ದೆಹಲಿ: ಬಿಜೆಪಿ ಸಿಎಂ ಅಭ್ಯರ್ಥಿಯಾಗಿ ಹರ್ಷವರ್ಧನ್ ಆಯ್ಕೆ
ದೆಹಲಿ ಬಿಜೆಪಿ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಹರ್ಷವರ್ಧನ್ ಅವರು ಬುಧವಾರ ಆಯ್ಕೆಯಾಗಿದ್ದಾರೆ.
ನವದೆಹಲಿ: ದೆಹಲಿ ಬಿಜೆಪಿ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಹರ್ಷವರ್ಧನ್ ಅವರು ಬುಧವಾರ ಆಯ್ಕೆಯಾಗಿದ್ದಾರೆ.
ಈ ಸಂಬಂಧ ಇಂದು ಬಿಜೆಪಿ ಕೇಂದ್ರ ಕಚೇರಿಯಲ್ಲಿ ನಡೆದ ಬಿಜೆಪಿ ಸಂಸದೀಯ ಮಂಡಳಿ ಸಭೆಯಲ್ಲಿ, 2013ರ ದೆಹಲಿ ವಿಧಾನಸಭೆ ಚುನಾವಣೆಗೆ ಹರ್ಷವರ್ಧನ್ ಅವರನ್ನು ಪಕ್ಷದ ಸಿಎಂ ಅಭ್ಯರ್ಥಿಯಾಗಿ ಒಮ್ಮತದಿಂದ ಆಯ್ಕೆ ಮಾಡಲಾಗಿದೆ ಎಂದು ಬಿಜೆಪಿ ಅಧ್ಯಕ್ಷ ರಾಜನಾಥ್ ಸಿಂಗ್ ಅವರು ಪ್ರಕಟಿಸಿದ್ದಾರೆ.
ಸಂಸದೀಯ ಮಂಡಳಿ ಸಭೆಯ ಬಳಿಕ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ರಾಜನಾಥ್ ಸಿಂಗ್, ಹರ್ಷವರ್ಧನ್ ಅವರನ್ನು ಸಿಎಂ ಅಭ್ಯರ್ಥಿಯಾಗಿ ಆಯ್ಕೆ ಮಾಡಲಾಗಿದ್ದು, ಮತ್ತೊರ್ವ ಆಕಾಂಕ್ಷಿ ದೆಹಲಿ ಬಿಜೆಪಿ ಅಧ್ಯಕ್ಷ ವಿಜಯ್ ಗೋಯಲ್ ಅವರು ಪಕ್ಷದ ತೀರ್ಮಾನಕ್ಕೆ ಸಮ್ಮತಿ ಸೂಚಿಸಿದ್ದಾರೆ ಎಂದು ತಿಳಿಸಿದರು
ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಹರ್ಷವರ್ಧನ್ ಹಾಗೂ ವಿಜಯ್ ಗೋಯಲ್ ಮಧ್ಯೆ ಪ್ರಬಲ ಸ್ಪರ್ಧೆ ಏರ್ಪಟ್ಟಿತ್ತು. ಆದರೆ ಅಂತಿಮವಾಗಿ ಹರ್ಷವರ್ಧನ್ ಅವರು ಆಯ್ಕೆಯಾಗಿದ್ದಾರೆ.
ಹರ್ಷವರ್ಧನ್ ಅವರು ಚಿಕ್ಕ ವಯಸ್ಸಿನಿಂದಲೂ ಆರ್‌ಎಸ್‌ಎಸ್‌ನ ಸಕ್ರೀಯ ಕಾರ್ಯಕರ್ತರಾಗಿದ್ದರಿಂದ ಆರ್‌ಎಸ್‌ಎಸ್ ಅವರ ಬೆಂಬಲಕ್ಕೆ ನಿಂತಿದೆ ಎನ್ನಲಾಗಿದೆ.
ಬಿಜೆಪಿ ಹಿರಿಯ ನಾಯಕ ಎಲ್.ಕೆ.ಆಡ್ವಾಣಿ, ಲೋಕಸಭೆ ಪ್ರತಿಪಕ್ಷದ ನಾಯಕಿ ಸುಷ್ಮಾ ಸ್ವರಾಜ್, ನಿತಿನ್ ಗಡ್ಕರಿ, ಅರುಣ್ ಜೇಟ್ಲಿ ಹಾಗೂ ಅನಂತ್ ಕುಮಾರ್ ಅವರು ಸಂಸದೀಯ ಮಂಡಳಿ ಸಭೆಯಲ್ಲಿ ಭಾಗವಹಿಸಿದ್ದರು.
ಡಿಸೆಂಬರ್ 4ರಂದು ದೆಹಲಿ ವಿಧಾನಸಭೆಗೆ ಚುನಾವಣೆ ನಡೆಯಲಿದ್ದು, ಡಿ.8ರಂದು ಫಲಿತಾಂಶ ಪ್ರಕಟವಾಗಲಿದೆ.