ಲೋಕಸಭೆಯಲ್ಲಿ ಪ್ರತಿಧ್ವನಿಸಿದ 'ಚೀನಾ ಅತಿಕ್ರಮಣ'
ಚೀನಾದಿಂದ ಭಾರತದ ಭೂಭಾಗ ಅತಿಕ್ರಮಣ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಸಮಾಜವಾದಿ...
ನವದೆಹಲಿ: ಚೀನಾದಿಂದ ಭಾರತದ ಭೂಭಾಗ ಅತಿಕ್ರಮಣ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಸಮಾಜವಾದಿ ಪಕ್ಷ(ಎಸ್ಪಿ)ದ ಮುಖ್ಯಸ್ಥ ಮುಲಾಯಂ ಸಿಂಗ್ ಯಾದವ್, ಕೇಂದ್ರ ಸರ್ಕಾರ ದುರ್ಬಲ ವಿದೇಶಾಂಗ ನೀತಿ ಹೊಂದಿದೆ ಎಂದು ಆರೋಪಿಸಿದರು.
ಇಂದು ಲೋಕಸಭೆಯಲ್ಲಿ ಮಾತನಾಡಿದ ಮುಲಾಯಂ ಸಿಂಗ್ ಯಾದವ್ ಅವರು, ಚೀನಾ ಅತಿಕ್ರಮಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು. ಭಾರತದ ಭೂಭಾಗದಲ್ಲಿ ತನ್ನ ಅಸ್ಥಿತ್ವ ಸ್ಥಾಪಿಸಲು ಚೀನಾ ಅತಿಕ್ರಮಣ ಮಾಡುತ್ತಿದೆ. ಈ ಸಂಬಂಧ ಕೇಂದ್ರ ಸರ್ಕಾರ ಇಲ್ಲಿಯವರೆಗೆ ಯಾವುದೇ ಕಠಿಣ ಕ್ರಮಕ್ಕೆ ಮುಂದಾಗದೆ ಇರುವುದನ್ನು ನೋಡಿದರೆ ನಮ್ಮ ವಿದೇಶಾಂಗ ನೀತಿ ಎಷ್ಟು ದುರ್ಬಲವಾಗಿದೆ ಎಂಬುದನ್ನು ತೋರಿಸುತ್ತದೆ ಎಂದರು.
ಇದೇ ವೇಳೆ, ಅತಿಕ್ರಮಣಕ್ಕೆ ಸಂಬಂಧಿಸಿದಂತೆ ಚೀನಾ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಇಲ್ಲಿಯವರೆಗೂ ಕೇಂದ್ರ ಸರ್ಕಾರಕ್ಕೆ ಸಾಧ್ಯವಾಗಿಲ್ಲ. ಹೀಗಾಗಿ ಗಡಿ ರಕ್ಷಣೆ ವಿಚಾರದಲ್ಲಿ ಸರ್ಕಾರ ದುರ್ಬಲ ನೀತಿ ಹೊಂದಿದ್ದು, ಕೇಂದ್ರ ಸರ್ಕಾರ ಆಡಳಿತ ನಡೆಸುವ ನೈತಿಕತೆ ಕಳೆದುಕೊಂಡಿದೆ ಎಂದು ಕಿಡಿಕಾರಿದರು. ಈ ಸಂಬಂಧ ಪ್ರತಿಕ್ರಿಯಿಸುವಂತೆ ಸರ್ಕಾರವನ್ನು ಒತ್ತಾಯಿಸಿದರು.
ದಿನೇ ದಿನೇ ಡಾಲರ್ ಎದುರು ರೂಪಾಯಿ ಮೌಲ್ಯ ಕಳೆದುಕೊಳ್ಳಲುತ್ತಿದ್ದರು ಸ್ಥಿರತೆ ಕಾಪಾಡಲು ಸಾಧ್ಯವಾಗದೆ ಇರುವುದು ಸರ್ಕಾರದ ದೌರ್ಬಲ್ಯಗಳನ್ನು ಎತ್ತಿ ತೋರಿಸುತ್ತಿದೆ. ಇದೆಲ್ಲವನ್ನು ಗಮನಿಸಿದರೆ ಕೇಂದ್ರ ಸರ್ಕಾರ ಎಲ್ಲಾ ರಂಗಗಳಲ್ಲಿಯೂ ಸಮರ್ಥ ಆಡಳಿತ ನೀಡುವಲ್ಲಿ ವಿಫಲವಾಗಿದೆ ಎಂದು ದೂರಿದರು.
ಇದಕ್ಕೆ ಪ್ರತಿಕ್ರಿಯಿಸಿದ ಸಂಸದೀಯ ವ್ಯವಹಾರಗಳ ಸಚಿವ ಕಮಲ್ನಾಥ್ ಅವರು, ದೇಶದ ಗಡಿ ರಕ್ಷಣೆಗೆ ಸರ್ಕಾರ ಬದ್ಧವಾಗಿದ್ದು, ಚೀನಾ ಅತಿಕ್ರಮಣ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಸೂಕ್ತ ಕ್ರಮಗಳನ್ನು ಕೈಗೊಂಡಿದೆ ಎಂದು ಹೇಳಿದರು.
ಗಡಿ ರಕ್ಷಣೆ ವಿಚಾರದಲ್ಲಿ ಸರ್ಕಾರ ಅಗತ್ಯ ಕ್ರಮಗಳನ್ನು ತೆಗೆದುಕೊಂಡಿದೆ. ಮುಂದೆ ಇಂತಹ ಪ್ರಮಾದಗಳು ಸಂಭವಿಸದಂತೆ ನೋಡಿಕೊಳ್ಳಲಾಗುತ್ತದೆ. ಅಲ್ಲದೆ ನೆರೆ ರಾಷ್ಟ್ರಗಳ ವಿರುದ್ಧ ಹೋರಾಡಲು ಅಗತ್ಯ ಕ್ರಮಗಳನ್ನು ತೆಗೆದುಕೊಂಡಿದೆ. ಪ್ರತಿಪಕ್ಷಗಳು ಆರೋಪಿಸುವಂತೆ ಕೇಂದ್ರ ವಿದೇಶಾಂಗ ನೀತಿ ದುರ್ಬಲವಾಗಿಲ್ಲ ಎಂದು ಪ್ರತಿಕ್ರಿಯಿಸಿದರು.