ಪಾಟ್ನಾ ಸರಣಿ ಸ್ಫೋಟ: ಪರಿಶೀಲನೆ ನಡೆಸಲು ಮುಂದಾದ ಕೇಂದ್ರ
ನವದೆಹಲಿ: ಭಾರತೀಯ ಜನತಾ ಪಕ್ಷ(ಬಿಜೆಪಿ)ದ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಅವರ ಹೂಂಕಾರ್ ರ್ಯಾಲಿ ವೇಳೆ ಪಾಟ್ನಾದ ಗಾಂಧಿ ಮೈದಾನದಲ್ಲಿ ಸಂಭವಿಸಿದ್ದ ಸ್ಫೋಟ ಕುರಿತಾಗಿ ಪರಿಶೀಲನೆ ನಡೆಸಲು ಕೇಂದ್ರ ಮುಂದಾಗಿದೆ ಎಂದು ಕೇಂದ್ರ ಗೃಹ ಸಚಿವ ಸುಶೀಲ್ ಕುಮಾರ್ ಶಿಂಧೆ ಅವರು ಮಂಗಳವಾರ ತಿಳಿಸಿದ್ದಾರೆ.
ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೋದಿ ಅವರ ರ್ಯಾಲಿ ವೇಳೆ ನಡೆದಿದ್ದ ಸ್ಫೋಟದ ಕುರಿತಾಗಿ ಪರಿಶೀಲನೆ ನಡೆಸಲು ಕೇಂದ್ರ ಸರ್ಕಾರ ನಿರ್ಧರಿಸಿದ್ದು, ಪರಿಶೀಲನೆ ನಡೆಸಲು ಕೇಂದ್ರ ಗೃಹ ಕಾರ್ಯದರ್ಶಿ, ಜಂಟಿ ಕಾರ್ಯದರ್ಶಿ ಮತ್ತು ರಾಷ್ಟ್ರೀಯ ತನಿಖಾ ದಳ(ಎಲ್‌ಐಎ)ದ ನಿರ್ದೇಶಕರಿಗೆ ಸೂಚನೆ ನೀಡಲಾಗಿದೆ ಎಂದರು.
ಕೇಂದ್ರ ಗೃಹ ಇಲಾಖೆ ಸೂಚನೆಯನ್ವಯ ಕೇಂದ್ರ ಗೃಹ ಕಾರ್ಯದರ್ಶಿ, ಜಂಟಿ ಕಾರ್ಯದರ್ಶಿಗಳು ಬಿಹಾರದ ಗಾಂಧಿ ಮೈದಾನದಲ್ಲಿ ಬೀಡು ಬಿಟ್ಟಿದ್ದು ಪರಿಶೀಲನೆ ನಡೆಸುತ್ತಿದ್ದಾರೆ.
ದಾಳಿಗಳು ಸಂಭವಿಸುವ ಸಾಧ್ಯತೆಗಳ ಹಿನ್ನೆಲೆಯಲ್ಲಿ ಕೇಂದ್ರ ಗುಪ್ತಚರ ಇಲಾಖೆಗೆ ಸಿಗುವ ಮಾಹಿತಿಯನ್ನು ಮುಂಚಿತವಾಗಿಯೇ ಆಯಾ ರಾಜ್ಯಗಳಿಗೆ ಸೂಚನೆ ನೀಡಲಾಗುತ್ತದೆ ಎಂದು ಶಿಂಧೆ ಹೇಳಿದ್ದಾರೆ.
ದೇಶದಲ್ಲಿ ರಾಜಕೀಯ ಪಕ್ಷಗಳು ನಡೆಸುವ ರ್ಯಾಲಿ ಹಾಗೂ ಮತ್ತಿತರ ರ್ಯಾಲಿಗಳ ಸಂದರ್ಭದಲ್ಲಿ ರಾಜ್ಯಗಳಿಗೆ ಮಾಹಿತಿ ರವಾನಿಸಲಾಗುತ್ತದೆ. ಅಲ್ಲದೆ ಎಚ್ಚರಿಕೆ ವಹಿಸುವಂತೆ ರಾಜ್ಯ ಪೊಲೀಸರಿಗೆ ನಿದೇಶಿಸಿರುವುದಾಗಿ ಹೇಳಿದ್ದಾರೆ.