ಕೇಂದ್ರ ಸರ್ಕಾರಿ ನೌಕರರ ಡಿಎ ಶೇ.10ರಷ್ಟು ಹೆಚ್ಚಳ
ಕೇಂದ್ರ ಸರ್ಕಾರಿ ನೌಕರರ ತುಟ್ಟಿ ಭತ್ಯೆಯನ್ನು ಶೇ.10ರಷ್ಟು ಹೆಚ್ಚಳ ಮಾಡುವ ಪ್ರಸ್ತಾವಕ್ಕೆ ಕೇಂದ್ರ ಸರ್ಕಾರ ಶುಕ್ರವಾರ ಒಪ್ಪಿಗೆ ಸೂಚಿಸಿದೆ.
ನವದೆಹಲಿ: ಕೇಂದ್ರ ಸರ್ಕಾರಿ ನೌಕರರ ತುಟ್ಟಿ ಭತ್ಯೆಯನ್ನು ಶೇ.10ರಷ್ಟು ಹೆಚ್ಚಳ ಮಾಡುವ ಪ್ರಸ್ತಾವಕ್ಕೆ ಕೇಂದ್ರ ಸರ್ಕಾರ ಶುಕ್ರವಾರ ಒಪ್ಪಿಗೆ ಸೂಚಿಸಿದೆ.
ಸದ್ಯ ಶೇ.80ರಷ್ಟು ಇರುವ ತುಟ್ಟಿಭತ್ಯೆಯನ್ನು ಶೇ.90ಕ್ಕೆ ಏರಿಸಬೇಕು ಎಂಬ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ ಇಂದು ಒಪ್ಪಿಗೆ ಸೂಚಿಸಿದ್ದು, ಇದರಿಂದ ಸುಮಾರು 50 ಲಕ್ಷ ಕೇಂದ್ರ ಸರ್ಕಾರಿ ನೌಕರರು ಹಾಗೂ 30 ಲಕ್ಷ ಪಿಂಚಣಿದಾರರಿಗೆ ಲಾಭವಾಗಲಿದೆ.
ಜುಲೈ 1ರಿಂದಲೇ ಪೂರ್ವಾನ್ವಯವಾಗುವಂತೆ ತುಟ್ಟಿ ಭತ್ಯೆ ಹೆಚ್ಚಳ ಜಾರಿಯಾಗಲಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ತುಟ್ಟಿ ಭತ್ಯೆಯು 2 ಅಂಕಿಯಷ್ಟು ಹೆಚ್ಚಾಗುತ್ತಿರುವುದು ಕಳೆದ 3 ವರ್ಷಗಳಲ್ಲಿ ಇದೇ ಮೊದಲು. 2010ರ ಸೆಪ್ಟೆಂಬರ್ನಲ್ಲಿ ಕೇಂದ್ರ ಸರ್ಕಾರವು ತುಟ್ಟಿ ಭತ್ಯೆಯನ್ನು ಶೇ.10ರಷ್ಟು ಏರಿಕೆ ಮಾಡಿತ್ತು. ಕೈಗಾರಿಕಾ ಕಾರ್ಮಿಕರಿಗೆ ಸಂಬಂಧಿಸಿದ ಅಖಿಲ ಭಾರತ ಗ್ರಾಹಕ ದರ ಸೂಚ್ಯಂಕದ(ಸಿಪಿಐ-ಐಡಬ್ಲ್ಯೂ) ಆಧಾರದಲ್ಲಿ ತುಟ್ಟಿ ಭತ್ಯೆಯನ್ನು ಹೆಚ್ಚಳ ಮಾಡಲಾಗುತ್ತದೆ.