ಕಲ್ಲಿದ್ದಲು ಹಗರಣ: ಪ್ರಧಾನಿ ವಿರುದ್ಧದ ಅರ್ಜಿ ವಜಾ
ಕಲ್ಲಿದ್ದಲು ನಿಕ್ಷೇಪ ಹಂಚಿಕೆ ಹಗರಣಕ್ಕೆ ಸಂಬಂಧಿಸಿದಂತೆ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಅವರ ವಿರುದ್ಧದ ತನಿಖೆಗೆ...
ನವದೆಹಲಿ: ಕಲ್ಲಿದ್ದಲು ನಿಕ್ಷೇಪ ಹಂಚಿಕೆ ಹಗರಣಕ್ಕೆ ಸಂಬಂಧಿಸಿದಂತೆ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಅವರ ವಿರುದ್ಧದ ತನಿಖೆಗೆ ಸುಪ್ರೀಂಕೋರ್ಟ್ ಮಂಗಳವಾರ ನಿರಾಕರಿಸಿದೆ.
ಕಲ್ಲಿದ್ದಲು ಹಗರಣದಲ್ಲಿ ಪ್ರಧಾನಿ ಸಿಂಗ್ ಅವರ ಪಾತ್ರದ ಕುರಿತಾಗಿ ತನಿಖೆ ನಡೆಸಬೇಕು ಎಂದು ಸುಪ್ರೀಂಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿತ್ತು. ಇಂದು ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಧೀಶರು, ಪ್ರಧಾನಿ ವಿರುದ್ಧ ಯಾವುದೇ ರೀತಿಯ ತನಿಖೆ ನಡೆಸಲು ಸಾಧ್ಯವಿಲ್ಲ ಎನ್ನುವ ಮೂಲಕ ಪ್ರಧಾನಿ ವಿರುದ್ಧ ದಾಖಲಾಗಿದ್ದ ಅರ್ಜಿಯನ್ನು ವಜಾಗೊಳಿಸಿದ್ದಾರೆ.
ಕಲ್ಲಿದ್ದಲು ನಿಕ್ಷೇಪ ಹಂಚಿಕೆ ಹಗರಣದಲ್ಲಿ ಪ್ರಧಾನಿ ಅವರ ಹೆಸರು ಬಲವಾಗಿ ಕೇಳಿ ಬಂದಿದ್ದರಿಂದ ಸಿಂಗ್ ವಿರುದ್ಧ ತನಿಖೆ ನಡೆಸಲು ಸಿಬಿಐಗೆ ಅವಕಾಶ ನೀಡಬೇಕು ಎಂದು ಕೋರಿ ವಕೀಲರಾದ ಎಂ.ಎಲ್ ಶರ್ಮಾ ಅವರು ಅರ್ಜಿ ಸಲ್ಲಿಸಿದ್ದರು.
ಇತ್ತೀಚೆಗಷ್ಟೇ ಸಿಬಿಐ ಉದ್ಯಮಿ ಕುಮಾರ ಮಂಗಲಂ ಬಿರ್ಲಾ ಮತ್ತು ಕಲ್ಲಿದ್ದಲು ಇಲಾಖೆಯ ನಿವೃತ್ತ ಕಾರ್ಯದರ್ಶಿ ಪಿಸಿ ಪಾರುಖ್ ವಿರುದ್ಧ ಎಫ್‌ಐಆರ್ ದಾಖಲಿಸಿತ್ತು. ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದ ಪಾರುಕ್ ಅವರು, ಒಂದು ವೇಳೆ ನಾನು ಆರೋಪಿಯಾಗಿದ್ದರೆ, ಕಡತಗಳಿಗೆ ಸಹಿ ಹಾಕಿದ ಪ್ರಧಾನಿ ಕೂಡಾ ಆರೋಪಿಯೇ ಎಂದಿದ್ದರು. ಈ ಹೇಳಿಕೆಯಿಂದಾಗಿ ಪ್ರಧಾನಿ ವಿರುದ್ಧ ಸಹ ತನಿಖೆಯಾಗಬೇಕು ಎಂದು ವಿಪಕ್ಷಗಳು ಆಗ್ರಹಿಸಿದ್ದವು. ಇದಕ್ಕೆ ತಿರುಗೇಟು ನೀಡಿದ್ದ ಪ್ರಧಾನಿ ಸಿಂಗ್, ಕಾನೂನಿನ ಮುಂದೆ ಯಾರು ದೊಡ್ಡವರಲ್ಲ ಹೀಗಾಗಿ ತನಿಖೆಗೆ ಒಳಪಡಲು ನಾನು ಸಿದ್ಧ ಎಂದಿದ್ದರು.