ಬೇಲೇಕೇರಿ ಅದಿರು ನಾಪತ್ತೆ: ತಲೆಮರೆಸಿಕೊಂಡ 2 ಶಾಸಕರು
ಬೇಲೇಕೇರಿ ಬಂದರಿನಿಂದ ಅಕ್ರಮವಾಗಿ ಅದಿರು ರಫ್ತು ಮಾಡಿರುವ ಆರೋಪದ ಮೇಲೆ ಬಂಧನದ ಭೀತಿ..
ಬೆಂಗಳೂರು: ಬೇಲೇಕೇರಿ ಅದಿರು ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನದ ಭೀತಿ ಎದುರಿಸುತ್ತಿದ್ದ ಹೊಸಪೇಟೆ ಕ್ಷೇತ್ರದ ಬಿಜೆಪಿ ಶಾಸಕ ಆನಂದ್ ಸಿಂಗ್ ಮತ್ತು ಕೂಡ್ಲಿಗಿ ಪಕ್ಷೇತರ ಶಾಸಕ ನಾಗೇಂದ್ರ ತಲೆಮರೆಸಿಕೊಂಡಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಶಾಸಕರಿಗೆ ಸಿಬಿಐ ನೋಟಿಸ್ ಜಾರಿಮಾಡಿತ್ತು. ಆದರೆ ವಿಚಾರಣೆಗೆ ಹಾಜರಾಗದೆ ಶಾಸಕರಿಬ್ಬರು ಇನ್ನೂ ತಲೆ ಮರೆಸಿಕೊಂಡಿದ್ದು, ಶಾಸಕರ ಪತ್ತೆಗಾಗಿ ಸಿಬಿಐ ಅಧಿಕಾರಿಗಳು ಮಂಗಳವಾರ ಶೋಧಕಾರ್ಯ ಕೈಗೊಂಡಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆಯಷ್ಟೆ ಅನಾರೋಗ್ಯದ ಕಾರಣ ಸಿಂಗಾಪುರದಲ್ಲಿ ಚಿಕಿತ್ಸೆ ಪಡೆಯುತ್ತಿರುವುದರಿಂದ ವಿಚಾರಣೆಗಾಗಿ ಸಿಬಿಐ ಅಧಿಕಾರಿಗಳ ಮುಂದೆ ಹಾಜರಾಗಲು ಸಾಧ್ಯವಾಗಿಲ್ಲ. ಈ ಹಿನ್ನೆಲೆಯಲ್ಲಿ ತನಗೆ ನಿರೀಕ್ಷಣಾ ಜಾಮೀನು ನೀಡಬೇಕು ಎಂದು ಆನಂದ್ ಸಿಂಗ್ ವಕೀಲರು ಮೂಲಕ ಸಿಬಿಐ ಕೋರ್ಟ್ಗೆ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದರು.
ಬೇಲೇಕೇರಿ ಅದಿರು ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಂಪ್ಲಿ ಶಾಸಕ ಸುರೇಶ್ ಬಾಬು ಹಾಗೂ ಸತೀಶ್ ಸೈಲ್ ಅವರನ್ನು ಬಂಧಿಸಿರುವ ಅಧಿಕಾರಿಗಳು ವಿಚಾರಣೆಗೆ ಒಳಪಡಿಸಿದ್ದಾರೆ. ನಿನ್ನೆಯಷ್ಟೆ ಬಳ್ಳಾರಿ ಹಾಗೂ ಹೊಸಪೇಟೆ ಸೇರಿದಂತೆ ಇತರ ಪ್ರದೇಶಗಳ ಅದಿರು ಸಾಗಣೆ ಟ್ರೇಡರ್ಸ್ಗಳು ಹಾಗೂ ಟ್ರಾನ್ಸ್ಪೋರ್ಟ್ ಸಂಸ್ಥೆಗಳ ಮಾಲೀಕರನ್ನು ಸಿಬಿಐ ಕಚೇರಿಗೆ ಕರೆಸಿ ವಿಚಾರಣೆ ನಡೆಸಿದ್ದರು.