ರದೇಶದ ಬುಲಂದ್ಶಹರ್ ಬಿಎಸ್ಪಿ ಶಾಸಕ ಹಾಜಿ ಅಲೀಮ್ ಖಾನ್ ಅವರ ಪತ್ನಿಯ ಮೃತದೇಹ ಪತ್ತೆಯಾಗಿದೆ. ಆದರೆ ಶಾಸಕ ಖಾನ್ ಮಾತ್ರ ಹಜ್ ಯಾತ್ರೆಗೆ ತೆರಳಿದ್ದಾರೆ ಎನ್ನಲಾಗುತ್ತಿದೆ.
ಖಾನ್ ಪತ್ನಿ ರೆಹನಾ ಅವರನ್ನು ಕೊಲೆ ಮಾಡಿದ ದುಷ್ಕರ್ಮಿಗಳ ಬಗ್ಗೆ ಇನ್ನು ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಆದರೆ ಪೊಲೀಸರು ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದು, ಪ್ರಕರಣದ ತನಿಖೆ ಕೈಗೊಂಡಿದ್ದಾರೆ.
40 ವರ್ಷದ ರೆಹನಾ ಸಾವಿನ ಬಗ್ಗೆ ಹಲವು ಅನುಮಾನಗಳು ಹುಟ್ಟಿಕೊಂಡಿವೆ. ವೈಯಕ್ತಿಕ ಅಥವಾ ರಾಜಕೀಯ ದ್ವೇಷದಿಂದ ಈ ಕೊಲೆ ನಡೆದಿರುಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.