ಬಿಜೆಪಿಗೆ ಮುಖ್ಯಮಂತ್ರಿ ಚಂದ್ರು ಗುಡ್‌ಬೈ
ಹಿರಿಯ ನಟ ಹಾಗೂ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮುಖ್ಯಮಂತ್ರಿ ಚಂದ್ರು ಅವರು ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ಗುರುವಾರ ರಾಜಿನಾಮೆ..
ಬೆಂಗಳೂರು: ಹಿರಿಯ ನಟ ಹಾಗೂ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮುಖ್ಯಮಂತ್ರಿ ಚಂದ್ರು ಅವರು ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ಗುರುವಾರ ರಾಜಿನಾಮೆ ನೀಡಿದ್ದಾರೆ.
ಈ ಬಗ್ಗೆ ಬೆಂಗಳೂರಿನಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಚಂದ್ರು, ವೈಯಕ್ತಿಕ ಕಾರಣಗಳ ಹಿನ್ನೆಲೆಯಲ್ಲಿ ತಾವು ಬಿಜೆಪಿಗೆ ರಾಜಿನಾಮೆ ನೀಡಿರುವುದಾಗಿ ತಿಳಿಸಿದ್ದಾರೆ. ಅಲ್ಲದೆ ಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಶಿ ಅವರಿಗೆ ರಾಜಿನಾಮೆ ಪತ್ರ ಸಲ್ಲಿಸಿರುವುದಾಗಿ ಹೇಳಿದ್ದಾರೆ.
ಪಕ್ಷದಲ್ಲಿ ಯಾವುದೇ ಸ್ಥಾನಮಾನ ದೊರಕದ್ದಕ್ಕೆ ಬೇಸರಗೊಂಡಿದ್ದ ಚಂದ್ರು ಇದೀಗ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗುತ್ತಿದ್ದಾರೆ ಎನ್ನಲಾಗುತ್ತಿದೆ. ಆದರೆ ಇದನ್ನ ತಳ್ಳಿಹಾಕಿದ ಚಂದ್ರು, ತಾವು ಯಾವುದೇ ಪಕ್ಷ ಸೇರುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಮುಂದೆ ಕನ್ನಡ ಪರ ಹೋರಾಟದಲ್ಲಿ ತೊಡಗಿಸಿಕೊಳ್ಳುತ್ತೇನೆ. ಸಂಸತ್‌ನಲ್ಲಿ ಕನ್ನಡ ಪರ ಧ್ವನಿ ಅಗತ್ಯವಿದೆ. ಹೀಗಾಗಿ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬೆಂಗಳೂರಿನ ಯಾವುದಾದರೂ ಒಂದು ಕ್ಷೇತ್ರದಿಂದ ಸ್ಪರ್ಧಿಸುವ ಬಗ್ಗೆ ಚಿಂತನೆ ನಡೆದಿದೆ ಎಂದು ಚಂದ್ರು ತಿಳಿಸಿದ್ದಾರೆ.