ಕಡತ ನಾಪತ್ತೆ: ಪ್ರಧಾನಿ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ
ಕಲ್ಲಿದ್ದಲು ಹಗರಣದ ಕಡತಗಳ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಧಾನಿ ಸಿಂಗ್ ವಿರುದ್ಧ ಪ್ರತಿಪಕ್ಷ ಬಿಜೆಪಿ ತೀವ್ರ ವಾಗ್ದಾಳಿ ನಡೆಸಿದೆ.
ನವದೆಹಲಿ: ಕಲ್ಲಿದ್ದಲು ನಿಕ್ಷೇಪ ಹಂಚಿಕೆ ಹಗರಣದ ಕಡತಗಳ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಧಾನಿ ಮನಮೋಹನ್ ಸಿಂಗ್ ಅವರ ವಿರುದ್ಧ ಪ್ರತಿಪಕ್ಷ ಬಿಜೆಪಿ ತೀವ್ರ ವಾಗ್ದಾಳಿ ನಡೆಸಿದೆ.
ಲೋಕಸಭೆಯಲ್ಲಿ ಪ್ರಧಾನಿ ಸಿಂಗ್ರನ್ನು ತೀವ್ರ ತರಾಟೆಗೆ ತೆಗೆದುಕೊಂಡ ಲೋಕಸಭೆ ಪ್ರತಿಪಕ್ಷ ನಾಯಕಿ ಸುಷ್ಮಾ ಸ್ವರಾಜ್ ಅವರು, ಕಲ್ಲಿದ್ದಲು ಕಡತಗಳ ನಾಪತ್ತೆ ಪ್ರಕರಣವು ಕಳವು ಪ್ರಕರಣವಾಗಿದ್ದು, ಈ ಬಗ್ಗೆ ಇದುವೆರೆವಿಗೂ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸದೆ ಇರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ ಎಂದು ಟೀಕಿಸಿದ್ದಾರೆ.
'ಕಲ್ಲಿದ್ದಲು ನಿಕ್ಷೇಪ ಹಂಚಿಕೆ ಪ್ರಕರಣ ಬಹುದೊಡ್ಡ ಭ್ರಷ್ಟಾಚಾರ ಪ್ರಕರಣವಾಗಿದ್ದು, ಇಂತಹ ಗಂಭೀರ ಪ್ರಕರಣದ ಕಡತಗಳು ನಾಪತ್ತೆಯಾಗಿರುವುದು ಮತ್ತು ನಾಪತ್ತೆ ಕುರಿತಂತೆ ಯಾವುದೇ ಎಫ್ಐಆರ್ ದಾಖಲಾಗದೆ ಇರುವುದು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಸ್ವತಃ ಸಿಬಿಐ ಅಧಿಕಾರಿಗಳು ಪ್ರಕರಣದ ಕುರಿತಂತೆ ಪ್ರಧಾನಿ ಮನಮೋಹನ್ ಸಿಂಗ್ ಅವರನ್ನು ವಿಚಾರಣೆಗೊಳಪಡಿಸುವ ಅಗತ್ಯವಿದೆ ಎಂದು ಹೇಳಿದ್ದರು. ಹೀಗಾಗಿ ಪ್ರಧಾನಿ ಸಿಂಗ್ ನೈತಿಕ ಹೊಣೆಹೊತ್ತು ಸ್ವಯಂ ಪ್ರೇರಿತರಾಗಿ ವಿಚಾರಣೆಗೊಳಪಡಲಿ ಎಂದು ಸುಷ್ಮಾ ಸ್ವರಾಜ್ ಹೇಳಿದರು.
ರಾಜ್ಯಸಭೆಯಲ್ಲಿ ಮೋದಿ ವಿರುದ್ಧ 'ಕೈ' ಗುಡುಗು
ಅತ್ತ ಲೋಕಸಭೆಯಲ್ಲಿ ಕಲ್ಲಿದ್ದಲು ಕಡತ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಪ್ರಧಾನಿ ಸಿಂಗ್ ಅವರ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದರೆ, ಇತ್ತ ರಾಜ್ಯಸಭೆಯಲ್ಲಿ ಕಾಂಗ್ರೆಸ್ ಸದಸ್ಯರು ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ನಿನ್ನೆ ಗುಜರಾತ್ ಹಿರಿಯ ಪೊಲೀಸ್ ಅಧಿಕಾರಿ ಡಿಜಿ ವಂಜಾರಾ ಅವರು ಬರೆದಿರುವ ಪತ್ರದ ಕುರಿತು ಮೋದಿ ವಿರುದ್ಧ ತೀವ್ರ ವಾಗ್ದಾಳಿ ನಡೆಸುತ್ತಿರುವ ಕಾಂಗ್ರೆಸ್ ಸದಸ್ಯರು, ಮೋದಿ ಅವರು ಕೂಡಲೇ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.