ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಕಳಕಿಂತರಿಗೆ ಚುನಾವಣಾ ಟಿಕೆಟ್: ಸುಪ್ರೀಂನಲ್ಲಿ ಕೇಂದ್ರಕ್ಕೆ ಹಿನ್ನಡೆ

ಕಳಂಕಿತರಿಗೆ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ನೀಡದಿರುವ ಆದೇಶವನ್ನು ಪುನರ್ ಪರಿಶೀಲಿಸಬೇಕೆಂಬ ಕೇಂದ್ರದ ಮನವಿಯನ್ನು "ಸುಪ್ರೀಂ' ತಳ್ಳಿಹಾಕಿದೆ.

Srinivasa Murthy VN
Updated On : 4 Sept 2013, 5:52 am

ನವದೆಹಲಿ: ಕಳಂಕಿತ ಸದಸ್ಯರಿಗೆ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ನೀಡದಿರುವ ನ್ಯಾಯಾಲಯದ ಆದೇಶವನ್ನು ಪುನರ್ ಪರಿಶೀಲಿಸಬೇಕೆಂಬ ಕೇಂದ್ರ ಸರ್ಕಾರದ ಮನವಿಯನ್ನು ಸುಪ್ರೀಂ ಕೋರ್ಟ್ ತಳ್ಳಿಹಾಕಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ವಿಚಾರಣೆಯನ್ನು ಕೈಗೆತ್ತಿಕೊಂಡ ನ್ಯಾಯಾಲಯ, ಕಳಂಕಿತ ರಾಜಕಾರಣಿಗಳಿಗೆ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ನೀಡಬಾರದೆಂಬ ತನ್ನ ಹಿಂದಿನ ಆದೇಶವನ್ನು ಎತ್ತಿ ಹಿಡಿಯಿತು. ಮನಮೋಹನ್ ಸಿಂಗ್ ನೇತೃತ್ವದಲ್ಲಿ ಆಗಸ್ಟ್ 22ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಕಳಂಕಿತ ಅಥವಾ ನ್ಯಾಯಾಲಯದಲ್ಲಿ ವಿಚಾರಣಾಧೀನರಾಗಿರುವ ರಾಜಕಾರಣಿಗಳಿಗೆ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ನೀಡುವ ಪ್ರಸ್ತಾಪಕ್ಕೆ ಅಂಗೀಕಾರ ನೀಡಲಾಗಿತ್ತು.

ಆದರೆ ಕೇಂದ್ರ ಸರ್ಕಾರದ ಈ ಪ್ರಸ್ತಾಪಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದ ನ್ಯಾಯಾಲಯ ಜುಲೈ 10 2013ರಂದು ಕಳಂಕಿತ ರಾಜಕಾರಣಿಗಳಿಗೆ ಚುನಾವಣೆಯಲ್ಲಿ ಸ್ಪರ್ಧಿಸುವ ಅವಕಾಶ ನೀಡಬಾರದು ಎಂದು ಮಹತ್ವದ ಆದೇಶ ನೀಡಿತ್ತು. ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿದ್ದ ಕೇಂದ್ರ ಸರ್ಕಾರ, ಸುಪ್ರೀಂ ಕೋರ್ಟ್‌ನಲ್ಲಿ ಆದೇಶವನ್ನು ಪುನರ್ ಪರಿಶೀಲಿಸುವಂತೆ ಮನವಿ ಸಲ್ಲಿಸಿತ್ತು. ಆದರೆ ಇಂದು ನ್ಯಾಯಾಲಯ ಕೇಂದ್ರ ಸರ್ಕಾರದ ಮನವಿಯನ್ನು ತಿರಸ್ಕರಿಸಿದೆ.

ಈ ಹಿಂದೆ ನ್ಯಾಯಾಲಯದ ಆದೇಶವನ್ನು ತೀವ್ರವಾಗಿ ವಿರೋಧಿಸಿದ್ದ ರಾಜಕೀಯ ಪಕ್ಷಗಳು, ನ್ಯಾಯಾಲಯದ ಆದೇಶವನ್ನು ದುರುಪಯೋಗ ಪಡಿಸಿಕೊಳ್ಳುವ ಸಾಧ್ಯತೆ ಇದೆ. ಸಂಸತ್ತಿನ ಪ್ರಾಧಾನ್ಯತೆಯನ್ನು ಕಾಪಾಡುವುದು ನಮ್ಮ ಕರ್ತವ್ಯವಾಗಿದ್ದು, ಸಂಸತ್ತಿನಲ್ಲಿ ಕೈಗೊಂಡ ನಿರ್ಣಯಗಳನ್ನು ಗೌರವಿಸಬೇಕು. ಅಗತ್ಯ ಬಿದ್ದರೆ ಮಸೂದೆಗಳಿಗೆ ತಿದ್ದುಪಡಿ ಮಾಡಲಾಗುವುದು ಎಂದು ಕಾಂಗ್ರೆಸ್ ನೇತೃತ್ವದಲ್ಲಿ ನಡೆದ ಸರ್ವಪಕ್ಷ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿತ್ತು.

ಕಳಂಕಿತ ರಾಜಕಾರಣಿಗಳಿಗೆ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ನೀಡುವ ಕೇಂದ್ರ ಸರ್ಕಾರದ ನಿಲುವಿಗೆ ನ್ಯಾಯಾಲಯ ತಣ್ಣೀರೆರಚಿದ್ದು, ಇದರಿಂದ ಕೇಂದ್ರ ಸರ್ಕಾರಕ್ಕೆ ತೀವ್ರ ಹಿನ್ನಡೆಯಾದಂತಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement