ಮಾತುಕತೆ ನಂತರ ಪ್ರಧಾನಿ ಅಭ್ಯರ್ಥಿ ನಿರ್ಧಾರ: ರಾಜನಾಥ್ ಸಿಂಗ್
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಪ್ರಧಾನಿ ಅಭ್ಯರ್ಥಿ ಯಾರಾಗಬೇಕು ಎಂಬುದರ ಬಗ್ಗೆ ಎಲ್ಲರೊಂದಿಗೆ ಚರ್ಚಿಸಿದ..
ನವದೆಹಲಿ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಪ್ರಧಾನಿ ಅಭ್ಯರ್ಥಿ ಯಾರಾಗಬೇಕು ಎಂಬುದರ ಬಗ್ಗೆ ಎಲ್ಲರೊಂದಿಗೆ ಚರ್ಚಿಸಿದ ನಂತರ ಅಭ್ಯರ್ಥಿಯ ಹೆಸರನ್ನು ಘೋಷಿಸಲಾಗುವುದು ಎಂದು ಪಕ್ಷದ ಅಧ್ಯಕ್ಷ ರಾಜನಾಥ್ ಸಿಂಗ್ ಅವರು ಹೇಳಿದ್ದಾರೆ.
ಪಕ್ಷದ ಎಲ್ಲಾ ಮುಖಂಡರೊಂದಿಗೆ ಚರ್ಚಿಸಿದ ಬಳಿಕವೇ ಪ್ರಧಾನಿ ಅಭ್ಯರ್ಥಿ ಬಗ್ಗೆ ನಿರ್ಧರಿಸಲಾಗುವುದು ಎಂದು ಟಿವಿ ಚಾನೆಲ್‌ವೊಂದಕ್ಕೆ ನೀಡಿದ ಸಂದರ್ಶನದಲ್ಲಿ ರಾಜನಾಥ್ ಸಿಂಗ್ ತಿಳಿಸಿದ್ದಾರೆ.
ಈ ಮುಧ್ಯೆ, ಪಕ್ಷದ ಪ್ರಧಾನಿ ಅಭ್ಯರ್ಥಿ ಬಗ್ಗೆ ಚರ್ಚೆಗಳು ನಡೆಯುತ್ತಿದ್ದು, ಶೀಘ್ರದಲ್ಲೇ ಅಭ್ಯರ್ಥಿಯ ಹೆಸರನ್ನು ಪ್ರಕಟಿಸಲಾಗುವುದು. ಪ್ರಧಾನಿ ಅಭ್ಯರ್ಥಿ ಯಾರಾಗಬೇಕು ಎಂಬುದರ ಬಗ್ಗೆ ಪಕ್ಷದಲ್ಲಿ ಯಾವುದೇ ಗೊಂದಲ ಇಲ್ಲ. ಎಲ್ಲವೂ ಸರಿ ಇದೆ ಎಂದು ಬಿಜೆಪಿ ವಕ್ತಾರ ಮುಕ್ತಾರ ಅಬ್ಬಾಸ್ ನಖ್ವಿ ಅವರು ಹೇಳಿದ್ದಾರೆ.
ಪಕ್ಷದ ಮೂಲಗಳ ಪ್ರಕಾರ, ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಅವರನ್ನು ಪ್ರಧಾನಿ ಅಭ್ಯರ್ಥಿಯಾಗಿ ಘೋಷಿಸುವ ಸಂಬಂಧ ದೊಡ್ಡ ಒಪ್ಪಂದವೇ ನಡೆದಿದೆ ಎನ್ನಲಾಗಿದೆ.
ಐದು ರಾಜ್ಯಗಳ ವಿಧಾನಸಭೆ ಚುನಾವಣೆ ಫಲಿತಾಂಶ ಬರುವವರೆಗೂ ಪ್ರಧಾನಿ ಅಭ್ಯರ್ಥಿ ಘೋಷಿಸುವುದು ಬೇಡ ಎಂದು ಬಿಜೆಪಿ ಹಿರಿಯ ನಾಯಕ ಎಲ್.ಕೆ.ಆಡ್ವಾಣಿ ಅವರು ಮತ್ತೆ ಮೋದಿಗೆ ಅಡ್ಡಗಾಲು ಹಾಕಿದ್ದಾರೆ. ಒಂದು ವೇಳೆ ನಾಳೆಯೇ ಮೋದಿ ಅವರನ್ನು ಪ್ರಧಾನಿ ಅಭ್ಯರ್ಥಿಯಾಗಿ ಘೋಷಿಸಲೇ ಬೇಕೆಂದಿದ್ದರೆ ಆಡ್ವಾಣಿ ಅವರನ್ನು ಹೊರಗಿಟ್ಟೇ ಈ ನಿರ್ಧಾರ ತೆಗೆದುಕೊಳ್ಳುವುದು ರಾಜನಾಥ್ ಸಿಂಗ್ ಅವರಿಗೆ ಅನಿವಾರ್ಯವಾಗಿದೆ.
ಈ ಸಂಬಂಧ ನಾಳೆ ನಡೆಯುವ ಸಂಸದೀಯ ಮಂಡಳಿಯ ಸಭೆಯಲ್ಲೂ ಪ್ರಧಾನಿ ಅಭ್ಯರ್ಥಿ ಬಗ್ಗೆ ಒಮ್ಮತ ಮೂಡದಿದ್ದರೆ ರಾಜನಾಥ್ ಸಿಂಗ್ ಅವರು ಸಭೆಯನ್ನೆ ರದ್ದುಗೊಳಿಸಿ, ಔಪಚಾರಿಕವಾಗಿ ಮೋದಿಯ ಹೆಸರನ್ನು ಘೋಷಿಸುವ ಸಾಧ್ಯತೆ ಇದೆ. ರಾಷ್ಟ್ರೀಯ ಅಧ್ಯಕ್ಷರಾಗಿರುವ ರಾಜನಾಥ್ ಸಿಂಗ್ ಅವರಿಗೆ ಆ ಅಧಿಕಾರ ಇದೆ.