ಬಿಜೆಪಿಗೆ ಬಿಎಸ್ವೈ ವಾಪಸ್ಗೆ ಆಡ್ವಾಣಿ ಅಸ್ತು
ಮಾಜಿ ಮುಖ್ಯಮಂತ್ರಿ ಹಾಗೂ ಕೆಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಬಿಜೆಪಿಗೆ ವಾಪಸ್ ಬರುವುದು...
ನವದೆಹಲಿ: ಮಾಜಿ ಮುಖ್ಯಮಂತ್ರಿ ಹಾಗೂ ಕೆಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಬಿಜೆಪಿಗೆ ವಾಪಸ್ ಬರುವುದು ಬಹುತೇಕ ಖಚಿತವಾಗಿದ್ದು, ಇದಕ್ಕೆ ಬಿಜೆಪಿ ಹಿರಿಯ ನಾಯಕ ಎಲ್.ಕೆ.ಆಡ್ವಾಣಿ ಅವರು ಅಸ್ತು ಎಂದಿದ್ದಾರೆ ಎಂದು ಪಕ್ಷದ ಉನ್ನತ ಮೂಲಗಳು ತಿಳಿಸಿವೆ.
ಇಷ್ಟು ದಿನ ಯಡಿಯೂರಪ್ಪ ಬಿಜೆಪಿ ಮರು ಸೇರ್ಪಡೆಗೆ ಅಡ್ಡಿಯಾಗಿದ್ದ ಆಡ್ವಾಣಿ, ಇದೀಗ ಒಪ್ಪಿಗೆ ಸೂಚಿಸಿದ್ದಾರೆ ಎನ್ನಲಾಗಿದೆ.
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಯಡಿಯೂರಪ್ಪ ಅವರು ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳುವುದಾಗಿ ಹೇಳಿದ್ದರು. ಅಲ್ಲದೆ ಕೆಜೆಪಿಯನ್ನು ಎನ್ಡಿಎದ ಅಂಗ ಪಕ್ಷವೆಂದು ಪರಿಗಣಿಸುವಂತೆ ಕೇಂದ್ರದ ನಾಯಕರಿಗೆ ಪತ್ರ ಬರೆದಿದ್ದರು. ಆದರೆ ಇದಕ್ಕೆ ಲೋಕಸಭೆ ಪ್ರತಿಪಕ್ಷದ ನಾಯಕಿ ಸುಷ್ಮಾ ಸ್ವರಾಜ್ ಹಾಗೂ ಬಿಜೆಪಿ ಪ್ರಧಾನ ಕಾರ್ಯದರ್ಶಿ ಅನಂತಕುಮಾರ್ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ. ಆದರೆ ಮೈತ್ರಿ ಬದಲು ಸಂಪೂರ್ಣ ವಿಲೀನ ಮಾಡುವ ಬಗ್ಗೆ ಚರ್ಚೆ ನಡೆಯುತ್ತಿದೆ.