ಶಾಸಕ ಆನಂದ್ ಸಿಂಗ್ ಅ.26ರವರೆಗೆ ಸಿಬಿಐ ವಶಕ್ಕೆ
ಬೇಲೇಕೇರಿ ಅದಿರು ನಾಪತ್ತೆ ಪ್ರಕರಣ ಸಂಬಂಧ ಬಂಧನಕ್ಕೊಳಗಾಗಿದ್ದ ಬಳ್ಳಾರಿ ಜಿಲ್ಲೆ ವಿಜಯನಗರ ...
ಬೆಂಗಳೂರು: ಬೇಲೇಕೇರಿ ಅದಿರು ನಾಪತ್ತೆ ಪ್ರಕರಣ ಸಂಬಂಧ ಬಂಧನಕ್ಕೊಳಗಾಗಿದ್ದ ಬಳ್ಳಾರಿ ಜಿಲ್ಲೆ ವಿಜಯನಗರ ಬಿಜೆಪಿ ಶಾಸಕ ಆನಂದ್ ಸಿಂಗ್ ಅವರನ್ನು ಅಕ್ಟೋಬರ್ 26ರವರೆಗೆ ಸಿಬಿಐ ವಶಕ್ಕೆ ನೀಡಲಾಗಿದೆ.
ಕಳೆದ ಒಂದು ವಾರದಿಂದ ಆನಂದ್ ಸಿಂಗ್ಗಾಗಿ ಹುಡುಕಾಟ ನಡೆಸಿದ್ದ ಸಿಬಿಐ ಅಧಿಕಾರಿಗಳು, ಇಂದು ಬೆಳಗ್ಗೆ ದೇವನಹಳ್ಳಿಯ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದಿಸಿದ್ದರು. ಬಳಿಕ ಅವರನ್ನು ಬೌರಿಂಗ್ ಆಸ್ಪತ್ರೆಗೆ ಕರೆದೊಯ್ದು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದರು. ಅಲ್ಲದೇ ಅವರನ್ನು ಗಂಗಾನಗರದಲ್ಲಿರುವ ಸಿಬಿಐ ಕಚೇರಿಗೆ ಕರೆದೊಯ್ದ ಅಧಿಕಾರಿಗಳು ಶಾಸಕರನ್ನು ತೀವ್ರ ವಿಚಾರಣೆಗೆ ಒಳಪಡಿಸಿದರು. ನಂತರ ಕೋರ್ಟ್ಗೆ ಹಾಜರುಪಡಿಸಿ ಹೆಚ್ಚಿನ ವಿಚಾರಣೆಗಾಗಿ ತಮ್ಮ ವಶಕ್ಕೆ ನೀಡುವಂತೆ ಮನವಿ ಮಾಡಿದರು.
ಸಿಬಿಐ ಅಧಿಕಾರಿಗಳ ಮನವಿಯನ್ನು ಪುರಸ್ಕರಿಸಿದ ಸಿಬಿಐ ವಿಶೇಷ ಕೋರ್ಟ್, ಸಿಂಗ್ ಅವರನ್ನು ಅಕ್ಟೋಬರ್ 26ರ ವರೆಗೆ ಸಿಬಿಐ ವಶಕ್ಕೆ ಆದೇಶಿಸಿದೆ. ಅಲ್ಲದೆ ವಿಚಾರಣೆ ವೇಳೆ ಆರೋಪಿ ಆನಂದ್ ಸಿಂಗ್ ಮೇಲೆ ಒತ್ತಡ ಹೇರಬಾರದು, ಮಾನಸಿಕ ಮತ್ತು ದೈಹಿಕ ಕಿರುಕುಳ ನೀಡಬಾರದು ಹಾಗೂ ರಾತ್ರಿ 8 ಗಂಟೆಯ ನಂತರ ವಿಚಾರಣೆಗೆ ಒಳಪಡಿಸಬಾರದು ಎಂದು ಸಿಬಿಐ ಅಧಿಕಾರಿಗಳಿಗೆ ಕೋರ್ಟ್ ಸೂಚಿಸಿದೆ.
ಅಕ್ಟೋಬರ್ 7ರಂದು ಬೇಲೇಕೇರಿ ಅದಿರು ನಾಪತ್ತೆ ಪ್ರಕರಣ ಸಂಬಂಧ ನಿರೀಕ್ಷಣಾ ಜಾಮೀನು ಕೋರಿ ಆನಂದ್ ಸಿಂಗ್ ಸಲ್ಲಿಸಿದ್ದ ಅರ್ಜಿಯನ್ನು ಸಿಬಿಐ ವಿಶೇಷ ಕೋರ್ಟ್ ವಜಾಗೊಳಿಸಿತ್ತು. ಇದಾದ ಬಳಿಕ ಸಿಬಿಐ ಆನಂದ್ ಸಿಂಗ್ ವಿರುದ್ಧ ಲುಕ್ಔಟ್ ನೋಟಿಸ್ ಜಾರಿ ಮಾಡಿತ್ತು.
ಈಗಾಗಲೇ ಇದೇ ಪ್ರಕರಣ ಸಂಬಂಧ ಕಂಪ್ಲಿ ಶಾಸಕ ಸುರೇಶ್ ಬಾಬು, ಕೂಡ್ಲಿಗಿ ಶಾಸಕ ನಾಗೇಂದ್ರ ಬಾಬು ಹಾಗೂ ಕಾರವಾರ ಶಾಸಕ ಸತೀಶ್ ಸೈಲ್ ಬಂಧನವಾಗಿದೆ. ಸದ್ಯ ಸೈಲ್ ಪೆರೋಲ್ ಪಡೆದು ಹೊರ ಬಂದಿದ್ದಾರೆ.