ಬಿಜೆಪಿಯೊಂದಿಗೆ ಕೆಜೆಪಿ ವಿಲೀನ ಇಲ್ಲ: ಬಿಎಸ್ವೈ
ಭಾರತೀಯ ಜನತಾ ಪಕ್ಷ(ಬಿಜೆಪಿ)ದೊಂದಿಗೆ ಕರ್ನಾಟಕ ಜನತಾ ಪಕ್ಷ(ಕೆಜೆಪಿ)ವನ್ನು ವಿಲೀನ ಮಾಡುವ ಪ್ರಶ್ನೆಯೇ ಇಲ್ಲ...
ಬೆಂಗಳೂರು: ಭಾರತೀಯ ಜನತಾ ಪಕ್ಷ(ಬಿಜೆಪಿ)ದೊಂದಿಗೆ ಕರ್ನಾಟಕ ಜನತಾ ಪಕ್ಷ(ಕೆಜೆಪಿ)ವನ್ನು ವಿಲೀನ ಮಾಡುವ ಪ್ರಶ್ನೆಯೇ ಇಲ್ಲ. ಆದರೆ ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಅವರನ್ನು ಪ್ರಧಾನಿ ಮಾಡಲು ಎಲ್ಲ ರೀತಿಯ ಸಹಕಾರ ನೀಡುವುದಾಗಿ ಕೆಜೆಪಿ ಅಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಗುರುವಾರ ಹೇಳಿದ್ದಾರೆ.
ಇಂದು ನಗರದಲ್ಲಿ ನಡೆಯುತ್ತಿರುವ ಕೆಜೆಪಿ ಕಾರ್ಯಕಾರಣಿ ಸಭೆಯಲ್ಲಿ ಮಾತನಾಡಿದ ಬಿಎಸ್ವೈ, ಎನ್ಡಿಎಗೆ ಕೆಜೆಪಿ ಬೆಂಬಲ ಇದೆ. ಎನ್ಡಿಎನ ಭಾಗವಾಗಿ ಕೆಜೆಪಿ ಮುಂಬರುವ ಲೋಕಸಭಾ ಚುನಾವಣೆಯನ್ನು ಎದುರಿಸಲಿದೆ ಎಂದು ತಿಳಿಸಿದ್ದಾರೆ.
ಕೆಜೆಪಿ ಬಿಜೆಪಿಯೊಂದಿಗೆ ಚುನಾವಣಾ ಮೈತ್ರಿ ಮಾಡಿಕೊಳ್ಳುವ ಮೂಲಕ ಪಕ್ಷ ತನ್ನ ಅಸ್ತಿತ್ವವನ್ನು ಉಳಿಸಿಕೊಳ್ಳಲಿದೆ ಎಂದು ಯಡಿಯೂರಪ್ಪ ಹೇಳಿದ್ದಾರೆ.
ಯಡೂರಪ್ಪ ಅವರ ನೇತೃತ್ವದಲ್ಲಿ ನಡೆಯುತ್ತಿರುವ ಈ ಸಭೆಯಲ್ಲಿ, ಮಾಜಿ ಸಚಿವೆ ಶೋಭಾ ಕರಂದ್ಲಾಜೆ, ಮಾಜಿ ಸಚಿವರಾದ ಸಿ.ಎಂ. ಉದಾಸಿ, ರೇಣುಕಾಚಾರ್ಯ, ಮತ್ತು ಸುನೀಲ್ ವಲ್ಯಾಪುರೆ ಹಾಗೂ ಧನಂಜಯ್ ಕುಮಾರ್ ಸೇರಿದಂತೆ ಹಲವು ನಾಯಕರು ಭಾಗವಹಿಸಿದ್ದರು.