ಆಂಧ್ರದಲ್ಲಿ ಮುಂದುವರೆದ ವರುಣನ ಆರ್ಭಟ: ಸಾವಿನ ಸಂಖ್ಯೆ 29ಕ್ಕೇರಿಕೆ
ಆಂಧ್ರಪ್ರದೇಶದಲ್ಲಿ ವರುಣನ ಆರ್ಭಟ ಶನಿವಾರವೂ ಮುಂದುವರೆದಿದ್ದು, ಮಳೆ ಸಂಬಂಧಿ ಘಟನೆಗಳಿಂದ ಸಾವಿಗೀಡಾದವರ ಸಂಖ್ಯೆ 29ಕ್ಕೆ ಏರಿಕೆಯಾಗಿದೆ.
ಹೈದರಾಬಾದ್: ಆಂಧ್ರಪ್ರದೇಶದಲ್ಲಿ ವರುಣನ ಆರ್ಭಟ ಶನಿವಾರವೂ ಮುಂದುವರೆದಿದ್ದು, ಮಳೆ ಸಂಬಂಧಿ ಘಟನೆಗಳಿಂದ ಸಾವಿಗೀಡಾದವರ ಸಂಖ್ಯೆ 29ಕ್ಕೆ ಏರಿಕೆಯಾಗಿದೆ.
ಸತತ ಸುರಿಯುತ್ತಿರುವ ಮಳೆಯಿಂದಾಗಿ ಜನಜೀವನ ಸಂಪೂರ್ಣ ಅಸ್ತವ್ಯಸ್ಥವಾಗಿದ್ದು, ಹಲವು ಕಡೆ ರಸ್ತೆ ಹಾಗೂ ರೈಲು ಸಂಚಾರಕ್ಕೆ ವ್ಯತ್ಯಯ ಉಂಟಾಗಿದೆ. ಅಲ್ಲದೆ ಪ್ರವಾಹದಿಂದಾಗಿ ರಾಜ್ಯದಲ್ಲಿ 4.34 ಲಕ್ಷ ಹೆಕ್ಟೇರ್ ಬೆಳೆ ಹಾನಿಯಾಗಿದೆ.
ಸಮರೋಪಾದಿಯಲ್ಲಿ ಪರಿಹಾರ ಕಾರ್ಯಗಳನ್ನು ಕೈಗೊಳ್ಳುವಂತೆ ಮುಖ್ಯಮಂತ್ರಿ ಎನ್.ಕಿರಣ್ ಕುಮಾರ್ ರೆಡ್ಡಿ ಅವರು ಇಂದು ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಭಾರಿ ಮಳೆಯಿಂದಾಗಿ ಆಂಧ್ರದಲ್ಲಿ ಸುಮಾರು 70 ಸಾವಿರ ಜನರನ್ನು ನಿರಾಶ್ರಿತ ಶಿಬಿರಗಳಿಗೆ ಸ್ಥಳಾಂತರಿಸಲಾಗಿದೆ ಎಂದು ಆಂಧ್ರ ಸರ್ಕಾರ ತಿಳಿಸಿದೆ.
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಈ ಪ್ರಮಾಣದಲ್ಲಿ ಮಳೆಯಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ 4ರಿಂದ 26 ಸೆ.ಮೀ.ನಷ್ಟು ಮಳೆಯಾಗಿದೆ ಎಂದು ಹವಾಮಾನ ಇಲಾಖೆ ಹೇಳಿದೆ.