ಸಿಆರ್ಪಿಎಫ್ ಶಿಬಿರದ ಮೇಲೆ ದಾಳಿ: 3 ಉಗ್ರರ ಹತ್ಯೆ
ಜಮ್ಮು ಕಾಶ್ಮೀರದ ಸೋಫಿಯನ್ ಜಿಲ್ಲೆಯ ಗಾಗ್ರೋನ್ನ ಕೇಂದ್ರಿಯ ಮೀಸಲು ಪೊಲೀಸ್ ಪಡೆ...
ಶ್ರೀನಗರ: ಜಮ್ಮು ಕಾಶ್ಮೀರದ ಸೋಫಿಯನ್ ಜಿಲ್ಲೆಯ ಗಾಗ್ರೋನ್ನ ಕೇಂದ್ರಿಯ ಮೀಸಲು ಪೊಲೀಸ್ ಪಡೆ(ಸಿಆರ್ಪಿಎಫ್)ಶಿಬಿರದ ಮೇಲೆ ದಾಳಿ ನಡೆಸಿದ ಮೂವರು ಉಗ್ರರನ್ನು ಶನಿವಾರ ಪೊಲೀಸರು ಹತ್ಯೆ ಮಾಡಿದ್ದಾರೆ.
ಇಂದು ಮಧ್ಯಾಹ್ನ ಸಿಆರ್ಪಿಎಫ್ ಸಿಬಿರದ ಮೇಲೆ ಗುಂಡಿನ ದಾಳಿ ನಡೆಸಿದ ಶಂಕಿತ ಉಗ್ರರ ಮೇಲೆ ಪೊಲೀಸರು ಪ್ರತಿ ದಾಳಿ ನಡೆಸಿ, ಮೂವರು ಉಗ್ರರನ್ನು ಹತ್ಯೆ ಮಾಡಿದ್ದಾರೆ. ಹತರಾದ ಉಗ್ರರ ಬಳಿಯಿದ್ದ ಮೂರು ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. ಆದರೆ ಉಗ್ರರ ಗುರುತು ಇನ್ನೂ ಪತ್ತೆಯಾಗಿಲ್ಲ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಈ ಮಧ್ಯೆ, ಘಟನೆಯ ಸುದ್ದಿ ತಿಳಿಯುತ್ತಿದ್ದಂತೆ ಸೋಫಿಯನ್ ಪಟ್ಟಣದಲ್ಲಿ ನಾಗರಿಕ ಸಂಘಟನೆಗಳು ಪೊಲೀಸರ ವಿರುದ್ಧ ಪ್ರತಿಭಟನೆ ನಡೆಸುತ್ತಿವೆ. ಉದ್ರಿಕ್ತ ಪ್ರತಿಭಟನಾಕಾರರು ಹಲವು ಪೊಲೀಸ್ ಠಾಣೆಗಳ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಸುದ್ದಿ ತಿಳಿದ ಕೂಡಲೆ ಹಿರಿಯ ಪೊಲೀಸ್ ಅಧಿಕಾರಿಗಳು ಘಟನಾ ಸ್ಥಳಕ್ಕೆ ತಲುಪಿದ್ದು, ಪರಿಸ್ಥಿತಿಯನ್ನು ಹತೋಟಿಗೆ ತರಲು ಪ್ರಯತ್ನಿಸುತ್ತಿದ್ದಾರೆ.