ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಲಾಡ್ ವಿರುದ್ಧ ಪ್ರತಿಭಟನೆ: ಬಿಜೆಪಿ ನಾಯಕರ ಬಂಧನ

ಅಕ್ರಮ ಗಣಿಗಾರಿಕೆ ಆರೋಪ ಎದುರಿಸುತ್ತಿರುವ ವಾರ್ತಾ ಸಚಿವ ಸಂತೋಷ್ ಲಾಡ್ ಅವರನ್ನು..

Lingaraj Badiger
Updated On : 23 Oct 2013, 2:09 am

ಬೆಂಗಳೂರು: ಅಕ್ರಮ ಗಣಿಗಾರಿಕೆ ಆರೋಪ ಎದುರಿಸುತ್ತಿರುವ ವಾರ್ತಾ ಸಚಿವ ಸಂತೋಷ್ ಲಾಡ್ ಅವರನ್ನು ಸಚಿವ ಸಂಪುಟದಿಂದ ಕೈ ಬಿಡಬೇಕು ಎಂದು ಆಗ್ರಹಿಸಿ ಬಿಜೆಪಿ ನಗರದ ಫ್ರೀಡಂ ಪಾರ್ಕ್‌ನಲ್ಲಿ ಬುಧವಾರ ಪ್ರತಿಭಟನೆ ನಡೆಸಿತು.

ಪ್ರೀಡಂ ಪಾರ್ಕ್‌ನಿಂದ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಪ್ರತಿಭಟನಾ ರ್ಯಾಲಿಯಲ್ಲಿ ತೆರಳಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಗೃಹ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರು. ಈ ವೇಳೆ ಪ್ರತಿಭಟನಾಕಾರರನ್ನು ತಡೆದ ಪೊಲೀಸರು, ಬಿಜೆಪಿ ನಾಯಕರನ್ನು ವಶಕ್ಕೆ ತೆಗೆದುಕೊಂಡರು.ಅಲ್ಲದೆ ಪ್ರತಿಭಟನಾಕಾರರನ್ನು ನಿಯಂತ್ರಿಸಲು ಲಘು ಲಾಠಿ ಪ್ರಹಾರ ಸಹ ನಡೆಸಿದರು.

ಇದಕ್ಕು ಮುನ್ನ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಅವರು, ಲಾಡ್ ವಿರುದ್ಧ ಎಸ್.ಆರ್ ಹಿರೇಮಠ್ ಅವರು ದಾಖಲೆ ಬಿಡುಗಡೆ ಮಾಡಿದ್ದಾರೆ. ಗವರ್ನರ್ ಸಹ ಲಾಡ್ ವಿರುದ್ಧ ತಗಾದೆ ತೆಗೆದಿದ್ದರು. ಆದರೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಲಾಡ್‌ರನ್ನು ರಕ್ಷಿಸುತ್ತಿದ್ದಾರೆ ಎಂದು ಆರೋಪಿಸಿದರು.

ಲಾಡ್‌ಗೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರ ಆಶೀರ್ವಾದವಿದೆ ಎಂದು ಈಶ್ವರಪ್ಪ ಹೇಳಿದರು.

ಇನ್ನು ಇದೇ ವೇಳೆ ಮಾತನಾಡಿದ ಮಾಜಿ ಉಪ ಮುಖ್ಯಮಂತ್ರಿ ಆರ್.ಅಶೋಕ್ ಅವರು, ಲಾಡ್ ವಿರುದ್ಧ ಎಲ್ಲ ದಾಖಲೆ ಬಿಡುಗಡೆಯಾಗಿವೆ. ಅವರು ಅಕ್ರಮ ಎಸಗಿದ್ದಾರೆ ಎಂದು ಲೋಕಾಯುಕ್ತ ವರದಿ ಹಾಗೂ ಸುಪ್ರೀಂ ಕೋರ್ಟ್ ಸ್ಪಷ್ಟವಾಗಿ ಹೇಳಿದೆ. ಅಲ್ಲದೆ ಅವರ ವಿರುದ್ಧ ಎಫ್‌ಐಆರ್ ಸಹ ದಾಖಲಾಗಿದೆ. ಇಷ್ಟಾದರೂ ಅವರನ್ನು ಸಂಪುಟದಿಂದ ವಜಾಗೊಳಿಸುತ್ತಿಲ್ಲ ಎಂದರು.

ಈ ವೇಳೆ ವರದಿಗಾರರೊಂದಿಗೆ ಮಾತನಾಡಿದ ಮಾಜಿ ಸಚಿವ ಸುರೇಶ್ ಕುಮಾರ್ ಅವರು ಲಾಡ್ ರಕ್ಷಣೆಯ ಹಿಂದಿನ ರಹಸ್ಯವೇನು ಎಂದು ಪ್ರಶ್ನಿಸಿದರು.

ಪಕ್ಷದ ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಶಿ ಅವರ ನೇತೃತ್ವದಲ್ಲಿ ನಡೆಯುತ್ತಿರುವ ಈ ಪ್ರತಿಭಟನೆಯಲ್ಲಿ ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ, ಮಾಜಿ ಸಚಿವ ಸಿ.ಟಿ.ರವಿ ಸೇರಿದಂತೆ ಹಲವು ಬಿಜೆಪಿ ನಾಯಕರು ಭಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement